ಬಂಟ್ವಾಳ ಪುರಸಭಾ ವ್ಯಾಪ್ತಿಯಲ್ಲಿ ಸ್ವಚ್ಛತೆಯನ್ನು ಸಮರ್ಪಕವಾಗಿ ನಿರ್ವಹಿಸುವ ಬಗ್ಗೆ ಪುರಸಭೆಯಿಂದ ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಸಂಚಯಗಿರಿ ಪ್ರದೇಶದಲ್ಲಿ ನಾಗರಿಕ ಕ್ರಿಯಾ ಸಮಿತಿಯವರ ಸಹಭಾಗಿತ್ವದಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮದಲ್ಲಿ ಮೊದಲಿಗೆ ಅರಿವು ನೀಡುವ ಕಾರ್ಯಕ್ರಮವನ್ನು ಸಂಚಯಗಿರಿಯ ರಾಣಿ ಅಬ್ಬಕ್ಕ ತುಳು ಪೀಠದಲ್ಲಿ ಆಯೋಜಿಸಲಾಯಿತು. ಅಧ್ಯಕ್ಷತೆಯನ್ನು ಮುಖ್ಯಾಧಿಕಾರಿ ರೇಖಾ ಜೆ. ಶೆಟ್ಟಿ ವಹಿಸಿ ಪುರಸಭೆ ವ್ಯಾಪ್ತಿಯಲ್ಲಿ ಸಂಪೂರ್ಣ ಪ್ಲಾಸ್ಟಿಕ್ ನಿಷೇಧಗೊಳಿಸುವ ಯೋಜನೆ ಆಯೋಜಿಸಲಾಗಿದೆ. ಈ ಕಾರ್ಯಕ್ರಮಕ್ಕೆ ಸಾರ್ವಜನಿಕರು, ಸಂಘಸಂಸ್ಥೆಗಳು ಸಹಕರಿಸಬೇಕೆಂದು ಕೇಳಿಕೊಂಡರು.
ಬಂಟ್ವಾಳ ಪುರಸಭೆಯ ಸಮುದಾಯ ಸಂಘಟನಾಧಿಕಾರಿ ಮತ್ತಡಿ ಮುಖ್ಯ ಅತಿಥಿಯಾಗಿ ಮಾತನಾಡಿ ಬಂಟ್ವಾಳ ನಗರವನ್ನು ಸ್ವಚ್ಛತೆಯಲ್ಲಿ ಮಾದರಿ ನಗರವನ್ನಾಗಿಸುವುದಕ್ಕೆ ಪ್ರಜ್ಞಾವಂತ ನಾಗರಿಕರ ಸಹಕಾರ ಅಗತ್ಯವಿದೆ ಎಂದು ಹೇಳಿದರು. ಸಂಚಯಗಿರಿ ಕ್ರಿಯಾ ಸಮಿತಿ ಅಧ್ಯಕ್ಷ ಪ್ರಶಾಂತ್ ಕೋಟ್ಯಾನ್ ಉಪಸ್ಥಿತರಿದ್ದರು.
ರಾಣಿ ಅಬ್ಬಕ್ಕ ತುಳು ಅಧ್ಯಯನ ಪೀಠದ ಅಧ್ಯಕ್ಷ, ಬಂಟ್ವಾಳ ಪುರಸಭೆಯ ಸ್ವಚ್ಛತಾ ರಾಯಭಾರಿಯಾಗಿರುವ ಪ್ರೊ. ತುಕರಾಮ ಪೂಜಾರಿ ಪ್ರಾಸ್ತಾವಿಕ ಮಾತುಗಳನ್ನಾಗಿ ಸ್ವಾಗತಿಸಿದರು. ದಾಮೋದರ ಸಂಚಯಗಿರಿ ವಂದಿಸಿದರು. ಪ್ರದೀಪ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು. ಸಭಾ ಕಾರ್ಯಕ್ರಮದ ಬಳಿಕ ಸ್ವಚ್ಛತಾ ಕಾರ್ಯವನ್ನು ನಿರ್ವಹಿಸಲಾಯಿತು.