ಪುಂಜಾಲಕಟ್ಟೆ

ಬಂಟ್ವಾಳ ಕ್ಷೇತ್ರದಲ್ಲಿ ಗರಿಷ್ಠ ಹಕ್ಕುಪತ್ರ ವಿತರಣೆ: ರೈ

ಬಂಟ್ವಾಳ: ರಾಜ್ಯದಲ್ಲೇ ಮೊದಲ ಬಾರಿಗೆ ಬಂಟ್ವಾಳ ವಿಧಾನಸಭಾ ಕ್ಷೇತ್ರ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಿಸಿರುವ ಹೆಗ್ಗಳಿಕೆಯನ್ನು ಹೊಂದಿದ್ದು ಜಿಲ್ಲೆಯಲ್ಲಿ 94ಸಿ ಅಡಿಯಲ್ಲಿ 70 ಸಾವಿರ ಅರ್ಜಿಗಳನ್ನು ಸ್ವೀಕರಿಸಿ ಹಕ್ಕುಪತ್ರ ನೀಡಲು ಕ್ರಮ ಕೈಗೊಳ್ಳಲಾಗಿದೆ. ಅದರಲ್ಲೂ ಬಂಟ್ವಾಳ ವಿಧಾನ ಸಭಾ ಕ್ಷೇತ್ರದಲ್ಲಿ ಅತೀ ಹೆಚ್ಚು ಫಲಾನುಭವಿಗಳಿಗೆ ಹಕ್ಕುಪತ್ರ ವಿತರಿಸಲಾಗಿದೆ ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಹೇಳಿದರು.


ಶನಿವಾರ ತಾಲೂಕಿನ ವಗ್ಗ ಪಚ್ಚಾಜೆ ಸಭಾ ಭವನದಲ್ಲಿ ವಗ್ಗವನ್ನು ಕೇಂದ್ರವಾಗಿರಿಸಿಕೊಂಡು ಸುತ್ತ ಮುತ್ತಲಿನ ಗ್ರಾಮಗಳನ್ನೊಳಗೊಂಡು ನಡೆದ ಜನಸಂಪರ್ಕ ಸಭೆಯನ್ನು ಉದ್ಘಾಟಿಸಿ ವಿವಿಧ ಸವಲತ್ತುಗಳನ್ನು ವಿತರಿಸಿ ಮಾತನಾಡಿದ ಅವರು ನಗರ ವ್ಯಾಪ್ತಿಯಲ್ಲಿ 94 ಸಿ.ಸಿ ಯಡಿ ಅರ್ಜಿ ಸ್ವೀಕಾರಕ್ಕೆ ನವೆಂಬರ್ ಅಂತ್ಯದವರೆಗೆ ಕಾಲಾವಕಾಶವಿದ್ದು ಈಗಾಗಲೇ 24 ಸಾವಿರ ಅರ್ಜಿಗಳನ್ನು ಸ್ವೀಕರಿಸಲಾಗಿದೆ ಎಂದರು.
ಬಡವರಿಗಾಗಿ ಸರ್ಕಾರ ಹತ್ತು ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದು ಇದನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವಲ್ಲಿ ಪ್ರಾಮಾಣಿಕ ಪ್ರಯತ್ನ ನಡೆಸಲಾಗಿದೆ ಎಂದು ತಿಳಿಸಿದ ಸಚಿವರು ಚುನಾವಣಾ ಸಂದರ್ಭದಲ್ಲಿ ಪಕ್ಷ ಪ್ರಣಾಳಿಕೆಯಲ್ಲಿ ನೀಡಿದ ಬಹುತೇಕ ಭರವಸೆಯನ್ನು ಈಡೇರಿಸಿದೆ ಎಂದರು.
ಕ್ಷೇತ್ರದ ಎಲ್ಲಾ ರಸ್ತೆಗಳನ್ನು ವಿವಿಧ ಯೋಜನೆಯಡಿ ವಿಶೇಷ ಆದ್ಯತೆಯಲ್ಲಿ ಅಭಿವೃದ್ಧಿ ಪಡಿಸಲಾಗಿದೆ. ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಿಸುವ ನಿಟ್ಟಿನಲ್ಲಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಅನುಷ್ಠಾನಕ್ಕೆ ತರಲಾಗಿದ್ದು ಈ ಪೈಕಿ ಕಾಮಗಾರಿ ಅಂತಿಮ ಹಂತದಲ್ಲಿರುವ ಸಂಗಬೆಟ್ಟು ಬಹುಗ್ರಾಮ ಕುಡಿಯುವ ನೀರಿನ ಯೋಜನೆಯು ಶೀಘ್ರದಲ್ಲೆ ಲೋಕಾರ್ಪಣೆಗೊಳ್ಳಲಿದೆ ಎಂದರು.
ಸರಪಾಡಿ ಹಾಗೂ ಸಜೀಪ ಮುನ್ನೂರಿನಲ್ಲಿ ಈ ಯೋಜನೆಯ ಅನುಷ್ಠಾನಕ್ಕೆ ಶೀಘ್ರದಲ್ಲೇ ಸಚಿವ ಸಂಪುಟದಲ್ಲಿ ಮಂಜೂರಾತಿ ಪಡೆಯಲಾಗುವುದು ಎಂದರು.
ಬಂಟ್ವಾಳ ಪುರಸಭಾ ವ್ಯಾಪ್ತಿಯಲ್ಲಿ ಸುಮಾರು 62 ಕೋ.ರೂ. ವೆಚ್ಚದ ಒಳಚರಂಡಿ ಯೋಜನೆಗೆ ಮಂಜೂರಾತಿ ಪಡೆಯಲು ಮುಖ್ಯಮಂತ್ರಿಯವರಿಗೆ ಒತ್ತಡ ಹಾಕಲಾಗುತ್ತಿದೆ. ಸಿ.ಆರ್.ಎಫ್.ಯೋಜನೆಯಡಿ ಜಿಲ್ಲೆಯಲ್ಲೇ ಅತೀ ಹೆಚ್ಚು ಅನುದಾನ ಬಂಟ್ವಾಳ ವಿಧಾನ ಸಭಾ ಕ್ಷೇತ್ರಕ್ಕೆ ಮಂಜೂರಾತಿ ದೊರೆತಿದೆ ಎಂದ ಸಚಿವರು ಕ್ಷೇತ್ರದ ಪ್ರಮುಖ 4 ರಸ್ತೆಗಳನ್ನು ಮೇಲ್ದರ್ಜೆಗೇರಿಸಿ ಅಭಿವೃದ್ಧಿ ಪಡಿಸಲು ಸಂಬಂಧ ಪಟ್ಟ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಹೇಳಿದರು.
ಇದೇ ವೇಳೆ ವಿವಿಧ ಗ್ರಾಮ ಪಂಚಾಯತ್ ವ್ಯಾಪ್ತಿಯ ಸುಮಾರು 400 ಮಂದಿಗೆ ಹಕ್ಕು ಪತ್ರ,100 ಮಂದಿಗೆ ಪಿಂಚಣಿ ಪ್ರಮಾಣ ಪತ್ರ,ಪ್ರಾಕೃತಿಕ ವಿಕೋಪದಡಿ ಸಹಾಯ ಧನ ಸೇರಿದಂತೆ ವಿವಿಧ ಯೋಜನೆಗಳ ಮಂಜುರಾತಿ ಪತ್ರವನ್ನು ಫಲಾನುಭವಿಗಳಿಗೆ ವಿತರಿಸಲಾಯಿತು.
ತಾ.ಪಂ.ಅಧ್ಯಕ್ಷ ಚಂದ್ರಹಾಸ ಕರ್ಕೇರ,ಉಪಾಧ್ಯಕ್ಷ ಅಬ್ಬಾಸ್ ಅಲಿ, ಸ್ಥಾಯಿ ಸಮಿತಿ ಅಧ್ಯಕ್ಷೆ ಧನಲಕ್ಷ್ಮಿಸಿ.ಬಂಗೇರ, ಬಂಟ್ವಾಳ ಪುರಸಭಾ ಅಧ್ಯಕ್ಷ ರಾಮಕೃಷ್ಣ ಆಳ್ವ, ಬಂಟ್ವಾಳ ನಗರಾಭಿವೃದ್ಧಿ ಪ್ರಾಧಿಕಾರದ ನಿಕಟ ಪೂರ್ವ ಅಧ್ಯಕ್ಷ ಪಿಯೂಸ್ ಎಲ್.ರೋಡ್ರಿಗಸ್, ಮಂಗಳೂರು ಸಹಾಯಕ ಆಯುಕ್ತ ರೇಣುಕಾಪ್ರಸಾದ್,ಶ್ರೀ ಕ್ಷೇತ್ರ ಕಾರಿಂಜದ ಆಡಳಿತ ಸಮಿತಿ ಅಧ್ಯಕ್ಷ ಪಿ.ಜಿನರಾಜ ಆರಿಗ, ಜಿ.ಪಂ. ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ, ಪದ್ಮಶೇಖರ ಜೈನ್, ತಾಲೂಕು ಅಕ್ರಮ ಸಕ್ರಮ ಸಮಿತಿಯ ಅಧ್ಯಕ್ಷ ಮಾಯಿಲಪ್ಪ ಸಾಲ್ಯಾನ್, ತಾ.ಪಂ. ಸದಸ್ಯರಾದ ಪ್ರಭಾಕರ ಪ್ರಭು, ಸಂಜೀವ ಪೂಜಾರಿ, ಬೇಬಿ ಕೃಷ್ಣಪ್ಪ, ಸ್ವಪ್ನ ವಿಶ್ವನಾಥ ಪೂಜಾರಿ, ಕಾವಳಪಡೂರು ಗ್ರಾ.ಪಂ.ಅಧ್ಯಕ್ಷ ಪ್ರಮೋದ್ ಕುಮಾರ್ ರೈ,ಪಿಲಾತಬೆಟ್ಟು ಗ್ರಾ.ಪಂ.ಅಧ್ಯಕ್ಷ ಚಂದ್ರಶೇಖರ್ ಶೆಟ್ಟಿ, ತಾ.ಪಂ ಕಾರ್ಯನಿರ್ವಹಣಾಧಿಕಾರಿ ಸಿಪ್ರಿಯನ್ ಮಿರಾಂದ, ವೃತ್ತ ನಿರೀಕ್ಷಕ ಮಂಜಯ್ಯ, ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಸಹಾಯಕ ಎಂಜಿನಿಯರ್ ಗಿರೀಶ್, ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್, ಲೋಕೋಪಯೋಗಿ ಕಾರ್ಯನಿರ್ವಾಹಕ ಅಭಿಯಂತರ ಉಮೇಶ್ ಭಟ್, ತಾಲೂಕು ಆರೋಗ್ಯಾಧಿಕಾರಿ ಡಾ. ದೀಪಾ ಪ್ರಭು, ಮೆಸ್ಕಾಂ ಇಓ ಉಮೇಶ್ಚಂದ್ರ, ನರೇಮದ್ರ ಬಾಬು, ಜಯಾನಂದ ಪೂಜಾರಿ ಮತ್ತು ತಾಲೂಕಿನ ವಿವಿಧ ಇಲಾಖಾಧಿಕಾರಿಗಳು, ಗ್ರಾ.ಪಂ.ಸದಸ್ಯರು ಉಪಸ್ಥಿತರಿದ್ದರು.
ಬಂಟ್ವಾಳ ತಹಶೀಲ್ದಾರ್ ಪುರಂದರ ಹೆಗ್ಡೆ ಸ್ವಾಗತಿಸಿ ಪ್ರಾಸ್ತಾವಿಸಿದರು. ಕಂದಾಯ ನಿರೀಕ್ಷಕ ನವೀನ್ ವಂದಿಸಿದರು. ಮಂಜು ವಿಟ್ಲ ಮತ್ತು ಆದಿರಾಜ್ ಜೈನ್‌ ಕಾರ್ಯಕ್ರಮ ನಿರೂಪಿಸಿದರು.

Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ