ಮಂಗಳೂರಿನ ನಾಲ್ಕನೇ ಹೆಚ್ಚುವರಿ ಸೆಶನ್ಸ್ ನ್ಯಾಯಾಲಯವು ಪೊಳಲಿಯ ಸಂತು ಅಲಿಯಾಸ್ ಸಂತೋಷ್ ಕೊಲೆ ಆರೋಪಿಗಳಾದ ಇಕ್ಬಾಲ್ ಕಾವೂರು ಮತ್ತು ಫಾರೂಕ್ ಕಾರ್ಕಳ ಎಂಬಿಬ್ಬರಿಗೆ ಜೀವಾವಧಿ ಶಿಕ್ಷೆ ಮತ್ತು ತಲಾ 1 ಲಕ್ಷ ರೂ ದಂಡ ವಿಧಿಸಿ ಆದೇಶ ಹೊರಡಿಸಿದೆ.
2009ರ ಫೆ.18ರಂದು ಬೆಳಗ್ಗೆ 9.30ರ ವೇಳೆಗೆ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನಕ್ಕೆ ಹೋಗುತ್ತಿದ್ದ ಸಂತು ಅಲಿಯಾಸ್ ಸಂತೋಷ್ ಎಂಬಾತನಿಗೆ ನೀಲಿ ಬಣ್ಣದ ಕಾರಿನಲ್ಲಿ ಬಂದ ಅಪರಿಚಿತ ಗುಂಪೊಂದು ತಲೆ, ಹೊಟ್ಟೆಯ ಭಾಗಕ್ಕೆ ಕತ್ತಿಯಿಂದ ಕಡಿದು ತೀವ್ರವಾಗಿ ಗಾಯಗೊಳಿಸಿತ್ತು. ಈ ಘಟನೆಯಲ್ಲಿ ಸಂತೋಷ್ ಮೃತಪಟ್ಟಿದ್ದರು. ಈ ಕುರಿತು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ ಬಂಟ್ವಾಳ ಗ್ರಾಮಾಂತರ ಪೊಲೀಸರು 22 ಜನ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ದೋಷಾರೋಪಣ ಪತ್ರವನ್ನು ಸಲ್ಲಿಸಿದ್ದರು. ಈ ಬಗ್ಗೆ ಸುಧೀರ್ಘ ವಿಚಾರಣೆ ನಡೆಸಿದ ನಾಲ್ಕನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯವು ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಹಾಗೂ ತಲಾ ಒಂದು ಲಕ್ಷ ರೂಪಾಯಿ ದಂಡವನ್ನು ವಿಧಿಸಿ ಶುಕ್ರವಾರ ಆದೇಶ ಹೊರಡಿಸಿದೆ.
ಪ್ರಕರಣದ ತನಿಖೆಯನ್ನು ನಡೆಸಿದ ಆಗಿನ ಬಂಟ್ವಾಳ ಗ್ರಾಮಾಂತರ ವೃತ್ತ ನಿರೀಕ್ಷಕ ನಂಜುಂಡೇಗೌಡ ಹಾಗೂ ಪೊಲೀಸ್ ಸಿಬ್ಬಂದಿಗಳಿಗೆ ಬಹುಮಾನ ಘೋಷಿಸಿರುವುದಾಗಿ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಬಿ.ಆರ್. ರವಿಕಾಂತೇಗೌಡ ತಿಳಿಸಿದ್ದಾರೆ.