ಬಂಟ್ವಾಳ: ನಬಾರ್ಡ್ ಯೋಜನೆಯಡಿ 3 ಸಮುದಾಯ ಆರೋಗ್ಯ ಕೇಂದ್ರ, 4 ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ 5 ಆರೋಗ್ಯ ಉಪ ಕೇಂದ್ರಗಳ ಕಟ್ಟಡಗಳ ಪುನರ್ ನಿರ್ಮಾಣಕ್ಕೆ 21 ಕೋಟಿ ರುಪಾಯಿ ಅನುದಾನ ಬಿಡುಗಡೆಯಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ತಿಳಿಸಿದರು.
ದ.ಕ.ಜಿಲ್ಲಾ ಪಂಚಾಯಿತಿ, ಮಂಗಳೂರು ತಾಲೂಕು ಪಂಚಾಯಿತಿ, ಬಂಟ್ವಾಳ ತಾಲೂಕು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕರ್ನಾಟಕ ಆರೋಗ್ಯ ಪದ್ದತಿ ಅಭಿವೃದ್ದಿ ಮತ್ತು ಸುಧಾರಣ ಯೋಜನೆಯ ಆಶ್ರಯದಲ್ಲಿ ಸುಮಾರು 1.3 ಕೋಟಿ ರುಪಾಯಿ ವೆಚ್ಚದಲ್ಲಿ ಪುನರ್ ನಿರ್ಮಾಣಗೊಳ್ಳಲಿರುವ ಮಂಚಿ ಪ್ರಾಥಮಿಕ ಆರೋಗ್ಯ ಕೇಂದ್ರದ ನೂತನ ಕಟ್ಟಡ ಕಾಮಗಾರಿಗೆ ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಶಂಕುಸ್ಥಾಪನೆ ನೆರವೇರಿಸಿದರು.
ಬಳಿಕ ನಡೆದ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸಿಕ್ಕಿರುವ ಅವಕಾಶವನ್ನು ಸರಿಯಾಗಿ ಬಳಸಿಕೊಂಡು ಅಭಿವೃದ್ದಿ ಕೆಲಸಗಳನ್ನು ಮಾಡಿದ್ದೇನೆ ಎಂದರು.
ಬಂಟ್ವಾಳದ ತಾಲೂಕು ಆರೋಗ್ಯ ಕೇಂದ್ರ ಮುಂದಿನ ತಿಂಗಳು ಲೋಕಾರ್ಪಣೆ
ಮಾಣಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯಡಿ ಮಂಚಿ ಗ್ರಾಮವನ್ನು ಸೇರಿಸಿಕೊಳ್ಳಲಾಗಿದ್ದು ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದೆ, 100 ಹಾಸಿಗೆ ಆಸ್ಪತ್ರೆಯಾಗಿ ಮೇಲ್ದರ್ಜೆಗೇರಿರುವ ಬಂಟ್ವಾಳದ ತಾಲೂಕು ಆರೋಗ್ಯ ಕೇಂದ್ರದ ಕಾಮಗಾರಿ ಪ್ರಗತಿಯಲ್ಲಿದ್ದು ಮುಂದಿನ ತಿಂಗಳು ಲೋಕಾರ್ಪಣೆ ಆಗಲಿದೆ ಎಂದು ತಿಳಿಸಿದರು.
ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಆಹಾರ ಮತ್ತು ನಾಹರಿಕ ಸರಬರಾಜು ಖಾತೆ ಸಚಿವ ಯು.ಟಿ.ಖಾದರ್ ಮಾತನಾಡಿ ಬೇಡಿಕೆಗನುಗುಣವಾಗಿ ಎಲ್ಲಾ ಔಷಧಿಗಳು ಸರಕಾರಿ ಆಸ್ಪತ್ರೆಯಲ್ಲಿಯೇ ಸಿಗಬೇಕೆಂಬ ನಿಟ್ಟಿನಲ್ಲಿ 300 ಕೋಟಿ ರುಪಾಯಿ ಅನುದಾನವನ್ನು ಮುಖ್ಯಮಂತ್ರಿ ಬಿಡುಗಡೆ ಮಾಡಿದ್ದಾರೆ. ಆದ್ದರಿಂದ ಸಾರ್ವಜನಿಕರು ಸರ್ಕಾರದ ಎಲ್ಲಾ ಆರೋಗ್ಯ ಯೋಜನೆಗಳನ್ನು ಬಳಸಿಕೊಳ್ಳಿ ಎಂದರು.
ಮುಖ್ಯ ಅತಿಥಿಗಳಾಗಿ ಗೇರು ಅಭಿವೃದ್ದಿ ನಿಗಮದ ಅಧ್ಯಕ್ಷ ಬಿ.ಎಚ್.ಖಾದರ್, ಜಿ.ಪಂ.ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಸಾಹುಲ್ ಹಮೀದ್, ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ, ಮಮತಾಗಟ್ಟಿ, ಎಂ.ಎಸ್.ಮಹಮ್ಮದ್, ತಾ.ಪಂ.ಅಧ್ಯಕ್ಷ ಚಂದ್ರಹಾಸ ಕರ್ಕೆರಾ, ಉಪಾದ್ಯಕ್ಷ ಅಬ್ಬಾಸ್ ಅಲಿ, ಮಂಗಳೂರು ತಾ.ಪಂ.ಅಧ್ಯಕ್ಷ ಮಹಮ್ಮದ್ ಮೋನು, ತಾ.ಪಂ.ಸದಸ್ಯ ನಾರಾಯಣ ಶೆಟ್ಟಿ, ಮಂಚಿ ಗ್ರಾ.ಪಂ.ಅಧ್ಯಕ್ಷೆ ಪ್ರಮೀಳಾ, ಕೊಳ್ನಾಡು ಗ್ರಾ.ಪಂ.ಅಧ್ಯಕ್ಷ ಸುಭಾಷ್ಚಂದ್ರ ಶೆಟ್ಟಿ, ಇರಾ ಗ್ರಾ.ಪಂ.ಅಧ್ಯಕ್ಷ ಅಬ್ದುಲ್ ರಝಾಕ್, ಸಾಲೆತ್ತೂರು ಗ್ರಾ.ಪಂ.ಅಧ್ಯಕ್ಷೆ ಚಂದ್ರಾವತಿ, ಜಿಲ್ಲಾ ಆರೋಗ್ಯಾಧಿಕಾರಿ ಡಾ. ರಾಮಕೃಷ್ಣ ರಾವ್, ತಾ.ಪಂ. ಕಾರ್ಯನಿರ್ವಾಹಣಾಧಿಕಾರಿ ಸಿಪ್ರಿಯಾನ್ ಮಿರಾಂಡ, ಕೆಎಚ್‌ಎಸ್‌ಡಿಆರ್‌ಪಿ ಸಹಾಯಕ ಕಾರ್ಯನಿರ್ವಾಹಖ ಎಂಜಿನಿಯರ್ ರಘುಚಂದ್ರ ಹೆಬ್ಬಾರ್, ಮಂಚಿ ಪ್ರಾ.ಆ. ಕೇಂದ್ರದ ವೈದ್ಯಾಧಿಕಾರಿ ಡಾ. ವೇದಾವತಿ ಭಾಗವಹಿಸಿದ್ದರು.
ತಾಲೂಕು ಆರೋಗ್ಯಾಧಿಕಾರಿ ಡಾ, ದೀಪಾ ಪ್ರಭು ಸ್ವಾಗತಿಸಿದರು, ಹಿರಿಯ ಆರೋಗ್ಯ ಸಹಾಯಕ ಎಫ್.ಎನ್ ಧವಳೆ ವಂದಿಸಿದರು, ಜಯರಾಮ ಪೂಜಾರಿ ಕಾರ್ಯಕ್ರಮ ನಿರೂಪಿಸಿದರು.
ಜಿಪಂ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ಅವರು ನಿಗದಿತ ಸಮಯಕ್ಕೆ ಕಾರ್ಯಕ್ರಮಕ್ಕೆ ಆಗಮಿಸಿದ್ದು, ಶಂಕುಸ್ಥಾಪನೆ ನೆರವೇರಿಸಬೇಕಾಗಿದ್ದ ಸಚಿವ ರಮಾನಾಥ ರೈ ಅವರು ತಡವಾಗಿ ಆಗಮಿಸಿರುವುದರಿಂದ ಇನ್ನೊಂದು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಹಿನ್ನೆಲೆಯಲ್ಲಿ ನಿರ್ಗಮಿಸಿದರು. ಹಾಗೆಯೇ ನಿಗದಿತ ವೇಳೆಗೇ ಆಗಮಿಸಿದ್ದ ಆಹಾರ ಸಚಿವ ಯು.ಟಿ.ಖಾದರ್ ಅವರು ಉಸ್ತುವಾರಿ ಸಚಿವರ ಆಗಮನದ ತನಕ ಸ್ಥಳೀಯ ಪಕ್ಷದ ಕಾರ್ಯಕರ್ತರೂ ಹಾಗೂ ಆಶಾ ಕಾರ್ಯಕರ್ತೆಯರೊಂದಿಗೆ ಸಭೆ ನಡೆಸಿದರು.
Be the first to comment on "ಆರೋಗ್ಯ ಕೇಂದ್ರ ಕಟ್ಟಡಗಳಿಗೆ 21 ಕೋಟಿ ರೂ ಅನುದಾನ: ರಮಾನಾಥ ರೈ"