ಜಿಲ್ಲಾ ಸುದ್ದಿ

ಕುಡಿಯುವ ನೀರು: ಸಾರ್ವಜನಿಕ ದೂರುಗಳಿಗೆ ತಕ್ಷಣ ಸ್ಪಂದನೆ- ಡಿಸಿ ಸೂಚನೆ

ಕುಡಿಯುವ ನೀರು ಸಮಸ್ಯೆಗೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ಬರುವ ಮನವಿಗಳಿಗೆ ತಕ್ಷಣವೇ ಸ್ಪಂದಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ.ಜಿ. ಜಗದೀಶ ಸೂಚಿಸಿದ್ದಾರೆ.

ಅವರು ಸೋಮವಾರ ತಮ್ಮ ಕಚೇರಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರಿನ ಸ್ಥಿತಿಗತಿ ಬಗ್ಗೆ ಚರ್ಚಿಸಲು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕುಡಿಯುವ ನೀರಿನ ಯೋಜನೆಗಳಿಗೆ ಅನುದಾನದ ಕೊರತೆ ಇಲ್ಲ. ಎಲ್ಲಾ ಸ್ಥಳೀಯ ಸಂಸ್ಥೆಗಳಿಗೆ ಅಗತ್ಯಾನುಸಾರ ಅನುದಾನ ಬಿಡುಗಡೆ ಮಾಡಲಾಗುತ್ತಿದೆ. ಇನ್ನೂ ಅನುದಾನ ಬೇಕಿದ್ದಲ್ಲಿ ಸೂಕ್ತ ಪ್ರಸ್ತಾವನೆ ಸಲ್ಲಿಸಬೇಕು. ನೀರಿನ ಸಮಸ್ಯೆಗಳು ತ್ವರಿತವಾಗಿ ಪರಿಹಾರವಾಗಬೇಕೆಂದು ಸರಕಾರದ ಆಶಯವಾಗಿದೆ ಎಂದು ಅವರು ಹೇಳಿದರು.
ಸಾರ್ವಜನಿಕರಿಗೆ ಆಯಾ ಗ್ರಾಮ ಪಂಚಾಯತ್ ಅಥವಾ ನಗರ ಸ್ಥಳೀಯ ಸಂಸ್ಥೆಗಳಲ್ಲೇ ನೀರಿನ ಸಮಸ್ಯೆಗಳಿಗೆ 24 ಗಂಟೆಯೊಳಗೆ ಪರಿಹಾರ ಸಿಗಬೇಕು. ಕುಡಿಯುವ ನೀರಿನ ಸಮಸ್ಯೆಗಳಿಗೆ ಮೇಲಿನ ಕಚೇರಿಗಳವರೆಗೆ ಸಾರ್ವಜನಿಕರು ಬರುವಂತಾಗಬಾರದು. ಈ ನಿಟ್ಟಿನಲ್ಲಿ ತ್ವರಿತವಾಗಿ ಕಾರ್ಯನಿರ್ವಹಿಸುವಂತೆ ಜಿಲ್ಲಾಧಿಕಾರಿಗಳು ಕಟ್ಟುನಿಟ್ಟಿನ ಸೂಚನೆ ನೀಡಿದರು.
ಕುಡಿಯುವ ನೀರಿನ ಸಮಸ್ಯೆ ತೀವ್ರಗೊಂಡ ಸಂದರ್ಭದಲ್ಲಿ ಹೊಸ  ಬೋರ್‍ವೆಲ್ ಕೊರೆಯಲು ಕಾಯದೆ, ಖಾಸಗೀ ಬೋರ್‍ವೆಲ್‍ಗಳನ್ನು ತಹಶೀಲ್ದಾರ್ ಮೂಲಕ ಅಭಿಗ್ರಹಣ ಮಾಡಿ, ಅಲ್ಲಿಂದ ನೀರು ಪಡೆದು ಸಾರ್ವಜನಿಕರಿಗೆ ಪೂರೈಕೆ ಮಾಡಬೇಕು. ಸ್ಥಳೀಯ ಮಟ್ಟದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮತ್ತು ಗ್ರಾಮಕರಣಿಕರು ಪರಿಶೀಲನೆ ಮಾಡಿ, ನೀರಿನ ಸಮಸ್ಯೆ ಎದುರಾಗಬಹುದಾದ ಪ್ರದೇಶಗಳನ್ನು ಗುರುತಿಸಿ, ಅಗತ್ಯ ಕ್ರಮ ಕೈಗೊಳ್ಳಬೇಕು. ಗ್ರಾ.ಪಂ.ಹಾಗೂ ಪಟ್ಟಣ ಪ್ರದೇಶಗಳಲ್ಲಿ ಟ್ಯಾಂಕರ್ ಮೂಲಕ ನೀರು ಪೂರೈಕೆಯ ಬಗ್ಗೆ ಪ್ರತೀ ವಾರ ಜಿಲ್ಲಾಧಿಕಾರಿ ಕಚೇರಿಗೆ ವರದಿ ನೀಡಲು ಡಾ.ಕೆ.ಜಿ. ಜಗದೀಶ ಸೂಚಿಸಿದರು.
ಹೊಸ ಕುಡಿಯುವ ನೀರಿನ ಯೋಜನೆಗಳಿಗೆ ವಿದ್ಯುತ್ ಸಂಪರ್ಕ ನೀಡಲು ಮೆಸ್ಕಾಂ ವಿಳಂಭಿಸಬಾರದು. ನದೀ ಪಾತ್ರದಲ್ಲಿ ತೋಟಗಳಿಗೆ ತುರ್ತು ಸಂದರ್ಭಗಳಿಗೆ  ಹೊರತುಪಡಿಸಿ ನದೀ ಪಾತ್ರದಲ್ಲಿ ಖಾಸಗೀ ಪಂಪ್‍ಸೆಟ್‍ಗಳಲ್ಲಿ ನೀರೆತ್ತದಂತೆ ತೋಟಗಾರಿಕೆ, ಕೃಷಿ, ಮೆಸ್ಕಾಂ ಅಧಿಕಾರಿಗಳು ನಿಗಾ ವಹಿಸಲು ಜಿಲ್ಲಾಧಿಕಾರಿಗಳು ಸೂಚಿಸಿದರು.
ಈಗಿನ ನೀರಿನ ಮೂಲದಲ್ಲಿ ನಗರ, ಪಟ್ಟಣ ಪ್ರದೇಶಗಳಲ್ಲಿ ಮೇ ಅಂತ್ಯದವರೆಗೂ ಕುಡಿಯುವ ನೀರಿನ ಸಮಸ್ಯೆಯಾಗದಂತೆ ನೀರು ಪೂರೈಸಲು ದಿನ ಬಿಟ್ಟು ದಿನದಲ್ಲಿ ನೀರು ಸರಬರಾಜು ಮಾಡಲು ಜಿಲ್ಲಾಧಿಕಾರಿಗಳು ತಿಳಿಸಿದರು.
ಬರ ಪರಿಹಾರ:
ಮಂಗಳೂರು ಮತ್ತು ಬಂಟ್ವಾಳ ತಾಲೂಕನ್ನು ರಾಜ್ಯ ಸರಕಾರ ಬರಪೀಡಿತ ಎಂದು ಘೋಷಿಸಿರುವುದರಿಂದ 2 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ. ಇದರಲ್ಲಿ ಎರಡೂ ತಾಲೂಕುಗಳಿಗೆ ತಲಾ ರೂ.  30 ಲಕ್ಷ  ಬಿಡುಗಡೆ ಮಾಡಲು ಅವರು ಸೂಚಿಸಿದರು.
ಮಂಗಳೂರು ಮಹಾನಗರಪಾಲಿಕೆಗೆ ಕುದುರೆಮುಖ ಲಕ್ಯಾ ಡ್ಯಾಂನಿಂದ ನೀರನ್ನು ಶಾಶ್ವತವಾಗಿ ಪಂಪಿಂಗ್ ಮಾಡಲು ಅನುಮತಿಸಲು ಕುದುರೆಮುಖ ಸಂಸ್ಥೆಗೆ ಪತ್ರ ಬರೆಯಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಮಹಾನಗರಪಾಲಿಕೆ ಆಯುಕ್ತ ಮುಹಮ್ಮದ್ ನಝೀರ್ ಮಾತನಾಡಿ, ತುಂಬೆ ನೇತ್ರಾವತಿ ಡ್ಯಾಂನಲ್ಲಿ ಇಂದು 5 ಮೀಟರ್ ನೀರು ಸಂಗ್ರಹಣೆಯಾಗಿದೆ ಎಂದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಎನ್.ಆರ್. ಉಮೇಶ್, ಅಪರ ಜಿಲ್ಲಾಧಿಕಾರಿ ಕುಮಾರ್, ಮಂಗಳೂರು ಉಪವಿಭಾಗಾಧಿಕಾರಿ ರೇಣುಕಾ ಪ್ರಸಾದ್,  ತಹಶೀಲ್ದಾರ್, ತಾ.ಪಂ. ಕಾರ್ಯನಿರ್ವಹಣಾಧಿಕಾರಿಗಳು, ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು ಉಪಸ್ಥಿತರಿದ್ದರು.
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Recent Posts