ರಾಜ್ಯಾಧ್ಯಕ್ಷನಾದ ಮೇಲೆ ತಾನು 28 ದಿನಗಳಲ್ಲಿ 26 ಜಿಲ್ಲೆಗಳ ಪ್ರವಾಸ ಕೈಗೊಂಡಿದ್ದು, ಭವಿಷ್ಯದಲ್ಲಿ ಬಿಜೆಪಿ 150ಕ್ಕೂ ಅಧಿಕ ಸ್ಥಾನ ಪಡೆದು ಸ್ವಂತ ಬಲದಿಂದಲೇ ಅಧಿಕಾರಕ್ಕೇರುವುದು ಗುರಿ, ಈ ನಿಟ್ಟಿನಲ್ಲಿ ಕಾರ್ಯಕರ್ತರು ಯೋಜನೆ ಹಾಕಬೇಕಾಗುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ಬಂಟ್ವಾಳ ಕ್ಷೇತ್ರ ಬಿಜೆಪಿ ವತಿಯಿಂದ ಶುಕ್ರವಾರ ಬಿಸಿರೋಡಿನ ಹೋಟೆಲ್ ರಂಗೋಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಜನ್ಮದಿನ ಸೇವಾ ಸಪ್ತಾಹದ ಅಂಗವಾಗಿ ಮಂಗಳೂರಿನ ಎ.ಜೆ. ಆಸ್ಪತ್ರೆ ಸಹಯೋಗದೊಂದಿಗೆ ನಡೆದ ರಕ್ತದಾನ ಶಿಬಿರ ಮತ್ತು ಬಿಜೆಪಿ ರಾಜ್ಯಾಧ್ಯಕ್ಷರಾಗಿ ನೇಮಕಗೊಂಡ ಹಿನ್ನೆಲೆಯಲ್ಲಿ ಸನ್ಮಾನ ಸ್ವೀಕರಿಸಿದ ಬಳಿಕ ಮಾತನಾಡಿದರು.
ಬಂಟ್ವಾಳ ಶಾಸಕ ರಾಜೇಶ್ ಯು. ನಾಯ್ಕ್, ಪುತ್ತೂರು ಶಾಸಕ, ಬಿಜೆಪಿ ಜಿಲ್ಲಾಧ್ಯಕ್ಷ ಸಂಜೀವ ಮಠಂದೂರು ಶುಭ ಹಾರೈಸಿದರು. ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಬಿಜೆಪಿ ಕ್ಷೇತ್ರಾಧ್ಯಕ್ಷ ಬಿ.ದೇವದಾಸ ಶೆಟ್ಟಿ, ನಳಿನ್ ಕಟೀಲ್ ಮಾರ್ಗದರ್ಶನದಲ್ಲಿ ಬಂಟ್ವಾಳ ನಗರ ಸುಂದರೀಕರಣ, ಮೂಲರಪಟ್ಣ ಸೇತುವೆಗೆ ಅನುದಾನ ದೊರಕಿಸಿಕೊಳ್ಳಲು ಪ್ರೇರಣೆಯಾಯಿತು ಎಂದರು.
ಕಾರ್ಯಕ್ರಮದಲ್ಲಿ ಮಾಜಿ ಶಾಸಕರಾದ ಎ.ರುಕ್ಮಯ ಪೂಜಾರಿ, ಕೆ.ಪದ್ಮನಾಭ ಕೊಟ್ಟಾರಿ, ಪಕ್ಷದ ರಾಜ್ಯ ಸಹವಕ್ತಾರೆ ಸುಲೋಚನಾ ಜಿ.ಕೆ.ಭಟ್, ಜಿಲ್ಲಾ ಉಪಾಧ್ಯಕ್ಷ ಜಿ.ಆನಂದ, ಜಿಲ್ಲಾ ವಕ್ತಾರ ಕೆ.ಹರಿಕೃಷ್ಣ ಬಂಟ್ವಾಳ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಕ್ಯಾ.ಬ್ರಿಜೇಶ್ ಚೌಟ, ಕಿಶೋರ್ ರೈ, ಕ್ಷೇತ್ರ ಪ್ರಭಾರಿ ಉದಯಕುಮಾರ್ ಶೆಟ್ಟಿ, ಸಹಪ್ರಭಾರಿ ಗೋಪಾಲಕೃಷ್ಣ ಹೇರಳೆ, ಜಿಪಂ ಸದಸ್ಯರಾದ ತುಂಗಪ್ಪ ಬಂಗೇರ, ಕ್ಷೇತ್ರ ಪ್ರಧಾನ ಕಾರ್ಯದರ್ಶಿಗಳಾದ ರಾಮದಾಸ್ ಬಂಟ್ವಾಳ, ಮೋನಪ್ಪ ದೇವಸ್ಯ, ಎಜೆ ರಕ್ತನಿ ಅಕಾರಿ ಡಾ. ಅರವಿಂದ್ ಹಾಜರಿದ್ದರು. ಕ್ಷೇತ್ರ ಪ್ರಧಾನ ಕಾರ್ಯದರ್ಶಿ ರಾಮದಾಸ್ ಬಂಟ್ವಾಳ ಸ್ವಾಗತಿಸಿದರು. ಕ್ಷೇತ್ರದ ಉಪಾಧ್ಯಕ್ಷ ದೇವಪ್ಪ ಪೂಜಾರಿ ವಂದಿಸಿದರು. ಮತ್ತೋರ್ವ ಪ್ರಧಾನ ಕಾರ್ಯದರ್ಶಿ ಮೋನಪ್ಪ ದೇವಸ್ಯ ಕಾರ್ಯಕ್ರಮ ನಿರೂಪಿಸಿದರು.
Be the first to comment on "150 ಸ್ಥಾನ ಗೆದ್ದು ಸ್ವಂತ ಬಲದಲ್ಲಿ ಸರ್ಕಾರ: ನಳಿನ್ ಕುಮಾರ್ ಕಟೀಲ್"