ಪಾಣೆಮಂಗಳೂರು ರಾಷ್ಟ್ರೀಯ ಹೆದ್ದಾರಿ ಸಮೀಪದ ನರಿಕೊಂಬು ಎಸ್‌ವಿಎಸ್ ಶಾಲಾ ಬಳಿ ಸ್ಥಳೀಯ ಗ್ರಾಮ ಪಂಚಾಯಿತಿ ಮತ್ತಿತರ ಸಹಭಾಗಿತ್ವದಲ್ಲಿ ಸುಮಾರು ರೂ 18.5 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಲಾದ ’ನವಜೀವನ’ ಹವಾನಿಯಂತ್ರಿತ ಅಂಗನವಾಡಿ ಕೇಂದ್ರ ಇದೇ 24ರಂದು ಉದ್ಘಾಟನೆಗೊಳ್ಳಲಿದೆ. ಈಗಾಗಲೇ ಶಂಭೂರಿನ ಅಂಗನವಾಡಿ ಕೇಂದ್ರವೊಂದರಲ್ಲಿ ಹವಾನಿಯಂತ್ರಿತ ವ್ಯವಸ್ಥೆ ಅಳವಡಿಸಲಾಗಿತ್ತು. ಸುಸಜ್ಜಿತ ಕಟ್ಟಡ ಮತ್ತು ಸುತ್ತಲೂ ಆವರಣಗೋಡೆ, ಹೂಗಿಡ ಮಾತ್ರವಲ್ಲದೆ ಮಕ್ಕಳನ್ನು ತನ್ನತ್ತ ಆಕರ್ಷಿಸಲು ಇಲ್ಲಿನ ಗೋಡೆಯಲ್ಲಿ ಬಣ್ಣ ಬಣ್ಣದ ಚಿತ್ತಾರ ಮೂಡಿಸಿರುವುದು ನೋಡುಗರ ಗಮನ ಸೆಳೆಯುತ್ತಿದೆ.
ಅಂದು ಬೆಳಿಗ್ಗೆ ಗಂಟೆ 10.30ಕ್ಕೆ ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ಅಂಗನವಾಡಿ ಕೇಂದ್ರ ಉದ್ಘಾಟಿಸಲಿದ್ದು, ಶಾಸಕ ಉಳಿಪಾಡಿಗುತ್ತು ರಾಜೇಶ ನಾಯ್ಕ್, ಸಂಸದ ನಳಿನ್ ಕುಮಾರ್ ಕಟೀಲು, ವಿಧಾನಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ, ಪ್ರತಾಪಚಂದ್ರ ಶೆಟ್ಟಿ, ಹರೀಶ ಕುಮಾರ್, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಉಪಾಧ್ಯಕ್ಷೆ ಕಸ್ತೂರಿ ಪಂಜ, ಸದಸ್ಯೆ ಕಮಲಾಕ್ಷಿ ಪೂಜಾರಿ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಚಂದ್ರಹಾಸ ಕರ್ಕೇರ, ಉಪಾಧ್ಯಕ್ಷ ಅಬ್ಬಾಸ್ ಆಲಿ, ಸ್ಥಾಯಿ ಸಮಿತಿ ಸದಸ್ಯೆ ಧನಲಕ್ಷ್ಮಿ ಸಿ.ಬಂಗೇರ, ಸದಸ್ಯೆ ಗಾಯತ್ರಿ ಆರ್.ಸಪಲ್ಯ, ಗ್ರಾಮ ಪಂಚಾಯಿತಿ ಅಧ್ಯಕ್ಷ ಯಶೋಧ ಕರ್ಬೆಟ್ಟು ಮತ್ತಿತರ ಗಣ್ಯರು ಭಾಗವಹಿಸುವರು.
1991ರಲ್ಲಿ ಇಲ್ಲಿನ ವ್ಯಾಯಾಮ ಶಾಲೆಯಲ್ಲಿ ಆರಂಭಗೊಂಡಿದ್ದ ಈ ಅಂಗನವಾಡಿ ಕೇಂದ್ರಕ್ಕೆ ಇದೀಗ ಹವಾನಿಯಂತ್ರಿತ ಕೊಠಡಿಯಲ್ಲಿ ವಿಸ್ತಾರವಾದ ಒಳಾಂಗಣ ಮತ್ತು ಹೊರಾಂಗಣ, ಭೋಜನಾಲಯ, ಅಡುಗೆ ಕೋಣೆ, ಸ್ನಾನಗೃಹ, ಶೌಚಾಲಯ ಮತ್ತಿತರ ಮೂಲಭೂತ ಸೌಲಭ್ಯ ಒದಗಿಸಲಾಗಿದೆ. ಇದೇ ವೇಳೆ ಇಲ್ಲಿನ ಪಂಚಾಯಿತಿ ವ್ಯಾಪ್ತಿಯಲ್ಲಿ ಕೈಗೊಂಡಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ಕಾರ್ಯಕ್ರಮ ನಡೆಯಲಿದೆ ಎಂದು ಬಾಲ ವಿಕಾಸ ಸಮಿತಿ ಅಧ್ಯಕ್ಷ ರವೀಂದ್ರ ಸಪಲ್ಯ ತಿಳಿಸಿದ್ದಾರೆ.