ಬಂಟ್ವಾಳನ್ಯೂಸ್, www.bantwalnews.com
ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಸೂಚನೆ ಹಿನ್ನೆಲೆಯಲ್ಲಿ, ಪ್ರಕರಣಗಳು ದ್ವಿಗುಣಗೊಳ್ಳುವ ವೇಗ ತಗ್ಗಿಸಿ ಟೆಲಿಮೆಡಿಸನ್ ಮೂಲಕ ಚಿಕಿತ್ಸೆ ನೀಡುವ ಕುರಿತು ತಜ್ಞರು ರಾಜ್ಯ ಸರ್ಕಾರಕ್ಕೆ ಸಲಹೆ ಮಾಡಿದ್ದು, ಈ ನಿಟ್ಟಿನಲ್ಲಿ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ಕೊರೋನಾ ರೋಗ ಲಕ್ಷಣ ಕಡಿಮೆ ಪ್ರಮಾಣದಲ್ಲಿದ್ದರೆ ಮನೆಯಲ್ಲಿಯೇ ಕ್ವಾರೆಂಟೀನ್ ಮಾಡಿ ಚಿಕಿತ್ಸೆ ನೀಡುವ ಕುರಿತಂತೆಯೂ ಗಂಭೀರವಾಗಿ ಪರಿಶೀಲನೆ ಮಾಡಲಾಗುವುದು ಎಂದಿದ್ದಾರೆ. ಕೊರೋನಾ ಸೋಂಕು ನಿಯಂತ್ರಣ ಕುರಿತು ತಜ್ಞರ ಜತೆ ಚರ್ಚಿಸಿದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಯಡಿಯೂರಪ್ಪ, ಸೋಂಕು ನಿಯಂತ್ರಣ ಕ್ರಮಗಳ ಅನುಷ್ಠಾನಕ್ಕೆ ಇನ್ನಷ್ಟು ಪರಿಣಾಮಕಾರಿ ಕ್ರಮ ಕೈಗೊಳ್ಳಲಾಗುವುದು. ರಾತ್ರಿ ಕರ್ಫ್ಯೂ ಉಲ್ಲಂಘಿಸಿದರೆ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದರು.
ಸೋಂಕು ನಿಯಂತ್ರಣಕ್ಕೆ ಮಾರ್ಗಸೂಚಿ ಅಳವಡಿಸುವ ಕುರಿತು ಚರ್ಚೆ ನಡೆಸಲಾಗಿದೆ. ರಾತ್ರಿ ಕರ್ಫ್ಯೂ ಸಂದರ್ಭದಲ್ಲಿ ಬೇಕಾಬಿಟ್ಟಿ ಸಂಚರಿಸಿದರೆ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಲಾಗುವುದು. ಜನರಲ್ಲಿ ಅರಿವು ಮೂಡಿಸಲು 600 ಕ್ಕೂ ಹೆಚ್ವು ಆಟೋಗಳಲ್ಲಿ ಜಾಗೃತಿ ಮೂಡಿಸಲಾಗುವುದು. ಇನ್ನು ಮುಂದೆ ಕರ್ಫ್ಯೂ ಕಠಿಣವಾಗಿ ಜಾರಿಯಾಗಲಿದೆ ಎಂದರು.