ಮಂಗಳೂರು: ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನ ಸಹಭಾಗಿತ್ವದಲ್ಲಿ ಒಂದು ದಿನದ ಮಾಧ್ಯಮ ಕಾರ್ಯಾಗಾರವನ್ನು ಜ.16ರಂದು ಬುಧವಾರ ಮಂಗಳೂರು ಹಂಪನಕಟ್ಟೆ ವಿವಿ ಕಾಲೇಜಿನ ರವೀಂದ್ರ ಕಲಾ ಭವನದಲ್ಲಿ ಆಯೋಜಿಸಿದೆ.
ಕರ್ನಾಟಕ ಮಾಧ್ಯಮ ಅಕಾಡಮಿ ಅಧ್ಯಕ್ಷ ಎಂ.ಸಿದ್ಧರಾಜು ಅವರು ಮಾಧ್ಯಮ ಕಾರ್ಯಾಗಾರ ಉದ್ಘಾಟಿಸುವರು. ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ಅವರು ಯೂನಿಯನ್ ವತಿಯಿಂದ ಸ್ಥಾಪಿಸಲಾಗುವ ಪತ್ರಕರ್ತರ ಕ್ಷೇಮ ನಿಧಿಗೆ ಚಾಲನೆ ನೀಡುವರು.
ಮಂಗಳೂರು ವಿಶ್ವವಿದ್ಯಾನಿಲಯದ ಕುಲಸಚಿವ ಪ್ರೊ.ಎ.ಎಂ.ಖಾನ್ ಅವರು ಸಮಾರಂಭದ ಮುಖ್ಯ ಅತಿಥಿಯಾಗಿದ್ದು, ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಅಧ್ಯಕ್ಷ ನಾರಾಯಣ ಅವರು ಅಧ್ಯಕ್ಷತೆ ವಹಿಸುವರು.
ಕರ್ನಾಟಕ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಸಂವಿಧಾನ ತಜ್ಞ ಎಚ್.ಕಾಂತರಾಜ್ ಅವರು ಸಂವಿಧಾನದತ್ತ ಹಕ್ಕುಗಳ ರಕ್ಷಣೆಯಲ್ಲಿ ಮಾಧ್ಯಮದ ಪಾತ್ರ ಕುರಿತು ವಿಚಾರ ಮಂಡನೆ ಮಾಡುವರು. ಸಂಸದ ನಳಿನ್ ಕುಮಾರ್ ಕಟೀಲ್, ವೇದವ್ಯಾಸ ಕಾಮತ್, ಸಂಸದೀಯ ಕಾರ್ಯದರ್ಶಿ ಐವನ್ ಡಿ ಸೋಜ, ವಿಧಾನಪರಿಷತ್ ಸದಸ್ಯ ಹರೀಶ್ ಕುಮಾರ್, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಎಂ.ಎನ್.ರಾಜೇಂದ್ರ ಕುಮಾರ್, ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್, ಮಂಗಳೂರು ನಗರ ಪೊಲೀಸ್ ಆಯುಕ್ತ ಟಿ.ಆರ್.ಸುರೇಶ್, ಹಿಂದುಳಿದ ವರ್ಗಗಳ ಒಕ್ಕೂಟದ ಅಧ್ಯಕ್ಷ ನವೀನಚಂದ್ರ ಡಿ.ಸುವರ್ಣ, ಜೆಡಿಎಸ್ ಮುಖಂಡ ಎಂ.ಬಿ.ಸದಾಶಿವ ಸುಳ್ಯ, ವಿವಿ ಕಾಲೇಜು ಪ್ರಾಂಶುಪಾಲ ಡಾ.ಉದಯಕುಮಾರ್ ಇರ್ವತ್ತೂರು ಉಪಸ್ಥಿತರಿರುವರು.
ಅಭಿವೃದ್ಧಿ ಪತ್ರಿಕೋದ್ಯಮ ಎದುರಿಸುತ್ತಿರುವ ಸವಾಲುಗಳು ಎಂಬ ಬಗ್ಗೆ ಹಿರಿಯ ಪತ್ರಕರ್ತ,ಮಾಧ್ಯಮ ಅಕಾಡಮಿ ಸದಸ್ಯ ಗಂಗಾಧರ ಹಿರೇಗುತ್ತಿ, ಮಾಧ್ಯಮ ರಂಗ-ಆಕರ್ಷಣೆ, ಭ್ರಮೆ ಮತ್ತು ಉದ್ಯೋಗವಕಾಶ ವಿಚಾರದ ಬಗ್ಗೆ ಮೂಡಬಿದಿರೆ ಆಳ್ವಾಸ್ ಕಾಲೇಜು ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥೆ ಮೌಲ್ಯ ಜೀವನ್ ರಾಂ ಅವರು ವಿಚಾರ ಮಂಡಿಸುವರು. ಸುದ್ದಿಬಿಡುಗಡೆ ಪತ್ರಿಕಾ ಸಮೂಹದ ಸಂಪಾದಕ ಡಾ.ಯು.ಪಿ.ಶಿವಾನಂದ ಗೋಷ್ಠಿಯ ಅಧ್ಯಕ್ಷತೆ ವಹಿಸಲಿದ್ದು, ಹಿರಿಯ ಪತ್ರಕರ್ತ ಪಿ.ಬಿ.ಹರೀಶ್ ರೈ ಮುಖ್ಯ ಅತಿಥಿಯಾಗಿ ಭಾಗವಹಿಸುವರು ಎಂದು ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ದ.ಕ.ಜಿಲ್ಲಾ ಸಮಿತಿ ಅಧ್ಯಕ್ಷ ಹರೀಶ್ ಬಂಟ್ವಾಳ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.