ಶಾಲೆ ಉಳಿಸುವ ನಿಟ್ಟಿನಲ್ಲಿ ಹೊಸ ಶಿಕ್ಷಣ ನೀತಿಯನ್ನು ಜಾರಿಗೊಳಿಸುವಂತೆ ಆಗ್ರಹಿಸಿ ಬಂಟ್ವಾಳ ತಾಲೂಕಿನ ಕರೆಂಕಿ ಶ್ರೀ ದುರ್ಗಾ ಫ್ರೆಂಡ್ಸ್ ಕ್ಲಬ್ ಅಧ್ಯಕ್ಷ ಪ್ರಕಾಶ್ ಅಂಚನ್ ನೇತೃತ್ವದ ಶಿಕ್ಷಣಾಭಿಮಾನಿಗಳ ನಿಯೋಗ ರಾಜ್ಯ ಶಿಕ್ಷಣ ಸಚಿವ ಎನ್.ಮಹೇಶ್ ಅವರನ್ನು ಬೆಂಗಳೂರಿನ ಕಚೇರಿಯಲ್ಲಿ ಭೇಟಿ ಮಾಡಿ ಚರ್ಚೆ ನಡೆಸಿದೆ. ಈ ಕುರಿತು ಪ್ರಯತ್ನಿಸುವುದಾಗಿ ಸಚಿವರು ಭರವಸೆ ನೀಡಿದ್ದಾಗಿ ನಿಯೋಗ ಹೇಳಿದೆ.
ಸರಕಾರಿ ಶಾಲೆ ಉಳಿಸುವ ನಿಟ್ಟಿನಲ್ಲಿ ಇತ್ತೀಚೆಗೆ ಶ್ರೀ ದುರ್ಗಾ ಫ್ರೆಂಡ್ಸ್ ಕ್ಲಬ್ ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಬೃಹತ್ ಪ್ರತಿಭಟನೆ ನಡೆಸಿದ್ದ ಹಿನ್ನಲೆಯಲ್ಲಿ ಈ ಬಗ್ಗೆ ಮಾತುಕತೆ ನಡೆಸಲು ಸ್ವತಃ ಶಿಕ್ಷಣ ಸಚಿವರು ಪ್ರಕಾಶ್ ಅಂಚನ್ ಅವರಿಗೆ ಆಹ್ವಾನ ನೀಡಿದ್ದು ಅದರಂತೆ ಮಂಗಳವಾರ ಶಿಕ್ಷಣಾಭಿಮಾನಿಗಳ ನಿಯೋಗ ಸಚಿವರನ್ನು ಭೇಟಿ ಮಾಡಿ ಚರ್ಚೆ ನಡೆಸಿತು. ರಾಜ್ಯದ ಎಲ್ಲಾ ಸರಕಾರಿ ಶಾಲೆಗಳಲ್ಲಿ ಎಲ್‌ಕೆಜಿ ಹಾಗೂ ಯುಕೆಜಿ ಸ್ಥಾಪನೆಗೆ ಅನುಮತಿ ನೀಡಬೇಕು ಹಾಗೂ ಕಳೆದ ಬಜೆಟ್‌ನಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಘೋಷಿಸಿದಂತೆ 1000 ಸರಕಾರಿ ಶಾಲೆಗಳಲ್ಲಿ ಒಂದನೇ ತರಗತಿಯಿಂದಲೇ ಆಂಗ್ಲ ಮಾಧ್ಯಮದಲ್ಲಿ ಕಲಿಕೆಯನ್ನು ಶೀಘ್ರ ಆರಂಭಿಸಬೇಕು ಎನ್ನುವ ಬೇಡಿಕೆಯನ್ನು ಮುಂದಿಡಲಾಯಿತು.
ಈ ಬೇಡಿಕೆಗೆ ಸ್ಪಂದಿಸಿದ ಸಚಿವರು ಶಿಕ್ಷಣಾ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ ಬೇಡಿಕೆಯನ್ನು ಈಡೇರಿಸುವ ಪ್ರ್ರಯತ್ನ ನಡೆಸಲಾಗುವುದು. ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿಯವರ ಉಪಸ್ಥಿತಿಯಲ್ಲಿ ಮತ್ತೊಂದು ಸುತ್ತಿನ ಚರ್ಚೆ ನಡೆಸುವುದಾಗಿ ಭರವಸೆ ನೀಡಿದರು. ಈ ಸಂದರ್ಭ ಶಿಕ್ಷಣ ಇಲಾಖೆಯ ಆಯುಕ್ತ ಟಿ.ಸಿ.ಜಾಫರ್ ಉಪಸ್ಥಿತರಿದ್ದರು.
ದುರ್ಗಾಫ್ರೆಂಡ್ಸ್ ಕ್ಲಬ್ ಅಧ್ಯಕ್ಷ ಪ್ರಕಾಶ್ ಅಂಚನ್, ಸದಸ್ಯರಾದ ರಾಮಚಂದ್ರ ಪೂಜಾರಿ ಕರೆಂಕಿ, ಪುರುಷೋತ್ತಮ ಅಂಚನ್, ದೀಪಕ್ ಸಾಲ್ಯಾನ್, ಶಿಕ್ಷಣಾಭಿಮಾನಿಗಳಾದ ರಮೇಶ್ ಬೆಟ್ಟಯ್ಯ, ಅಶೋಕ್ ಎ., ವಿಶಾಲ್ ಪ್ರಕಾಶ್ ನಿಯೋಗದಲ್ಲಿದ್ದರು.