ಜಿಲ್ಲಾ ಸುದ್ದಿ

ಬಂಟ್ವಾಳ, ಬೆಳ್ತಂಗಡಿ, ಪುತ್ತೂರು, ಸುಳ್ಯ ತಾಲೂಕಲ್ಲಿ ನಿಷೇಧಾಜ್ಞೆ

ಕಲ್ಲಡ್ಕದಲ್ಲಿ ಎರಡು ಕೋಮುಗಳ ಮಧ್ಯೆ ಘರ್ಷಣೆ ಏರ್ಪಟ್ಟು ಕಲ್ಲು ತೂರಾಟ ನಡೆದ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟಾಗಿರುವ ಕಾರಣ, ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಠಾಣಾ ವ್ಯಾಪ್ತಿಗಳಿಗೆ ಸೆ.144ರನ್ವಯ ನಿಷೇಧಾಜ್ಞೆ ವಿಧಿಸಿ ಆದೇಶವನ್ನು ಅಪರ ಜಿಲ್ಲಾಧಿಕಾರಿ ಕುಮಾರ್ ಹೊರಡಿಸಿದ್ದಾರೆ.

ಜಾಹೀರಾತು

13ರ ಮಧ್ಯರಾತ್ರಿ 12 ಗಂಟೆಯಿಂದ 14ರ ಮಧ್ಯರಾತ್ರಿ 12 ಗಂಟೆವರೆಗೆ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ.

ಮಂಗಳೂರು ಕಮೀಷನರೇಟ್ ವ್ಯಾಪ್ತಿ ಹೊರತುಪಡಿಸಿ ಬಂಟ್ವಾಳ, ಬೆಳ್ತಂಗಡಿ, ಪುತ್ತೂರು, ಸುಳ್ಯ ತಾಲೂಕುಗಳಲ್ಲಿ ಈ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ.

ಜೂನ್ 13ರಂದು ಸಂಜೆ ಬಂಟ್ವಾಳ ತಾಲೂಕಿನ ಕಲ್ಲಡ್ಕದಲ್ಲಿ ಎರಡು ಕೋಮುಗಳ ಮಧ್ಯೆ ಘರ್ಷಣೆ ಸಂಭವಿಸಿದೆ. ಅದಾದ ಬಳಿಕ ಎರಡೂ ಕೋಮುಗಳ ಜನರು ಪರಸ್ಪರ ಕಲ್ಲು ತೂರಾಟ ನಡೆಸಿದ್ದು, ಇದರಿಂದಾಗಿ ಕೆಲವರಿಗೆ ಗಾಯಗಳಾಗಿರುತ್ತದೆ. ಪರಿಸರದಲ್ಲಿ ಕೆಲವು ಮನೆಗಳು, ಅಂಗಡಿಗಳು ಹಾಗೂ ವಾಹನಗಳಿಗೂ ಹಾನಿ ಉಂಟಾಗಿದೆ. ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ಈ ಘಟನೆಯಿಂದಾಗಿ ಪ್ರಕ್ಷುಬ್ದ ವಾತಾವರಣ ನಿರ್ಮಾಣವಾಗಿದೆ. ಈ ಅಹಿತಕರ ಘಟನೆ ಬಂಟ್ವಾಳ ತಾಲೂಕಿನಲ್ಲಿ ಸಂಭವಿಸಿದ್ದರೂ ಘಟನೆ ಮಾಹಿತಿ ಆಧರಿಸಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಠಾಣಾ ವ್ಯಾಪ್ತಿಗಳಿಗೆ ಸಂಬಂಧಿಸಿ ಅಂದರೆ ಬೆಳ್ತಂಗಡಿ, ಪುತ್ತೂರು ಮತ್ತು ಸುಳ್ಯ ತಾಲೂಕುಗಳಲ್ಲೂ ವಾತಾವರಣ ಸರಿ  ಇರುವುದಿಲ್ಲ. ಈ ಪ್ರದೇಶಗಳಲ್ಲೂ ಅಹಿತಕರ ಘಟನೆ ಸಂಭವಿಸುವ ಸಾಧ್ಯತೆ ಇದ್ದು, ಕಲ್ಲಡ್ಕ ಪರಿಸರವೂ ಸಹಜ ಸ್ಥಿತಿಗೆ ಮರಳಿಲ್ಲ ಎಂದು ಜಿಲ್ಲಾಧಿಕಾರಿ ಆದೇಶಪತ್ರದಲ್ಲಿ ತಿಳಿಸಿದ್ದಾರೆ.

ಇದೇ ಕಲ್ಲಡ್ಕ ಪರಿಸರದಲ್ಲಿ ಈ ಹಿಂದೆ ಮೇ.26ರಂದು ಇದೇ ರೀತಿಯಾಗಿ ಎರಡು ಕೋಮಿನ ನಡುವೆ ವೈಷಮ್ಯದ ಘಟನೆಗಳು ಉಂಟಾದ ಕಾರಣ, ಈಗಾಗಲೇ ಬಂಟ್ವಾಳ ತಾಲೂಕಿನಾದ್ಯಂತ ಸೆ.144ರನ್ವಯ ನಿಷೇಧಾಜ್ಞೆ ಹೊರಡಿಸಿ ವಿಸ್ತರಿಸಿಕೊಂಡು ಬರಲಾಗಿದೆ. ಆದರೂ ಮತ್ತೆ ಘಟನೆ ಸಂಭವಿಸಿದೆ. ಇನ್ನಿತರ ತಾಲೂಕುಗಳಲ್ಲೂ ಈ ರೀತಿಯ ಅಹಿತಕರ ಘಟನೆ ಉಂಟಾಗುವ ಸಂಭವ ಹೆಚ್ಚು ಇರುವುದರಿಂದ ಮತ್ತು ಈಗಾಗಲೇ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವ್ಯಾಪ್ತಿಯಲ್ಲಿ ಮತೀಯವಾಗಿ ಅತೀ ಸೂಕ್ಷ್ಮ ಪ್ರದೇಶವಾಗಿರುವುದರಿಂದ ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ಳುವುದು ಅವಶ್ಯ. ಈ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಹಾಗೂ ಸಾರ್ವಜನಿಕ ಹಿತ ಕಾಪಾಡುವ ದೃಷ್ಟಿಯಿಂದ ನಿಷೇಧಾಜ್ಞೆಯನ್ನು ಪೊಲೀಸ್ ಅಧೀಕ್ಷಕ ಭೂಷಣ್ ಜಿ. ಬೊರಸೆ ಪ್ರಸ್ತಾವನೆಯಂತೆ ನಿಷೇಧಾಜ್ಞೆ ವಿಧಿಸಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.