ಬಂಟ್ವಾಳ

ಪದವಿ ತರಗತಿಗಳಲ್ಲಿ ಐಚ್ಛಿಕ ಭಾಷೆಯಾಗಿ ತುಳು: ಎ.ಸಿ.ಭಂಡಾರಿ

www.bantwalnews.com

ಬಂಟ್ವಾಳ ವರದಿ: ಮುಂದಿನ ಶೈಕ್ಷಣಿಕ ವರ್ಷದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಪದವಿ ತರಗತಿಗಳಿಗೆ ಐಚ್ಛಿಕ ಭಾಷೆಯಾಗಿ ತುಳು ಅಳವಡಿಕೆಯಾಗಲಿದೆ. ಇದು ಭಾಷೆಯ ಉಳಿವಿಗೆ ಪೂರಕವಾಗಲಿದೆ ಎಂದು ಕರ್ನಾಟಕ ತುಳು ಸಾಹಿತ್ಯ ಅಕಾಡಮಿ ಅಧ್ಯಕ್ಷ ಎ.ಸಿ.ಭಂಡಾರಿ ಹೇಳಿದರು.

ಕರ್ನಾಟಕ ತುಳು ಸಾಹಿತ್ಯ ಅಕಾಡಮಿ ಮತ್ತು ಬಿ.ಮೂಡ ಸರಕಾರಿ ಪದವಿಪೂರ್ವ ಕಾಲೇಜಿನ ಸಾಹಿತ್ಯ ಸಂಘದ ಸಹಯೋಗದೊಂದಿಗೆ ತುಳು ಸಾಹಿತ್ಯ ಕಮ್ಮಟ ಕಾಲೇಜಿನ ಸಭಾಂಗಣದಲ್ಲಿ ಶನಿವಾರ ನಡೆಯಿತು. ಈ ಸಂದರ್ಭ ಉದ್ಘಾಟಿಸಿ ಮಾತನಾಡಿದ ಅವರು,  ಅಳಿವಿನಂಚಿನಲ್ಲಿರುವ ತುಳು ಭಾಷೆ, ಸಂಸ್ಕೃತಿಯನ್ನು ಉಳಿಸಿ ಬೆಳೆಸುವಲ್ಲಿ ಅಕಾಡಮಿ ನಿರಂತರ ಪ್ರಯತ್ನ ಮಾಡುತ್ತಿದೆ. ಗ್ರಾಮೀಣ ಪ್ರದೇಶದಲ್ಲಿ, ಶಾಲಾ-ಕಾಲೇಜುಗಳಲ್ಲಿ ತುಳು ಸಂಸ್ಕೃತಿಯ ಸೊಗಡನ್ನು ಪರಿಚಯಿಸುವ ಕೆಲಸ ನಡೆಯುತ್ತಿದೆ. ತುಳು ಸಾಹಿತ್ಯದ ಬೆಳವಣಿಗೆಯ ದೃಷ್ಟಿಯಿಂದ ಸಾಹಿತ್ಯ ಕಮ್ಮಟ, ಪುಸ್ತಕಗಳ ಬಿಡುಗಡೆ, ತುಳು ಕೃತಿಗಳನ್ನು ಇತರ ಭಾಷೆಗೆ ಅನುವಾದಿಸುವ ಕಾರ್ಯ ನಡೆಯುತ್ತಿದೆ. ಮುಂದಿನ ವರ್ಷದಿಂದ ಪದವೀ ತರಗತಿಗಳಲ್ಲಿ ತುಳುವನ್ನು ಐಚ್ಛಿಕ ಭಾಷೆಯಾಗಿ ಬಳಸಲಾಗುವುದು. ಅದಲ್ಲದೆ, ಪದವಿ ಪೂರ್ವ ಕಾಲೇಜುಗಳಲ್ಲಿ ತುಳು ಭಾಷೆಯನ್ನು ಕಲಿಯಲು ಅವಕಾಶ ಕೋರಿ ರಾಜ್ಯ ಸರಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗುವುದು ಎಂದು ಹೇಳಿದರು.

ಕಾಲೇಜಿನ ಪ್ರಾಚಾರ್ಯ ಯೂಸೂಫ್ ವಿಟ್ಲ ಅಧ್ಯಕ್ಷತೆ ವಹಿಸಿದ್ದರು. ಬಂಟ್ವಾಳ ಎಸ್‌ವಿಎಸ್ ಪದವಿಪೂರ್ವ ಕಾಲೇಜಿನ ಉಪನ್ಯಾಸಕ ಚೇತನ್ ಮುಂಡಾಜೆ ತುಳು ಸಾಹಿತ್ಯ ಹಾಗೂ ಪತ್ರ ಬರವಣಿಗೆಯ ವಿಚಾರದಲ್ಲಿ ವಿಷಯ ಮಂಡಿಸಿದರು.

ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷೆ ರಜನಿ ಚಿಕ್ಕಯಮಠ, ತುಳು ಸಾಹಿತ್ಯ ಅಕಾಡಮಿಯ ಸದಸ್ಯರಾದ ವಿಜಯ ಶೆಟ್ಟಿ ಸಾಲೆತ್ತೂರು, ಸುಧಾ ನಾಗೇಶ್ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಿಗೆ ತುಳು ಕವಿತೆ, ತುಳು ಕತೆ, ತುಳು ಪತ್ರ ಲೇಖನ ಬರೆಯುವ ಬಗ್ಗೆ ಕಾರ್ಯಾಗಾರ ನಡೆಯಿತು.

ಅಕಾಡಮಿ ಸದಸ್ಯೆ ವಿಜಯ ಶೆಟ್ಟಿ ಸಾಲೆತ್ತೂರು ಅಧ್ಯಕ್ಷತೆಯಲ್ಲಿ ಸಮಾರೋಪ ಸಮಾರಂಭ ನಡೆಯಿತು. ಕಮ್ಮಟದಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ಹಾಗೂ ಪ್ರತೀ ವಿಭಾಗದಲ್ಲಿ ಅತ್ಯುತ್ತಮ ಬರಹಗಳಿಗೆ ಅಕಾಡಮಿ ಸದಸ್ಯೆ ಸುಧಾ ನಾಗೇಶ್ ಬಹುಮಾನ ವಿತರಿಸಿದರು.

ಅಕಾಡಮಿ ಸದಸ್ಯ ಎ.ಗೋಪಾಲ ಅಂಚನ್ ಪ್ರಸ್ತಾವಿಸಿದರು. ಕಾಲೇಜಿನ ಉಪನ್ಯಾಸಕ ಅಬ್ದುಲ್ ರಝಾಕ್ ಅನಂತಾಡಿ ಸ್ವಾಗತಿಸಿ, ಎನ್ನೆಸ್ಸೆಸ್ ಕಾರ್ಯಕ್ರಮ ಅಧಿಕಾರಿ ಬಾಲಕೃಷ್ಣ ನಾಯ್ಕ್ ವಂದಿಸಿದರು.  ದೀಕ್ಷಿತಾ ಹಾಗೂ ಪ್ರಜ್ಞಾ ನಿರೂಪಿಸಿದರು. ಸುಮಾರು ೧೦೦ಕ್ಕೂ ಹೆಚ್ಚು ವಿದ್ಯಾರ್ಥಿಗಳು ಕಮ್ಮಟದಲ್ಲಿ ಭಾಗವಹಿಸಿದ್ದರು.

Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ