ನಿರೀಕ್ಷೆಯಂತೆ ಬಂಟ್ವಾಳದಲ್ಲಿ ನಿಷೇಧಾಜ್ಞೆ ವಿಸ್ತರಣೆಯಾಗಿದೆ. ಸೋಮವಾರ ಸಂಜೆ ಜಿಲ್ಲಾಧಿಕಾರಿ ಡಾ.ಕೆ.ಜಿ.ಜಗದೀಶ್ ಹೊರಡಿಸಿದ ಸೂಚನೆ ಪ್ರಕಾರ, ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ (ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯನ್ನು ಹೊರತುಪಡಿಸಿ) ಅಂದರೆ ಬಂಟ್ವಾಳ, ಸುಳ್ಯ, ಪುತ್ತೂರು ಮತ್ತು ಬೆಳ್ತಂಗಡಿ ತಾಲೂಕಿನಾದ್ಯಂತ ಜುಲೈ 11 ರ ಮಧ್ಯರಾತ್ರಿ 12 ಗಂಟೆಯಿಂದ ಜುಲೈ 21 ರ ಮಧ್ಯರಾತ್ರಿ 12 ಗಂಟೆಯವರೆಗೆ ದಂಡ ಪ್ರಕ್ರಿಯಾ ಸಂಹಿತೆ 1973ರ ಕಲಂ 144 ರನ್ವಯ ನಿಷೇಧಾಜ್ಞೆಯನ್ನು ವಿಸ್ತರಿಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೇಲೆ ತಿಳಿಸಿದ ಅವಧಿಯಲ್ಲಿ ಸಾರ್ವಜನಿಕರು ಐದು ಅಥವಾ ಅದಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕ ರಸ್ತೆ, ಬೀದಿ, ಓಣಿ, ಕೇರಿಗಳಲ್ಲಿ ಸಾರ್ವಜನಿಕ ಸ್ಥಳ, ಸಾರ್ವಜನಿಕ ಕಟ್ಟಡ ಮತ್ತು ಸರ್ಕಾರಿ ಕಛೇರಿ ಸುತ್ತಮುತ್ತ ಗುಂಪು ಸೇರುವುದು ಅಥವಾ ಗುಂಪು ಕೂಡುವುದನ್ನು ನಿಷೇಧಿಸಿದೆ. ಯಾವುದೇ ಆಯುಧ, ಕುಡುಗೋಲು, ಖಡ್ಗ, ಭರ್ಚಿ, ಗದೆ, ಕೋಲು, ಚೂರಿ, ದೊಣ್ಣೆ, ಲಾಠಿ ಅಥವಾ ದೈಹಿಕ ದಂಡನೆಗೆ ಕಾರಣವಾಗುವ ಅಥವಾ ಪೂರಕವಾಗುವ ಇನ್ಯಾವುದೇ ವಸ್ತುಗಳನ್ನು ಹೊಂದುವುದನ್ನು ನಿಷೇಧಿಸಿದೆ.
ಯಾವುದೇ ರೀತಿಯ ಸಾರ್ವಜನಿಕ ಮೆರವಣಿಗೆ, ಸಾರ್ವಜನಿಕ ಸಭೆ ಸಮಾರಂಭಗಳನ್ನು ನಡೆಸಬಾರದು. ಯಾವುದೇ ಕ್ಷಾರಕ ಅಥವಾ ಸ್ಪೋಟಕ ವಸ್ತುಗಳನ್ನು ಹೊಂದುವುದನ್ನು ನಿಷೇಧಿಸಿದೆ. ಕಲ್ಲುಗಳನ್ನು ಒಟ್ಟುಗೂಡಿಸುವುದು, ಆಯುಧಗಳನ್ನು ಉಪಯೋಗಿಸುವುದನ್ನು ನಿಷೇಧಿಸಿದೆ. ಸಾರ್ವಜನಿಕವಾಗಿ ಕೋಮು ಸೌಹಾರ್ದಕ್ಕೆ ದಕ್ಕೆ ಬರುವಂತಹ ಯಾವುದೇ ಕೂಗನ್ನು ಉಚ್ಛರಿಸುವುದು ಅಥವಾ ಪದ ಹಾಡುವುದು, ಚೇಷ್ಠೆ ಮಾಡುವುದು, ಸಂಜ್ಞೆಗಳನ್ನು ಉಪಯೋಗಿಸುವುದು ಮತ್ತು ಚಿತ್ರಗಳ ಮೂಲಕ ಪ್ರದರ್ಶನ ಮಾಡುವುದು, ಪತ್ರಿಕೆಗಳ ಪ್ರಕಟಣೆ ಮಾಡುವುದು ಅಥವಾ ಇತರ ಯಾವುದೇ ವಸ್ತುಗಳ ಪ್ರದರ್ಶನ, ಭಿತ್ತಿಪತ್ರಗಳನ್ನು ಅಂಟಿಸುವುದರಿಂದ, ಸಭ್ಯತನ, ಸದಾಚಾರ, ಸಾರ್ವಜನಿಕ ಭದ್ರತೆ ಶಿಥಿಲಗೊಳ್ಳುವಂತಹ ಯಾವುದೇ ರೀತಿಯ ಅಪರಾಧ ಎಸಗುವ ಮತ್ತು ಪ್ರೇರೇಪಿಸುವ ಕ್ರಮವನ್ನು ನಿಷೇಧಿಸಲಾಗಿದೆ ಎಂದು ಈ ಸೂಚನೆಯಲ್ಲಿದೆ.
ಮೊದಲೇ ಇತ್ತಲ್ಲವೇ:
ಆದರೆ ಮೇ.27ರ ನಿಷೇಧಾಜ್ಞೆ ಹೊರಡಿಸುವ ಸಂದರ್ಭವೇ ಈ ಸೂಚನೆಗಳೆಲ್ಲವೂ ಇತ್ತು. ಆದರೆ ಇದೇ ಸಂದರ್ಭ ಎರಡು ಹತ್ಯೆಗಳು ಹಾಗೂ ಹಲವು ಹಲ್ಲೆ, ಇರಿತ ಪ್ರಕರಣಗಳು ನಡೆದಿದ್ದವು. ಹೀಗಾಗಿ ಈ ಬಾರಿ ನಿಷೇಧಾಜ್ಞೆಯನ್ನು ಯಾವ ರೀತಿ ಕಟ್ಟುನಿಟ್ಟಾಗಿ ಆಡಳಿತ ಜಾರಿ ಮಾಡುತ್ತದೆ ಎಂಬುದನ್ನು ಕಾದು ನೋಡಬೇಕಾಗಿದೆ.