ಇದೇ ಮೊದಲ ಬಾರಿಗೆ ಕರ್ನಾಟಕ ಸರಕಾರದ ವಿವಿಧ ಗಜೆಟೆಡ್ ಪ್ರೊಬೇಷನರ್ಸ್ ಹುದ್ದೆಗಳ ನೇಮಕಾತಿಗೆ ಪೂರ್ವಭಾವಿ ಪರೀಕ್ಷೆ ಆಗಸ್ಟ್ 20ರಂದು ಮಂಗಳೂರಿನಲ್ಲಿ ನಡೆಯಲಿದೆ.
ಕರ್ನಾಟಕ ಲೋಕಸೇವಾ ಆಯೋಗವು ಈ ಪರೀಕ್ಷೆಯನ್ನು ನಡೆಸಲಿದ್ದು, ಇದುವರೆಗೆ ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ಆಸುಪಾಸಿನ ಜಿಲ್ಲೆಗಳ ಕೆಪಿಎಸ್‍ಸಿ ಗಜೆಟೆಡ್ ಪರೀಕ್ಷೆ ಎದುರಿಸುವ ಅಭ್ಯರ್ಥಿಗಳು ರಾಜ್ಯದ ವಿವಿದೆಡೆ ತೆರಳಬೇಕಾಗಿತ್ತು. ರಾಜ್ಯದ ಬೆಂಗಳೂರು, ಮೈಸೂರು, ಬೆಳಗಾವಿ, ಗುಲ್ಬರ್ಗ ಮತ್ತು ಶಿವಮೊಗ್ಗದಲ್ಲಿ ಮಾತ್ರ ಗಜೆಟೆಡ್ ನೇಮಕಾತಿ ಪರೀಕ್ಷೆ ನಡೆಯುತ್ತಿತ್ತು.
ಮಂಗಳೂರು ನಗರದಲ್ಲಿ ಆಗಸ್ಟ್ 20ರಂದು ನಡೆಯುವ ಪರೀಕ್ಷೆಗೆ ಒಟ್ಟು 12 ಪರೀಕ್ಷಾ ಕೇಂದ್ರಗಳನ್ನು ಆಯ್ಕೆ ಮಾಡಲಾಗಿದ್ದು, 6084 ಅಭ್ಯರ್ಥಿಗಳು ಪರೀಕ್ಷೆ ಎದುರಿಸಲಿದ್ದಾರೆ. ನಗರದ ಹೃದಯಭಾಗದಲ್ಲಿರುವ 12 ಶೈಕ್ಷಣಿಕ ಸಂಸ್ಥೆಗಳಲ್ಲಿ ಈ ಪರೀಕ್ಷೆ ನಡೆಯಲಿದೆ.
ಪೂರ್ವಭಾವಿ ಸಭೆ: ಮಂಗಳೂರಿನಲ್ಲಿ ಗಜೆಟೆಡ್ ಪ್ರೊಬೇಷನರ್ಸ್ ಹುದ್ದೆಗಳ ನೇಮಕಾತಿಗೆ ಪೂರ್ವಭಾವಿ ಪರೀಕ್ಷೆ ನಡೆಯುವ ಹಿನ್ನೆಲೆಯಲ್ಲಿ ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರ ಹಾಗೂ ವಿವಿಧ ಇಲಾಖಾಧಿಕಾರಿಗಳ ಸಭೆ ನಡೆಯಿತು. ಅಪರ ಜಿಲ್ಲಾಧಿಕಾರಿ ಕುಮಾರ್ ಸಭೆಯಲ್ಲಿ ಮಾತನಾಡಿ, ಮಂಗಳೂರಿನಲ್ಲಿ ಇದೇ ಮೊದಲ ಬಾರಿಗೆ ಗಜೆಟೆಡ್ ಹುದ್ದೆಗಳಿಗೆ ಪರೀಕ್ಷೆ ನಡೆಯುತ್ತಿದೆ. ಆ. 20ರಂದು ಬೆಳಿಗ್ಗೆ ಮತ್ತು ಮಧ್ಯಾಹ್ನ ಎರಡು ಪರೀಕ್ಷೆ ನಡೆಯಲಿದೆ ಎಂದು ಹೇಳಿದರು.
ಪರೀಕ್ಷೆ ಬರೆಯುವ ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಬರುವಾಗ ಹಾಲ್‍ಟಿಕೇಟ್‍ನೊಂದಿಗೆ ಕಡ್ಡಾಯವಾಗಿ ತಮ್ಮ ಆಧಾರ್ ಕಾರ್ಡ್ ಅಥವಾ ಭಾವಚಿತ್ರ ಇರುವ ಅಧಿಕೃತ ಗುರುತಿನ ಚೀಟಿ ಹಾಗೂ ಅದರ ಜೆರಾಕ್ಸ್ ಪ್ರತಿ ತರಬೇಕು. ಅದೇ ರೀತಿ ಮೊಬೈಲ್ ಅಥವಾ ಡಿಜಿಟಲ್ ವಾಚ್ ಕೊಂಡೊಯ್ಯಲು ಅವಕಾಶವಿಲ್ಲ. ಅಭ್ಯರ್ಥಿಗಳು ಬೆಳಿಗ್ಗೆ 9.30 ಹಾಗೂ ಮಧ್ಯಾಹ್ನ 1.30ಕ್ಕೆ ಪರೀಕ್ಷಾ ಕೇಂದ್ರದಲ್ಲಿ ಹಾಜರಿರಬೇಕು. ಅಭ್ಯರ್ಥಿಗಳನ್ನು ಸೂಕ್ತ ತಪಾಸಣೆ ನಡೆಸಿ ಪರೀಕ್ಷಾ ಕೇಂದ್ರ ಪ್ರವೇಶಿಸಲು ಅನುಮತಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿಗಳು ತಿಳಿಸಿದರು.
ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಪೊಲೀಸ್ ಬಂದೋಬಸ್ತ್ ಏರ್ಪಡಿಸಲು ಪೊಲೀಸ್ ಇಲಾಖೆಗೆ ಸೂಚಿಸಲಾಗಿದೆ. ಅದೇ ರೀತಿ ಖಜಾನೆಯಿಂದ ಪರೀಕ್ಷಾ ಕೇಂದ್ರಗಳಿಗೆ ಪ್ರಶ್ನೆಪತ್ರಿಕೆಯನ್ನು ಪೊಲೀಸ್ ಭದ್ರತೆಯಲ್ಲಿ ರವಾನಿಸಲಾಗುವುದು. ಇದಲ್ಲದೇ ಗ್ರೂಪ್ ಎ ಅಧಿಕಾರಿಗಳನ್ನು ವೀಕ್ಷಕರನ್ನಾಗಿ ಹಾಗೂ ಗ್ರೂಪ್ ಬಿ ದರ್ಜೆ ಅಧಿಕಾರಿಗಳನ್ನು ರೂಟ್ ಅಧಿಕಾರಿಗಳಾಗಿ ನೇಮಿಸಲಾಗಿದೆ ಎಂದು ಕುಮಾರ್ ತಿಳಿಸಿದರು.
ಸಭೆಯಲ್ಲಿ ಡಿಡಿಪಿಐ ಶಿವರಾಮಯ್ಯ, ಜಿಲ್ಲಾ ಲೀಡ್ ಕಾಲೇಜು ಪ್ರಾಂಶುಪಾಲ ರಾಜಶೇಖರ ಹೆಬ್ಬಾರ್ ಮತ್ತಿತರರು ಉಪಸ್ಥಿತರಿದ್ದರು.
Be the first to comment on "ಮಂಗಳೂರಿನಲ್ಲಿ ಕೆಪಿಎಸ್‍ಸಿ ಗೆಜೆಟೆಡ್ ಪರೀಕ್ಷೆ"