ಎರಡು ದ್ವಿಚಕ್ರಗಳು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸವಾರರು ಗಂಭೀರ ಗಾಯಗೊಂಡ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾಣಿಯ ಬುಡೋಳಿ ಎಂಬಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದೆ.
ಬೈಕ್ ಸವಾರ ಉಪ್ಪಿನಂಗಡಿ ನಿವಾಸಿ ಮುಸ್ತಫಾ(20) ಹಾಗೂ ಟಿವಿಎಸ್ ಜುಪಿಟರ್ ಸವಾರ ಗಡಿಯಾರ ನಿವಾಸಿ ಜುಬೈರ್(18) ಎಂಬವರು ಗಂಭೀರ ಗಾಯಗೊಂಡಿದ್ದು, ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಉಪ್ಪಿನಂಗಡಿ ಕಡೆಯಿಂದ ಬರುತ್ತಿದ್ದ ಟಿವಿಎಸ್ ಜುಪಿಟರ್ ವಾಹನಕ್ಕೆ ಬುಡೋಳಿ ಎಂಬಲ್ಲಿ ಎದುರಿನಿಂದ ಬಂದ ಬೈಕ್ ಡಿಕ್ಕಿ ಹೊಡೆದು ಈ ಘಟನೆ ಸಂಭವಿಸಿದೆ. ಇಬ್ಬರು ಸವಾರರು ರಸ್ತೆಗೆ ಎಸೆಯಲ್ಪಟ್ಟು ಗಂಭೀರ ಗಾಯಗೊಂಡಿದ್ದರು. ಸ್ಥಳೀಯರು ೧೦೮ ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ಸಾಗಿಸಿದ್ದಾರೆ. ಮುಸ್ತಫಾ ಅವರು ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. ಘಟನೆಯಲ್ಲಿ ಜುಪಿಟರ್ ವಾಹನ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.