www.bantwalnews.com
ಗ್ರಾಮ ಸಹಾಯಕರ ಸೇವೆಯನ್ನು ಖಾಯಮಾತಿಗೊಳಿಸುವ ವಿಷಯ ರಾಜ್ಯ ಸರಕಾರದ ಪರಿಶೀಲನೆಯಲ್ಲಿದೆ ಎಂದು ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಅವರು ತಿಳಿಸಿದ್ದಾರೆ.
ವಿಧಾನಸಭೆಯಲ್ಲಿ ಈ ಸಂಬಂಧ ಮಂಗಳೂರು ಉತ್ತರ ಶಾಸಕ ಬಿ.ಎ. ಮೊಹಿದೀನ್ ಬಾವಾ ಅವರು, ‘ಕಂದಾಯ ಇಲಾಖೆಯಲ್ಲಿ ಕಳೆದ 38 ವರ್ಷಗಳಿಂದ ಸೇವಾ ಭದ್ರತೆ ಇಲ್ಲದೆ ಅತಂತ್ರ ಸ್ಥಿತಿಯಲ್ಲಿರುವ ಗ್ರಾಮ ಸಹಾಯಕರನ್ನು ಡಿ ದರ್ಜೆಯ ನೌಕರರೆಂದು ಪರಿಗಣಿಸಿ ಸೇವಾ ಭದ್ರತೆ ನೀಡುವಂತೆ ಆಗ್ರಹಿಸಿ ಪ್ರಶ್ನೆ ಕೇಳಿದ್ದರು.
ಈ ಪ್ರಶ್ನೆಗೆ ಉತ್ತರ ನೀಡಿದ ಸಚಿವರು, ರಾಜ್ಯದಲ್ಲಿ ಒಟ್ಟು 10450 ಗ್ರಾಮ ಸಹಾಯಕರ ಹುದ್ದೆಗಳು ಮಂಜೂರಾಗಿವೆ. ಈ ಪೈಕಿ 9816 ಗ್ರಾಮ ಸಹಾಯಕರು ಕಾರ್ಯನಿರ್ವಹಿಸುತ್ತಿದ್ದಾರೆ. ಇವರ ಸೇವೆಯನ್ನು ಗ್ರೂಪ್ ಡಿ ವರ್ಗದಲ್ಲಿ ಸಕ್ರಮೀಕರಿಸುವಂತೆ ಗ್ರಾಮ ಸಹಾಯಕರ ಸಂಘದ ಮನವಿ ಬಗ್ಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣ ಇಲಾಖೆ, ಆರ್ತಿಕ ಇಲಾಖೆ ಹಾಗೂ ಕಾನೂನು ಇಲಾಖೆಯೊಂದಿಗೆ ಸಮಾಲೋಚಿಸಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.