ಕಲ್ಲಡ್ಕ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯೀಗ ಊರ ದಾನಿಗಳು, ವಿದ್ಯಾಭಿಮಾನಿಗಳ ಸಹಕಾರದಿಂದ ಅಭಿವೃದ್ಧಿ ಹೊಂದುತ್ತಿದೆ. ಶತಮಾನೋತ್ತರ ಬೆಳ್ಳಿಹಬ್ಬ ನಿಮಿತ್ತ ಮೂರು ಪ್ರತ್ಯೇಕ ಕೊಠಡಿಗಳು ನಿರ್ಮಾಣವಾಗಿವೆ. ಶನಿವಾರ ನಡೆದ ಕಾರ್ಯಕ್ರಮದಲ್ಲಿ ಕೊಠಡಿಗಳನ್ನು ವಿಧಾನಪರಿಷತ್ತು ಸದಸ್ಯ ಐವನ್ ಡಿಸೋಜ, ಜಿಪಂ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ತಾಪಂ ಅಧ್ಯಕ್ಷ ಚಂದ್ರಹಾಸ ಕರ್ಕೇರ ಉದ್ಘಾಟಿಸಿದರೆ, ಶತಮಾನೋತ್ತರ ಬೆಳ್ಳಿಹಬ್ಬ ಪ್ರಯುಕ್ತ ನಿರ್ಮಾಣಗೊಳ್ಳುತ್ತಿರುವ 10 ಕೊಠಡಿಗಳ ಕಟ್ಟಡ ನಿರ್ಮಾಣ ಕಾಮಗಾರಿಗೆ ಸಂಸದ ನಳಿನ್ ಕುಮಾರ್ ಕಟೀಲ್ ಶಿಲೆ ಹಸ್ತಾಂತರಿಸಿದರು.
ಒಟ್ಟು 3 ಕೋಟಿ ರೂ ವೆಚ್ಚದಲ್ಲಿ ಈ ಕಟ್ಟಡ ನಿರ್ಮಾಣವಾಗುತ್ತಿದ್ದು , ಎಂಆರ್ ಪಿಎಲ್ ನಿಂದ 64 ಲಕ್ಷ ರೂ ನೆರವು ಮಂಜೂರುಗೊಂಡಿದೆ ಎಂದು ಈ ಸಂದರ್ಭ ನಳಿನ್ ಹೇಳಿದರು.
ಶಾಸಕ ಉಳಿಪಾಡಿಗುತ್ತು ರಾಜೇಶ ನಾಯ್ಕ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಶಾಂತಿ ಮತ್ತು ಸೌಹಾರ್ದತೆ ಕಾಯ್ದುಕೊಂಡ ದೇಶಗಳು ಮಾತ್ರ ಅಭಿವೃದ್ಧಿಪಥದಲ್ಲಿ ಮುನ್ನಡೆಯಲು ಸಾಧ್ಯ ಎಂದರು.
ಇದೇ ವೇಳೆ ವಿಧಾನಪರಿಷತ್ ಸದಸ್ಯ ಐವನ್ ಡಿಸೋಜ ಅವರು ನೂತನ ಸೋಲಾರ್ ಘಟಕ ಅಳವಡಿಸಲು 3 ಲಕ್ಷ ರೂ ಅನುದಾನ, ನೂತನ ಕಟ್ಟಡ ನಿರ್ಮಾಣ ಕಾಮಗಾರಿಗೆ ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಚಂದ್ರಹಾಸ ಕರ್ಕೇರ 1 ಲಕ್ಷ ರೂ ಅನುದಾನ, ತಾ.ಪಂ.ಸದಸ್ಯ ಮಹಾಬಲ ಆಳ್ವ 50 ಸಾವಿರ ರೂ ಅನುದಾನ ನೀಡುವುದಾಗಿ ಘೋಷಿಸಿದರು.
ದಾನಿ ಪಿ.ಬಿ.ಇಬ್ರಾಹಿಂ (ಅವರು ಹಿರಿಯ ವಿದ್ಯಾರ್ಥಿಯೂ ಹೌದು) ನೀಡಿದ ರೂ 5 ಲಕ್ಷ ವೆಚ್ಚದ ರಂಗಮಂದಿರ ನಿರ್ಮಾಣ ಕಾಮಗಾರಿಗೆಶಿಕ್ಷಣಪ್ರೇಮಿ, ಉದ್ಯಮಿ ಸಂತೋಷ್ ಕುಮಾರ್ ಶೆಟ್ಟಿ ಅರೆಬೆಟ್ಟು ಶಿಲಾನ್ಯಾಸ ನೆರವೇರಿಸಿದರು.
ಆಷಾಢ ಮಾಸದ ವೈವಿಧ್ಯಮಯ ತಿಂಡಿ ತಿನಿಸುಗಳ ಆಹಾರ ಮೇಳವನ್ನು ಸ್ಥಳೀಯ ಜಿಲ್ಲಾ ಪಂಚಾಯಿತಿ ಸದಸ್ಯೆ ಕಮಲಾಕ್ಷಿ ಕೆ.ಪೂಜಾರಿ ಉದ್ಘಾಟಿಸಿದರು. ನೂತನ ಕಟ್ಟಡ ಕಾಮಗಾರಿಗೆ ರೂ 4 ಲಕ್ಷ ಅನುದಾನ ಒದಗಿಸುವುದಾಗಿ ಭರವಸೆ ನೀಡಿದರು.
ಇದೇ ವೇಳೆ ಕಲ್ಲಡ್ಕ ಶ್ರೀ ಶಾರದಾ ಸೇವಾ ಪ್ರತಿಷ್ಠಾನ ವತಿಯಿಂದ ಸ್ಥಳೀಯ ಯುವಕರು ನೂತನ ಕಟ್ಟಡ ನಿರ್ಮಾಣಕ್ಕೆ ರೂ 1ಲಕ್ಷ ಮೊತ್ತದ ಚೆಕ್ ಹಸ್ತಾಂತರಿಸಿ ಗಮನ ಸೆಳೆದರು.
ಸುಮಾರು 70 ಬಗೆಯ ಆಷಾಢ ಮಾಸದ ವೈವಿಧ್ಯಮಯ ತಿಂಡಿ ತಿನಿಸುಗಳು ಜನಾಕರ್ಷಣೆ ಪಡೆಯಿತು. ತಾಲ್ಲೂಕು ಪಂಚಾಯಿತಿ ಉಪಾಧ್ಯಕ್ಷ ಅಬ್ಬಾಸ್ ಆಲಿ, ಸ್ಥಾಯಿ ಸಮಿತಿ ಅಧ್ಯಕ್ಷೆ ಧನಲಕ್ಷ್ಮಿ ಸಿ.ಬಂಗೇರ, ಹಿರಿಯ ಹಳೆ ವಿದ್ಯಾರ್ಥಿ, ಮಾಜಿ ಶಾಸಕರಾದ ಎ.ರುಕ್ಮಯ ಪೂಜಾರಿ, ಕೆ.ಪದ್ಮನಾಭ ಕೊಟ್ಟಾರಿ, ಎಪಿಎಂಸಿ ಅಧ್ಯಕ್ಷ ಕೆ.ಪದ್ಮನಾಭ ರೈ, ಉದ್ಯಮಿ ಜಿ.ಯೂಸುಫ್ ಗೋಳ್ತಮಜಲು, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ನೋಣಯ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷೆ ಐಡಾ ಸುರೇಶ್ ಮತ್ತಿತರರು ಉಪಸ್ಥಿತರಿದ್ದರು.
ಮುಖ್ಯ ಶಿಕ್ಷಕ ಅಬೂಬಕ್ಕರ್ ಆಶ್ರಫ್ ಸ್ವಾಗತಿಸಿ, ಶತಮಾನೋತ್ತರ ಬೆಳ್ಳಿಹಬ್ಬ ಸಮಿತಿ ಅಧ್ಯಕ್ಷ ನಾಗೇಶ ಕೆ. ಪ್ರಾಸ್ತಾವಿಕ ಮಾತನಾಡಿದರು. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಕೆ.ರಾಜೇಶ ಕೊಟ್ಟಾರಿ ವಂದಿಸಿದರು. ಕಲಾವಿದ ರಮೇಶ ಕಲ್ಲಡ್ಕ ಕಾರ್ಯಕ್ರಮ ನಿರೂಪಿಸಿದರು.