ಜೀವನದ ಎಲ್ಲ ವ್ಯವಹಾರಗಳಲ್ಲಿ ಅಮೃತ ಮತ್ತು ವಿಷ, ಬೆಳಕು ಮತ್ತು ಕತ್ತಲೆ ದೊರಕುತ್ತದೆ. ಕ್ಷೇತ್ರ ಸಾನಿಧ್ಯಗಳು ಕತ್ತಲೆಯನ್ನು ದೂರ ಮಾಡುವ ಕಾರ್ಯ ಮಾಡುತ್ತವೆ ಎಂದು ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆ ಹೇಳಿದರು.
ಗುರುವಾರ ರಾತ್ರಿ ಬಂಟ್ವಾಳ ತಾಲೂಕಿನ ಕಲ್ಲಡ್ಕ ಸಮೀಪ ಮೊಗರನಾಡು ಸಾವಿರ ಸೀಮೆಯ ಶ್ರೀ ಕ್ಷೇತ್ರ ನಿಟಿಲಾಪುರದ ನಿಟಿಲಾಕ್ಷ ಸದಾಶಿವ ದೇವಸ್ಥಾನದ ಶ್ರೀ ದೇವರ ಪುನಃ ಪ್ರತಿಷ್ಠೆ, ಅಷ್ಟಬಂಧ ಬ್ರಹ್ಮಕಲಶೋತ್ಸವ ಕಾರ್ಯಕ್ರಮದ ಅಂಗವಾಗಿ ಬ್ರಹ್ಮಕಲಶಾಭಿಷೇಕ ಕಾರ್ಯಕ್ರಮದ ಧಾರ್ಮಿಕ ಸಭೆಯಲ್ಲಿ ಅವರು ಮಾತನಾಡಿದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಮತ್ತು ಜೀರ್ಣೋದ್ಧಾರ ಸಮಿತಿ ಗೌರವಾಧ್ಯಕ್ಷ ಸಚಿವ ಬಿ.ರಮಾನಾಥ ರೈ, ಇಂದು ಆತ್ಮದ ಪರಿಶುದ್ಧೀಕರಣ ದೇಗುಲಗಳ ಜೀರ್ಣೋದ್ಧಾರ ಕಾರ್ಯದಿಂದ ನಡೆಯಬೇಕು. ಇಂದು ದೇವಸ್ಥಾನಕ್ಕಾಗಿ ಇಪ್ಪತ್ತನಾಲ್ಕು ಗಂಟೆ ಅಹರ್ನಿಶಿ ಕೆಲಸ ಮಾಡಿದವವರು ಶ್ಲಾಘನಾರ್ಹರು ಎಂದರು.
ಮಾಣಿಲ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಆಶೀರ್ವಚನ ನೀಡಿದರು. ಹಿರಿಯ ಸಾಹಿತಿ ಡಾ. ಏರ್ಯ ಲಕ್ಷ್ಮೀನಾರಾಯಣ ಆಳ್ವ ಶುಭ ಹಾರೈಸಿದರು. ಜಿಪಂ ಸದಸ್ಯ ಪದ್ಮಶೇಖರ ಜೈನ್, ಅಕ್ರಮ ಸಕ್ರಮ ಸಮಿತಿ ಅಧ್ಯಕ್ಷ ಮಾಯಿಲಪ್ಪ ಸಾಲಿಯಾನ್, ಮಾಜಿ ಶಾಸಕ ಎ.ರುಕ್ಮಯ ಪೂಜಾರಿ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ಬರಿಮಾರ್, ಎಪಿಎಂಸಿ ಅಧ್ಯಕ್ಷ ಪದ್ಮನಾಭ ರೈ ಉಪಸ್ಥಿತರಿದ್ದರು. ಜೀರ್ಣೋದ್ಧಾರ ಸಮಿತಿ ಕಾರ್ಯಾಧ್ಯಕ್ಷ ಜಗನ್ನಾಥ ಚೌಟ ಬದಿಗುಡ್ಡೆ ಸ್ವಾಗತಿಸಿ, ಪ್ರಾಸ್ತಾವಿಕ ಮಾತನಾಡಿದರು.
ಬ್ರಹ್ಮಕಲಶೋತ್ಸವ ಸಮಿತಿ ಸಂಚಾಲಕ ಸಂತೋಷ್ ಕುಮಾರ್ ಶೆಟ್ಟಿ ಅರೆಬೆಟ್ಟು ವಂದಿಸಿದರು. ಬಾಲಕೃಷ್ಣ ಆಳ್ವ ಕೊಡಾಜೆ ಕಾರ್ಯಕ್ರಮ ನಿರೂಪಿಸಿದರು. ಇದೇ ಸಂದರ್ಭ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ಬರಿಮಾರ್, ಜೀರ್ಣೋದ್ಧಾರ ಸಮಿತಿ ಕಾರ್ಯಾಧ್ಯಕ್ಷ ಜಗನ್ನಾಥ ಚೌಟ ಬದಿಗುಡ್ಡೆ ಮತ್ತು ಬ್ರಹ್ಮಕಲಶೋತ್ಸವ ಸಮಿತಿ ಸಂಚಾಲಕ ಸಂತೋಷ್ ಕುಮಾರ್ ಶೆಟ್ಟಿ ಅರೆಬೆಟ್ಟು ಅವರನ್ನು ಸನ್ಮಾನಿಸಲಾಯಿತು.