ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘ, ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ದ.ಕ. ಜಿಲ್ಲಾ ಪಂಚಾಯಿತಿ, ದಕ್ಷಿಣ ಕನ್ನಡ ಪೊಲೀಸ್ ಇಲಾಖೆ, ನಾರಾವಿ ಗ್ರಾಮ ಪಂಚಾಯಿತಿಯಿಂದ ಪತ್ರಕರ್ತರ ಗ್ರಾಮ ವಾಸ್ತವ್ಯ ಡಿ.23ರಂದು ಬೆಳಗ್ಗೆ 9ರಿಂದ ಕುತ್ಲೂರು ದ.ಕ.ಜಿ.ಪಂ. ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಲಿದೆ.
ಕುದುರೆಮುಖ ರಾಷ್ಟ್ರೀಯ ಉದ್ಯಾವನದ ಬಳಿಯಿರುವ ಬೆಳ್ತಂಗಡಿ ತಾಲೂಕಿನ ಹಲವು ಸಮಸ್ಯೆಗಳನ್ನು ಎದುರಿಸುತ್ತಿರುವ ಗ್ರಾಮ ಕುತ್ಲೂರು. ಆ ಹಿನ್ನೆಲೆಯಲ್ಲಿ ಗ್ರಾಮ ಜನರ ಬಳಿ ತೆರಳಿ ಅವರ ಸಮಸ್ಯೆಗಳನ್ನು ಆಲಿಸಿ, ಅವರೊಂದಿಗೆ ಸಮಾಲೋಚನೆ ನಡೆಸಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವುದಲ್ಲದೆ, ಶಿಕ್ಷಣ, ಆರೋಗ್ಯ, ಅಭಿವೃದ್ಧಿ ಮತ್ತು ನೈರ್ಮಲ್ಯದ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಈ ಬಾರಿ ಪತ್ರಕರ್ತರ ಗ್ರಾಮ ವಾಸ್ತವ್ಯ ಮತ್ತು ಜಾಗೃತಿ ಶಿಬಿರ ಹಮ್ಮಿಕೊಳ್ಳಲಾಗಿದೆ.
ಈ ಗ್ರಾಮವಾಸ್ತವ್ಯದಲ್ಲಿ ಜಿಲ್ಲೆಯ ನಾನಾ ಇಲಾಖೆಗಳ ಅಧಿಕಾರಿಗಳು ಕುತ್ಲೂರಿಗೆ ಭೇಟಿ ನೀಡಿ ಗ್ರಾಮಸ್ಥರ ಅಹವಾಲು ಸ್ವೀಕರಿಸಲಿದ್ದಾರೆ. ಗ್ರಾಮಸ್ಥರೊಂದಿಗೆ ಸಮಾಲೋಚನೆ ನಡೆಸಲಿದ್ದಾರೆ. ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಲಿದ್ದಾರೆ. ಗ್ರಾಮಸ್ಥರಿಂದ ವಿವಿಧ ಇಲಾಖಾ ಅಧಿಕಾರಿಗಳಿಂದ ಅಹವಾಲು ಸ್ವೀಕಾರ ಮಾಡಲಿದ್ದಾರೆ.
ಉದ್ಘಾಟನೆ: ಗ್ರಾಮ ವಾಸ್ತವ್ಯ ಕಾರ್ಯಕ್ರಮವನ್ನು ದ.ಕ. ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್, ಉದ್ಘಾಟಿಸಲಿದ್ದಾರೆ. ದ.ಕ.ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ ಸೆಲ್ವ ಮಣಿ ಆರ್ ವೈದ್ಯಕೀಯ ಶಿಬಿರ ಉದ್ಘಾಟಿಸಲಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರವಿಕಾಂತೇಗೌಡ ಸಂವಾದಕ್ಕೆ ಚಾಲನೆ ನೀಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘ ಅಧ್ಯಕ್ಷ ಮನೋಹರ ಬಳಂಜ, ಎ.ಜೆ. ವೈದ್ಯಕೀಯ ಮಹಾವಿದ್ಯಾಲಯ ಉಪಾಧ್ಯಕ್ಷ ಪ್ರಶಾಂತ್ ಶೆಟ್ಟಿ, ನಾರಾವಿ ಗ್ರಾಮ ಪಂಚಾಯಿತಿ ಅಧ್ಯಕ್ಷ ರವೀಂದ್ರ ಪೂಜಾರಿ ಉಪಸ್ಥಿತರಿರುವರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ದ.ಕ. ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ವಹಿಸಲಿದ್ದಾರೆ.
ಎ.ಜೆ. ವೈದ್ಯಕೀಯ ವಿಜ್ಞಾನ ಶಿಕ್ಷಣ ಸಂಸ್ಥೆ ಹಾಗೂ ಆಸ್ಪತ್ರೆ ಕುಂಟಿಕಾನ , ಮಂಗಳೂರು ಇದರ ತಜ್ಞ ವೈದ್ಯರ ತಂಡದಿಂದ ಬೆಳಗ್ಗೆ 9.30 ರಿಂದ ಮಧ್ಯಾಹ್ನ 1 ಗಂಟೆಯ ತನಕ ಉಚಿತ ವೈದ್ಯಕೀಯ ತಪಾಸಣೆ ನಡೆಯಲಿದೆ.
ಸಂವಾದ ಕಾರ್ಯಕ್ರಮ: 2ರಿಂದ 3 ಗಂಟೆಯವರೆಗೆ ಪತ್ರಕರ್ತರೊಂದಿಗೆ ಗ್ರಾಮಸ್ಥರ ಸಂವಾದ, 3ಗಂಟೆಯಿಂದ 3.30 ಜನಪ್ರನಿಧಿಗಳೊಂದಿಗೆ ಸಂವಾದ ನಡೆಯಲಿದೆ. ಈ ಸಂದರ್ಭ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್, ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕ ಹರೀಶ್ ಕುಮಾರ ಉಪಸ್ಥಿತರಿರುವರು. 3.30ರಿಂದ ಅಧಿಕಾರಿಗಳೊಂದಿಗೆ ಗ್ರಾಮಸ್ಥರ ಸಂವಾದ ನಡೆಯಲಿದೆ.
ಸಂಜೆ 4ಗಂಟೆಗೆ ಸಮಾರೋಪ ನಡೆಯಲಿದ್ದು, ದ.ಕ. ಜಿಲ್ಲಾಧಿಕಾರಿ ಎಸ್. ಸಸಿಕಾಂತ್ ಸೆಂಥಿಲ್ ಸಮಾರೋಪ ಭಾಷಣ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಅಪರ ಜಿಲ್ಲಾಧಿಕಾರಿ ಕುಮಾರ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕೃಷ್ಣಮೂರ್ತಿ, ಎ.ಜೆ. ಆಸ್ಪತ್ರೆ ಆಡಳಿತ ನಿರ್ದೇಶಕ ಡಾ. ಪ್ರಶಾಂತ್ ಮಾರ್ಲ, ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಮನೋಹರ್ ಬಳಂಜ ಉಪಸ್ಥಿತರಿರುವರು. ದ.ಕ. ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಅಧ್ಯಕ್ಷತೆ ವಹಿಸಲಿದ್ದಾರೆ.
ಸಂಜೆ 5ರಿಂದ 6ಗಂಟೆಯವರೆಗೆ ಕುತ್ಲೂರು ಗ್ರಾಮದ ಹಿರಿಯರೊಂದಿಗೆ ಪತ್ರಕರ್ತರ ಚಾವಡಿ ಚರ್ಚೆ, 6ಗಂಟೆಯ ಬಳಿಕ ಪತ್ರಕರ್ತರ ಕುತ್ಲೂರು ಗ್ರಾಮದ ಮನೆಯಲ್ಲಿ ಗ್ರಾಮ ವಾಸ್ತವ್ಯ ಹೂಡಲಿದ್ದಾರೆ ಎಂದು ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Be the first to comment on "23ರಂದು ಕಾರ್ಯನಿರತ ಪತ್ರಕರ್ತರ ಸಂಘದಿಂದ ಗ್ರಾಮವಾಸ್ತವ್ಯ, ಜಿಲ್ಲಾಡಳಿತ ಸಹಯೋಗ"