‘ಯಕ್ಷಗಾನ ಕಲೆ ಕೇವಲ ಮನೋರಂಜನೆಗೆ ಮಾತ್ರ ಸೀಮಿತವಾಗಿಲ್ಲ. ಇದರ ಮೂಲಕ ಪುರಾಣದ ಮೌಲ್ಯಗಳನ್ನು ಜನಸಾಮಾನ್ಯರೂ ತಿಳಿದುಕೊಳ್ಳಬಹುದಾಗಿದೆ. ಅಲ್ಲದೆ ಯಕ್ಷಗಾನ ಸೇವೆಯ ಮೂಲಕ ದೇವತಾರಾಧನೆಯೂ ಸಾಧ್ಯವಾಗುತ್ತದೆ ಎಂಬುದಕ್ಕೆ ಕಟೀಲು ದೇವಿಯ ಪ್ರೀತ್ಯರ್ಥವಾಗಿ ನಾಡಿನೆಲ್ಲೆಡೆ ನಡೆಯುವ ಸೇವಾ ಬಯಲಾಟಗಳು ಸಾಕ್ಷಿಯಾಗಿವೆ’ ಎಂದು ಮಂಗಳೂರು ಲೋಕಸಭಾ ಕ್ಷೇತ್ರದ ಸಂಸದ ನಳಿನ್ ಕುಮಾರ್ ಕಟೀಲು ಹೇಳಿದ್ದಾರೆ.
ಬಂಟ್ವಾಳ ತಾಲೂಕಿನ ಶಂಭೂರಿನಲ್ಲಿ ಇತ್ತೀಚೆಗೆ ಜರಗಿದ ಕಟೀಲು ಶ್ರೀ ದುರ್ಗಾಪರಮೇಶ್ವರಿ ದಶಾವತಾರ ಯಕ್ಷಗಾನ ಮಂಡಳಿಯ ಸೇವಾ ಬಯಲಾಟದ ಎರಡನೇ ದಿನ ಬೊಂಡಾಲ ಚ್ಯಾರಿಟೇಬಲ್ ಟ್ರಸ್ಟ್ ಏರ್ಪಡಿಸಿದ್ದ’ಬೊಂಡಾಲ ಪ್ರಶಸ್ತಿ ಪ್ರದಾನ’ ಸಮಾರಂಭದ ಮುಖ್ಯ ಅತಿಥಿಗಳಾಗಿ ಅವರು ಮಾತನಾಡಿದರು.ಕಟೀಲು ಕ್ಷೇತ್ರದ ಅರ್ಚಕರಾದ ಅನಂತ ಪದ್ಮನಾಭ ಆಸ್ರಣ್ಣ ಆಶೀರ್ವಚನ ನೀಡಿದರು.
ಹಿರಿಯ ಯಕ್ಷಗಾನ ಕಲಾ ಪೋಷಕರು ಮತ್ತು ಅರ್ಥಧಾರಿಗಳಾದ ದಿ.ಬೊಂಡಾಲ ಜನಾರ್ದನ ಶೆಟ್ಟಿ ಹಾಗೂ ದಿ.ಬೊಂಡಾಲ ರಾಮಣ್ಣ ಶೆಟ್ಟಿ ಅವರ ಸ್ಮರಣಾರ್ಥ ಈ ಹಿಂದೆ ಕಟೀಲು ಮೇಳದಲ್ಲಿ ಸೇವೆ ಸಲ್ಲಿಸಿದ್ದ ಪ್ರಸಿದ್ಧ ಯಕ್ಷಗಾನ ವೇಷಧಾರಿಗಳಾದ ಬೆಳ್ಳಾರೆ ವಿಶ್ವನಾಥ ರೈ ಮತ್ತು ಸುಬ್ರಾಯ ಹೊಳ್ಳ ಕಾಸರಗೋಡು ಅವರಿಗೆ 2017-18 ನೇ ಸಾಲಿನ ‘ಬೊಂಡಾಲ ಪ್ರಶಸ್ತಿ’ನೀಡಿ ಸನ್ಮಾನಿಸಲಾಯಿತು.ಪ್ರಶಸ್ತಿ ಆಯ್ಕೆ ಸಮಿತಿ ಸಂಚಾಲಕ, ಕರ್ನಾಟಕ ಜಾನಪದ ಮತ್ತು ಯಕ್ಷಗಾನ ಅಕಾಡೆಮಿ ಮಾಜಿ ಸದಸ್ಯ ಪ್ರೊ.ಭಾಸ್ಕರ ರೈ ಕುಕ್ಕುವಳ್ಳಿ ಅಭಿನಂದನಾ ಭಾಷಣ ಮಾಡಿದರು.
ಈ ಸಂದರ್ಭದಲ್ಲಿ ಭೇಟಿಯಿತ್ತ ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಕಾರ್ಯಕ್ರಮಕ್ಕೆ ಶುಭ ಕೋರಿದರು. ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಳದ ಆಡಳಿತ ಮೊಕ್ತೇಸರ ಸನತ್ಕುಮಾರ್ ಶೆಟ್ಟಿ ಕೊಡೆತ್ತೂರು ಗುತ್ತು, ಬಂಟ್ವಾಳ ತಾಲ್ಲೂಕು ಪಂಚಾಯತ್ ಅಧ್ಯಕ್ಷ ಚಂದ್ರಹಾಸ ಕರ್ಕೇರ, ಸುಧೀರ್ ಶೆಟ್ಟಿ ಕೊಡೆತ್ತೂರುಗುತ್ತು ಮತ್ತು ರಾಯಸ ಶ್ರೀನಿವಾಸ ಪೂಜಾರಿ ಅತಿಥಿಗಳಾಗಿ ಉಪಸ್ಥಿತರಿದ್ದರು. ಬೆಳ್ಳಾರೆ ವಿಶ್ವನಾಥ ರೈ ಸನ್ಮಾನಿತರ ಪರವಾಗಿ ಮಾತನಾಡಿದರು.
ಬೊಂಡಾಲ ಚ್ಯಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಬೊಂಡಾಲ ಸಚ್ಚಿದಾನಂದ ಶೆಟ್ಟಿ ಸ್ವಾಗತಿಸಿದರು. ಬೊಂಡಾಲ ಜನಾರ್ದನ ಶೆಟ್ಟಿ ಮತ್ತು ಬೊಂಡಾಲ ರಾಮಣ್ಣ ಶೆಟ್ಟಿ ಸಂಸ್ಮರಣಾ ಸಮಿತಿ ಅಧ್ಯಕ್ಷ ಸೀತಾರಾಮ ಶೆಟ್ಟಿ ಬೊಂಡಾಲ ವಂದಿಸಿದರು. ಸದಸ್ಯರಾದ ವಿಶ್ವನಾಥ ಶೆಟ್ಟಿ ತೀರ್ಥಹಳ್ಳಿ ಮತ್ತು ಕೆ.ಲಕ್ಷ್ಮೀನಾರಾಯಣ ರೈ ಹರೇಕಳ ಸನ್ಮಾನ ಪತ್ರ ವಾಚಿಸಿದರು.ಬಳಿಕ ಕಟೀಲು ಶ್ರೀ ದುರ್ಗಾಪರಮೇಶ್ವರಿ ದಶಾವತಾರ ಯಕ್ಷಗಾನ ಮಂಡಳಿಯಿಂದ ‘ ಶ್ರೀ ದೇವಿ ಮಹಾತ್ಮೆ’ ಯಕ್ಷಗಾನ ಬಯಲಾಟ ಜರಗಿತು.