ವಿಶೇಷ ಆರ್ಥಿಕ ವಲಯ ಮಾದರಿಯಲ್ಲೇ ಜಿಲ್ಲೆಯಲ್ಲಿ ವಿಶೇಷ ಕೃಷಿ ವಲಯ ಸ್ಥಾಪಿಸುವ ಬಗ್ಗೆ ಪರಿಶೀಲಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ.ಜಿ. ಜಗದೀಶ ತಿಳಿಸಿದ್ದಾರೆ.
ಬುಧವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ರೈತ ಮುಖಂಡರ ಸಭೆಯಲ್ಲಿ ಈ ವಿಷಯ ತಿಳಿಸಿದರು. ಸಭೆಯಲ್ಲಿ ಮಾತನಾಡಿದ ರೈತ ಮುಖಂಡರು, ಜಿಲ್ಲೆಯಲ್ಲಿ ಸ್ಥಳೀಯವಾಗಿ ಬೆಳೆದ ತರಕಾರಿಗಳಿಗೆ ಹಾಗೂ ಹೂವುಗಳಿಗೆ ವಿದೇಶದಲ್ಲಿ ಸಾಕಷ್ಟು ಬೇಡಿಕೆ ಇದೆ. ಈ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ವಿಶೇಷ ಕೃಷಿ ವಲಯ ಸ್ಥಾಪಿಸಬೇಕು ಎಂದು ಆಗ್ರಹಿಸಿದರು. ಇದಕ್ಕೆ ಸ್ಪಂದಿಸಿದ ಜಿಲ್ಲಾಧಿಕಾರಿಗಳು, ವಿಶೇಷ ಕೃಷಿ ವಲಯ ಸ್ಥಾಪನೆಯ ಸಾಧ್ಯತೆಗಳ ಬಗ್ಗೆ ಪರಿಶೀಲಿಸಿ ವರದಿ ನೀಡಲು ಅಧಿಕಾರಿಗಳು, ಕೃಷಿ ತಜ್ಞರು ಮತ್ತು ರೈತ ಮುಖಂಡರ ಸಮಿತಿ ರಚಿಸಲಾಗುತ್ತಿದ್ದು, ಈ ಸಮಿತಿ ಎರಡು ತಿಂಗಳಲ್ಲಿ ವರದಿ ನೀಡಲಿದೆ. ಕೃಷಿ ವಲಯಕ್ಕೆ ಅಗತ್ಯವಿರುವಷ್ಟು ಸೂಕ್ತ ಭೂಮಿ ಒದಗಿಸಲು ಜಿಲ್ಲಾಡಳಿತ ಸಿದ್ಧವಿದೆ ಎಂದು ತಿಳಿಸಿದರು.
ಯಶಸ್ವಿನಿ ಯೋಜನೆಯಡಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದ ರೋಗಿಗಳಿಂದ ಸರಕಾರ ನಿಗದಿಪಡಿಸಿದ ದರಕ್ಕಿಂತಲೂ ಆಸ್ಪತ್ರೆಗಳು ಅಧಿಕ ವಸೂಲಿ ಮಾಡುತ್ತಿರುವ ಬಗ್ಗೆ ದೂರುಗಳು ಬಂದಿದೆ. ಈ ನಿಟ್ಟಿನಲ್ಲಿ ಯಶಸ್ವಿನಿ ಯೋಜನೆಯಡಿ ನೋಂದಾಯಿತ ಆಸ್ಪತ್ರೆಗಳ ಸಭೆ ನಡೆಸಿ ಸೂಕ್ತ ನಿರ್ದೇಶನ ನೀಡಲು ಜಿಲ್ಲಾಧಿಕಾರಿಗಳು ತಿಳಿಸಿದರು.
ತೋಟಗಾರಿಕಾ ಉತ್ಪನ್ನಗಳ ಸಂಸ್ಕರಣಾ ಘಟಕಗಳ ಬಗ್ಗೆ ರೈತರಿಗೆ ಮಾಹಿತಿ ನೀಡಲು ಜಿಲ್ಲಾ ಮಟ್ಟದ ಕಾರ್ಯಾಗಾರವನ್ನು ಶೀಘ್ರವೇ ಆಯೋಜಿಸಲಾಗುವುದು. ಬೆಳೆಗಳಿಗೆ ಹಳದಿ ರೋಗದ ಬಗ್ಗೆ ರೈತರಲ್ಲಿ ಅರಿವು ಮೂಡಿಸಲು ಸುಳ್ಯದಲ್ಲಿ ಕಾರ್ಯಾಗಾರ ಏರ್ಪಡಿಸಲಾಗುವುದು ಎಂದು ಅವರು ಹೇಳಿದರು. ರೈತರಿಗೆ ಸಾಲ ಮಂಜೂರಾತಿಯಲ್ಲಿ ವಿಳಂಭ ಮಾಡುವ ಪ್ರಕರಣಗಳಿದ್ದರೆ ಲೀಡ್ ಬ್ಯಾಂಕ್ ಅಧಿಕಾರಿಗಳ ಗಮನಕ್ಕೆ ತರಲು ಅವರು ಸೂಚಿಸಿದರು.
ಮುಂದಿನ ದಿನಗಳಲ್ಲಿ ತಾಲೂಕು ಮಟ್ಟದಲ್ಲೂ ರೈತ ಮುಖಂಡರ ಸಭೆ ನಡೆಸಲು ಸಂಬಂಧಪಟ್ಟವರಿಗೆ ಸೂಚಿಸುವುದಾಗಿ ಜಿಲ್ಲಾಧಿಕಾರಿಗಳು ಹೇಳಿದರು.
ಜಿಲ್ಲೆಯಲ್ಲಿ ಕೃಷಿ ಚಟುವಟಿಕೆಗಳಿಗೆ ನೀರಾವರಿ ಸೌಲಭ್ಯ ಹೆಚ್ಚಿಸಲು ಸುಮಾರು 69 ಕೋಟಿ ರೂ. ವೆಚ್ಚದಲ್ಲಿ 53 ವೆಂಟೆಡ್ ಡ್ಯಾಂ ನಿರ್ಮಾಣಕ್ಕೆ ರಾಜ್ಯ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಅದೇ ರೀತಿ ನರೇಗಾ ಯೋಜನೆಯಲ್ಲಿ ಗ್ರಾಮ ಪಂಚಾಯತ್‍ಗಳ ವ್ಯಾಪ್ತಿಯಲ್ಲಿ 1000 ಕಿರು ಡ್ಯಾಂ ನಿರ್ಮಿಸಲಾಗುವುದು ಎಂದು ಸಭೆಗೆ ಅಧಿಕಾರಿಗಳು ತಿಳಿಸಿದರು.
ಜಂಟೀ ಕೃಷಿ ನಿರ್ದೇಶಕ ಕೆಂಪೇಗೌಡ ಮಾತನಾಡಿ, ಕೃಷಿ ಯಂತ್ರಧಾರೆ ಕೇಂದ್ರಗಳ ಮೂಲಕ ಕೃಷಿ ಯಂತ್ರಗಳನ್ನು ರೈತರಿಗೆ ಬಾಡಿಗೆಗೆ ನೀಡಲಾಗುತ್ತಿದೆ. ಈ ಯಂತ್ರಗಳಿಗೆ ಹೆಚ್ಚಿನ ಬೇಡಿಕೆ ಇದೆ. ಈ ನಿಟ್ಟಿನಲ್ಲಿ 3 ಗ್ರಾಮ ಪಂಚಾಯತ್‍ಗಳಿಗೊಂದರಂತೆ ಕೃಷಿ ಯಂತ್ರಧಾರೆ ಕೇಂದ್ರ ಸ್ಥಾಪಿಸಲು ರಾಜ್ಯ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ತಿಳಿಸಿದರು. ಮೂಡಬಿದ್ರೆಯಲ್ಲಿ ರೈತ ಸಂಪರ್ಕ ಕೇಂದ್ರಕ್ಕೆ ನೂತನ ಕಟ್ಟಡ ನಿರ್ಮಿಸಲು ಈಗಾಗಲೇ ಜಮೀನು ಕೃಷಿ ಇಲಾಖೆಗೆ ಹಸ್ತಾಂತರವಾಗಿದ್ದು, ಮುಂದಿನ 1 ವರ್ಷದೊಳಗೆ ಕೇಂದ್ರ ನಿರ್ಮಿಸಲಾಗುವುದು ಎಂದು ಅವರು ಹೇಳಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಎನ್.ಆರ್. ಉಮೇಶ್, ಪುತ್ತೂರು ಉಪವಿಭಾಗಾಧಿಕಾರಿ ಡಾ. ರಘುನಂದನ ಮೂರ್ತಿ, ತೋಟಗಾರಿಕೆ ಉಪನಿರ್ದೇಶಕ ಎಚ್.ಆರ್. ಯೋಗೀಸ್, ಪಶುಸಂಗಫನೆ ಉಪನಿರ್ದೇಶಕ ತಿಪ್ಪೇಸ್ವಾಮಿ, ಸಹಕಾರ ಇಲಾಖೆ ಉಪಬಂಧಕ ಬಿ.ಕೆ. ಸಲೀಂ, ಲೀಡ್ ಬ್ಯಾಂಕ್ ಅಧಿಕಾರಿಗಳು, ರೈತ ಮುಖಂಡರಾದ ರವಿಕಿರಣ ಪುಣಚ, ಸಂಪತ್ ಸಾಮ್ರಾಜ್ಯ, ಯಾದವ ಶೆಟ್ಟಿ ಸೇರಿದಂತೆ ವಿವಿಧ ರೈತ ಸಂಘಟನೆಗಳ ಮುಖಂಡರು ಉಪಸ್ಥಿತರಿದ್ದರು.