ರಾಜ್ಯದಲ್ಲಿ ಕೊರೋನಾ ಹಿನ್ನೆಲೆಯಲ್ಲಿ ಗೋಶಾಲೆಗಳಿಗೆ ಯಾವುದೇ ಸಮಸ್ಯೆ ಆಗದಂತೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ
ಅವರು ಇಂದು ಬಂಟ್ವಾಳ ತಾ. ಫಜೀರು ಗೋವನಿತಾಶ್ರಯಕ್ಕೆ ಭೇಟಿ ನೀಡಿ ಪರಿಶೀಲಿಸಿ ಮಾತನಾಡುತ್ತಿದ್ದರು. ಗೋಶಾಲೆಗಳಿಗೆ ಹುಲ್ಲು ಸೇರಿದಂತೆ ಅಗತ್ಯ ಆಹಾರ ಸಾಮಗ್ರಿಗಳ ಕೊರತೆ ಇರುವುದು ಸರಕಾರದ ಗಮನಕ್ಕೆ ಬಂದಿದೆ. ಈ ನಿಟ್ಟಿನಲ್ಲಿ ಚಿಕ್ಕಮಗಳೂರು, ಹಾಸನ ಸೇರಿದಂತೆ ಹೊರ ಜಿಲ್ಲೆಗಳಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಹುಲ್ಲು ತರಿಸಲು ವಾಹನಗಳಿಗೆ ಪಾಸ್ ನೀಡುವುದು ಸೇರಿದಂತೆ ಪಶುಸಂಗೋಪನಾ ಇಲಾಖೆಯಿಂದ ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಸಚಿವರು ತಿಳಿಸಿದರು.
ಗೋಶಾಲೆಗಳಿಗೆ ನೀರು ಸೇರಿದಂತೆ ಅಗತ್ಯ ಸಾಮಗ್ರಿಗಳ ಕೊರತೆಯಾಗದಂತೆ ಸರಕಾರ ಗಮನಹರಿಸಲಿದೆ. ಈ ಬಗ್ಗೆ ಸಂಬಂಧಿಸಿದ ಇಲಾಖೆಗೆ ಅಗತ್ಯ ಸೂಚನೆಗಳನ್ನು ನೀಡಲಾಗುತ್ತಿದೆ ಎಂದು ಸಚಿವರು ಹೇಳಿದರು.
ಈ ಸಂದರ್ಭದಲ್ಲಿ ಗೋಸೇವಾ ಆಯೋಗದ ಮಾಜಿ ಅಧ್ಯಕ್ಷ ಎಂ.ಬಿ. ಪುರಾಣಿಕ್, ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷ ಸತೀಶ್ ಕುಂಪಲ, ಚಂದ್ರಹಾಸ ಪೂಂಜಾ, ರಾಜೇಶ್ ಶೆಟ್ಟಿ, ವಾಮನರಾಜ, ರವಿರಾಜ್, ರಮೇಶ್ ಮತ್ತಿತರರು ಇದ್ದರು.