ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣಾ ಕಾರ್ಯಕ್ರಮಕ್ಕೆ ಬಂಟ್ವಾಳ ಮಿನಿ ವಿಧಾನಸೌಧ ಸಭಾಂಗಣದಲ್ಲಿ ಭಾನುವಾರ ನಡೆದ ಕಾರ್ಯಕ್ರಮದಲ್ಲಿ ಚಾಲನೆ ನೀಡಲಾಯಿತು.
ಸೆ.1ರಿಂದ 30ರವರೆಗೆ ಬೂತ್ ಮಟ್ಟದ ಅಧಿಕಾರಿಗಳಿಂದ ಮನೆ ಮನೆ ಭೇಟಿ ಕಾರ್ಯಕ್ರಮ ಈ ಅಭಿಯಾನದಲ್ಲಿದೆ. ಮತದಾರರ ಪಟ್ಟಿಯಲ್ಲಿ ಸೇರ್ಪಡೆ ಹೆಸರು ತೆಗೆದು ಹಾಕುವಿಕೆ ಹಾಗೂ ತಿದ್ದುಪಡಿ ಇದರ ಬಗ್ಗೆ ಸಂಪೂರ್ಣ ಮಾಹಿತಿಗಾಗಿ ಬೂತು ಮಟ್ಟದ ಅಧಿಕಾರಿಗಳು ಪ್ರತಿ ಮನೆ ಮನೆಗೆ ಭೇಟಿ ನೀಡಲಿದ್ದಾರೆ ಎಂದು ಈ ಸಂದರ್ಭ ಬಂಟ್ವಾಳ ತಹಶೀಲ್ದಾರ್ ರಶ್ಮಿ ಎಸ್.ಆರ್. ತಿಳಿಸಿದರು.
ನಮ್ಮ ಗ್ರಾಮ ಲೆಕ್ಕಾಧಿಕಾರಿಗಳು, ಬೂತು ಮಟ್ಟದ ಅಧಿಕಾರಿಗಳು, ಇತರ ಎಲ್ಲಾ ಸಿಬ್ಬಂದಿ ಬಿಸಿಲು ಮಳೆಗಳನ್ನು ಲೆಕ್ಕಿಸದೆ ದಿನಪೂರ್ತಿ ದುಡಿಯುವುದರಿಂದ ಯಶಸ್ವಿಯಾಗಿ ಚುನಾವಣೆಗಳನ್ನು ನಡೆಸಲು ಸಾಧ್ಯವಾಗಿದೆ. ಮತದಾರರ ಪರಿಷ್ಕರಣೆಯ ಸದುಪಯೋಗವನ್ನು ಎಲ್ಲರೂ ಪಡೆದುಕೊಳ್ಳಬೇಕು ಎಂದರು.
ತುಳು ಚಲನಚಿತ್ರವೊಂದರಲ್ಲಿ ನಾಯಕಿಯಾಗಿ ಅಭಿನಯಿಸಿದ್ದ ಐಶ್ವರ್ಯಾ ಆಚಾರ್ಯ ಕಾರ್ಯಕ್ರಮವನ್ನು ಉದ್ಘಾಟಿಸಿ, ದೇಶವನ್ನು ಬಲಿಷ್ಠಗೊಳಿಸಲು ಮತದಾರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಳ್ಳಬೇಕು ಎಂದರು. ಬಂಟ್ವಾಳ ಶಿಕ್ಷಣ ಸಂಪನ್ಮೂಲ ಕೇಂದ್ರದ ಕ್ಷೇತ್ರ ಸಂಪನ್ಮೂಲ ಅಧಿಕಾರಿ ರಾಧಾಕೃಷ್ಣ ಭಟ್, ಬಂಟ್ವಾಳ ಉಪನೋಂದಣಾಧಿಕಾರಿ ಕವಿತ, ಬಂಟ್ವಾಳ ತಾಲೂಕು ಪಂಚಾಯತ್ ನ ವ್ಯವಸ್ಥಾಪಕರಾದ ಶಾಂಭವಿ ಎಸ್ ರಾವ್, ಈ ಸಂದರ್ಭ ಉಪತಹಶೀಲ್ದಾರ್ ರಾಜೇಶ್ ನಾಯ್ಕ್, ಚುನಾವಣಾ ಪ್ರಭಾರ ಉಪತಹಶೀಲ್ದಾರ್ ಸೀತಾರಾಮ. ಪ್ರಥಮ ದರ್ಜೆ ಸಹಾಯಕ ಪ್ರಸನ್ನ ಕುಮಾರ್ ಪಕ್ಕಳ, ಚುನಾವಣಾ ಪ್ರಥಮ ದರ್ಜೆ ಸಹಾಯಕ ರಾಜ್ ಕುಮಾರ್, ಬಂಟ್ವಾಳ ಕಂದಾಯ ನಿರೀಕ್ಷಕ ನವೀನ್ ಬೆಂಜನ ಪದವು ತಾಲೂಕು ಮಟ್ಟದ ಅಧಿಕಾರಿಗಳು, ತಾಲೂಕು ಕಚೇರಿಯ ಸಿಬ್ಬಂದಿಗಳು ಗ್ರಾಮ ಲೆಕ್ಕಾಧಿಕಾರಿಗಳು ಗ್ರಾಮ ಸಹಾಯಕರು, ಹಾಜರಿದ್ದರು. ಪಾಣೆಮಂಗಳೂರು ಹೋಬಳಿ ಕಂದಾಯ ರಾಮ ಕಾಟಿಪಳ್ಳ ಸ್ವಾಗತಿಸಿ ವಂದಿಸಿದರು.
Be the first to comment on "ಮತದಾರರ ಪಟ್ಟಿ ಪರಿಶೀಲನಾ ಕಾರ್ಯಕ್ರಮಕ್ಕೆ ಚಾಲನೆ"