ಬಂಟ್ವಾಳ

ಬಂಟ್ವಾಳ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಡಾ. ಪುಂಡಿಕಾಯಿ ಗಣಪಯ್ಯ ಭಟ್

ಬಂಟ್ವಾಳ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಆಶ್ರಯದಲ್ಲಿ ಸಮ್ಮೇಳನ ಸ್ವಾಗತ ಸಮಿತಿ ಸಹಯೋಗದೊಂದಿಗೆ ಸಿದ್ಧಕಟ್ಟೆ ಸರಕಾರಿ ಪದವಿಪೂರ್ವ ಕಾಲೇಜಿನ ಫ್ರೌಡಶಾಲಾ ವಿಭಾಗದಲ್ಲಿ ಮಾ.25 ರಂದು ನಡೆಯಲಿರುವ ಬಂಟ್ವಾಳ ತಾಲೂಕು 17ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಡಾ. ಪುಂಡಿಕಾಯಿ ಗಣಪಯ್ಯ ಭಟ್ ಆಯ್ಕೆಯಾಗಿದ್ದಾರೆ ಎಂದು ದ.ಕ.ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪ್ರದೀಪ ಕುಮಾರ ಕಲ್ಕೂರ ಮತ್ತು ಬಂಟ್ವಾಳ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಕೆ.ಮೋಹನ್ ರಾವ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಅಧ್ಯಕ್ಷರ ವಿವರ:
ಡಾ. ಪುಂಡಿಕಾ ಗಣಪಯ್ಯ ಭಟ್ ಇವರು ಬಂಟ್ವಾಳ ತಾಲೂಕಿನ ವಿಟ್ಲದ ಬಳಿಯ ಪುಂಡಿಕಾಯವರು. ತಮ್ಮ ಕಾಲೇಜು ವಿದ್ಯಾಭ್ಯಾಸವನ್ನು ಮಂಗಳೂರಿನ ಸೈಂಟ್ ಎಲೋಶಿಯಸ್ ಕಾಲೇಜಿನಲ್ಲಿ ಪೂರೈಸಿದ ಶ್ರೀಯುತರು ೧೯೭೫ರಲ್ಲಿ ಮೈಸೂರು ವಿಶ್ವವಿದ್ಯಾನಿಲಯದಿಂದ ಪ್ರಾಚೀನ ಇತಿಹಾಸ ಮತ್ತು ಪ್ರಾಚ್ಯವಸ್ತುಶಾಸ್ತ್ರ ವಿಷಯದಲ್ಲಿ ಎಂ. ಎ. ಪದವಿಯನ್ನು ಪಡೆದರು. ನಂತರ ಪುಣೆಯ ಡೆಕ್ಕನ್ ಕಾಲೇಜು ಸಂಶೋಧನಾ ಸಂಸ್ಥೆಯಲ್ಲಿ ಮೂರು ವರ್ಷ ಕಾಲ ಸಂಶೋಧಕರಾಗಿ ಕೆಲಸ ಮಾಡಿದ ಇವರು ೧೯೭೯-೮೦ರ ಅವಯಲ್ಲಿ ಭಾರತ ಸರಕಾರದ ಸಾಂಸ್ಕೃತಿಕ ವಿನಿಮಯ ಯೋಜನೆಯ ಅಡಿಯಲ್ಲಿ ಗ್ರೀಸ್ ದೇಶಕ್ಕೆ ತೆರಳಿ ಒಂದುವರೆ ವರ್ಷ ಕಾಲ ಗ್ರೀಸ್ ಮತ್ತು ಇಂಗ್ಲೆಂಡ್ ದೇಶಗಳಲ್ಲಿ ಪ್ರಾಚ್ಯವಸ್ತು ಶಾಸ್ತ್ರದಲ್ಲಿ ವಿಶೇಷ ತರಬೇತಿಯನ್ನು ಪಡೆದುಕೊಂಡರು. ತುಳುನಾಡಿನ ಪ್ರಾಚೀನ ಇತಿಹಾಸ ಕುರಿತಂತೆ ಸಂಶೋಧನೆ ನಡೆಸಿ ೧೯೯೫ರಲ್ಲಿ ಮೈಸೂರು ವಿಶ್ವವಿದ್ಯಾನಿಲಯದಿಂದ ಇವರು ಪಿಎಚ್.ಡಿ. ಪದವಿಯನ್ನು ಪಡೆದರು. ೧೯೮೧ರಲ್ಲಿ ಮೂಡುಬಿದಿರೆಯಲ್ಲಿ ಶ್ರೀ ಧವಲಾ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿ ಸೇರಿದ ಪುಂಡಿಕಾಯವರು ಇತಿಹಾಸ ಅಧ್ಯಾಪನ ಕ್ಷೇತ್ರದಲ್ಲಿ ಮೂರು ದಶಕಗಳ ಅನುಭವವನ್ನು ಗಳಿಸಿದ್ದಾರೆ.
ತುಳುನಾಡಿನ ಇತಿಹಾಸ, ಸಂಸ್ಕೃತಿ, ವಾಸ್ತುಶಿಲ್ಪ ಮತ್ತು ಶಾಸನಗಳ ಅಧ್ಯಯನ ಡಾ. ಗಣಪಯ್ಯ ಭಟ್ ರವರ ಆಸಕ್ತಿಯ ಕ್ಷೇತ್ರಗಳು. ಈ ವಿಷಯಗಳಿಗೆ ಸಂಬಂಸಿದಂತೆ ಶ್ರೀಯುತರು ಕನ್ನಡ ಮತ್ತು ಇಂಗ್ಲೀಷ್ ಭಾಷೆಯಲ್ಲಿ ಹಲವಾರು ಸಂಶೋಧನ ಲೇಖನಗಳನ್ನು ಪ್ರಕಟಿಸಿದ್ದಾರೆ. ರಾಷ್ಟ್ರೀಯ ಮತ್ತು ರಾಜ್ಯಮಟ್ಟದ ವಿಚಾರಗೋಷ್ಠಿಗಳಲ್ಲಿ ಪ್ರಬಂಧಗಳನ್ನು ಮಂಡಿಸಿದ್ದಾರೆ. ಅಲ್ಲದೆ ಇವರ ನೂರಕ್ಕೂ ಹೆಚ್ಚು ಲೇಖನಗಳು ನಾಡಿನ ವಿವಿಧ ಪತ್ರಿಕೆಗಳಲ್ಲಿ ಮತ್ತು ಸ್ಮರಣ ಸಂಚಿಕೆಗಳಲ್ಲಿ ಪ್ರಕಟಗೊಂಡಿವೆ. ಡಾ. ಪುಂಡಿಕಾಯವರ ’ಯುರೋಪ್ ನೆನಪುಗಳು’ ಮತ್ತು ’ತೌಳವ’ ಎಂಬ ಎರಡು ಕೃತಿಗಳು ಕರ್ನಾಟಕ ಸಾಹಿತ್ಯ ಅಕಾಡೆಮಿಯ ಪುರಸ್ಕಾರವನ್ನೂ ಪಡೆದುಕೊಂಡಿವೆ. ಇವರ ’ಯುರೋಪ್ ನೆನಪುಗಳು’ ಕೃತಿಯು ಕರ್ನಾಟಕ ವಿಶ್ವವಿದ್ಯಾನಿಲಯ ಮತ್ತು ಕಲ್ಲಿಕೋಟೆ ವಿಶ್ವವಿದ್ಯಾನಿಲಯಗಳ ಪದವಿ ತರಗತಿಗಳಿಗೆ ಪಠ್ಯಪುಸ್ತಕವಾಗಿ ಅಂಗೀಕೃತವಾಗಿತ್ತು.
ಮಂಗಳೂರು ವಿಶ್ವವಿದ್ಯಾನಿಲಯದ ಪದವಿ ತರಗತಿಗಳ ಇತಿಹಾಸ ಅಧ್ಯಯನ ಮಂಡಳಿಯ ಸದಸ್ಯರಾಗಿ ಮೂರು ಅವಯಲ್ಲಿ ಕಾರ್ಯನಿರ್ವಹಿಸಿದ ಡಾ. ಭಟ್‌ರವರು ಕನ್ನಡ ಸಾಹಿತ್ಯ ಪರಿಷತ್, ಕರ್ನಾಟಕ ಇತಿಹಾಸ ಅಕಾಡೆಮಿ, ಇಂಡಿಯನ್ ಹಿಸ್ಟರಿ ಕಾಂಗ್ರೆಸ್, ಭಾರತೀಯ ಸ್ಥಳನಾಮ ಶಾಸ್ತ್ರಜ್ಞರ ಸಂಘ ಮೊದಲಾದ ಸಂಘಗಳ ಆಜೀವ ಸದಸ್ಯರು. ಇತಿಹಾಸ ಸಂಶೋಧನಾ ಕ್ಷೇತ್ರದಲ್ಲಿ ಸಕ್ರಿಯರಾಗಿರುವ ಇವರಿಗೆ ಹಂಪಿಯ ಕನ್ನಡ ವಿಶ್ವವಿದ್ಯಾನಿಲಯ ಮತ್ತು ಮಣಿಪಾಲ ವಿಶ್ವವಿದ್ಯಾನಿಲಯಗಳು ಪಿಎಚ್.ಡಿ. ಸಂಶೋಧನಾ ಮಾರ್ಗದರ್ಶಕರಾಗಿ ಮಾನ್ಯತೆ ನೀಡಿವೆ.
ಸಾಹಿತ್ಯಿಕ, ಸಾಮಾಜಿಕ ಹಾಗೂ ಸಾಂಸ್ಕೃತಿಕ ಸಂಘಟನೆಗಳಲ್ಲಿ ಸಕ್ರಿಯವಾಗಿರುವ ಡಾ. ಭಟ್‌ರವರು ಮೂಡುಬಿದಿರೆಯಲ್ಲಿ ನಡೆದ ೭೧ ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಕಾರ್ಯದರ್ಶಿಗಳಲ್ಲೊಬ್ಬರಾಗಿ, ಮಂಗಳೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯದರ್ಶಿಯಾಗಿ, ಮಂಗಳೂರು ವಿಶ್ವವಿದ್ಯಾನಿಲಯದ ಕನ್ನಡ ಭಾಷಾ ಅಭಿವೃದ್ಧಿ ಯೋಜನೆಯ ಸದಸ್ಯರಾಗಿ ಮತ್ತು ಕನ್ನಡ ಪುಸ್ತಕ ಪ್ರಾಕಾರದ ಸಗಟು ಖರೀದಿ ಯೋಜನೆಯ ಪುಸ್ತಕ ಆಯ್ಕೆ ಸಮಿತಿಯ ಸದಸ್ಯರಾಗಿಯೂ ಕಾರ್ಯನಿರ್ವಹಿಸಿದ್ದಾರೆ. ವರ್ಧಮಾನ ಪ್ರಶಸ್ತಿ ಪೀಠದ ಉಪಾಧ್ಯಕ್ಷರು, ಮೂಡುಬಿದಿರೆಯ ಸಮಾಜಮಂದಿರ ಸಭಾದ ಆಡಳಿತ ಮಂಡಳಿಯ ಸದಸ್ಯರು, ಸಮಾಜಮಂದಿರದ ದಸರಾ ಸಾಹಿತ್ಯ ಮತ್ತು ಸಾಂಸ್ಕೃತಿಕ ಉತ್ಸವದ ಸಂಚಾಲಕರು, ಆಳ್ವಾಸ್ ನುಡಿಸಿರಿಯ ಉಪಾಧ್ಯಕ್ಷರಲ್ಲೊಬ್ಬರು, ಮೂಡುಬಿದಿರೆ ರೋಟರಿ ಕ್ಲಬ್‌ನ ಸಕ್ರಿಯ ಸದಸ್ಯರು – ಹೀಗೆ ಹಲವಾರು ಸಂಘ-ಸಂಸ್ಥೆಗಳಲ್ಲಿ ಡಾ. ಪುಂಡಿಕಾ ಗಣಪಯ್ಯ ಭಟ್‌ರವರು ತಮ್ಮನ್ನು ತೊಡಗಿಸಿಕೊಂಡಿದ್ದಾರೆ ಎಂದು ದ.ಕ.ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪ್ರದೀಪ ಕುಮಾರ ಕಲ್ಕೂರ ಮತ್ತು ಬಂಟ್ವಾಳ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಕೆ.ಮೋಹನ್ ರಾವ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Recent Posts