ನಿವೇಶನ ರಹಿತರಿಗೆ ಸೂರು ಒದಗಿಸುವುದು ಕೇಂದ್ರದ ವಸತಿ ಯೋಜನೆಯ ಉದ್ದೇಶವಾಗಿದ್ದು, ನಗರ ಹಾಗೂ ಗ್ರಾಮೀಣ ಭಾಗದಲ್ಲಿ ಸರ್ಕಾರಿ ಜಾಗವನ್ನು ಗುರುತಿಸಿ ನಿಗದಿತ ಕಾಲಮಿತಿಯೊಳಗೆ ಸಂಬಂಧಪಟ್ಟ ಅಧಿಕಾರಿಗಳು ಪೂರ್ಣ ಮಾಹಿತಿ ನೀಡಬೇಕು ಎಂದು ದ.ಕ ಜಿಲ್ಲಾಧಿಕಾರಿ ಡಾ. ಕೆ.ವಿ ರಾಜೇಂದ್ರ ಕುಮಾರ್ ಸೂಚಿಸಿದರು.
ಮಂಗಳವಾರ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ಅಧ್ಯಕ್ಷತೆಯಲ್ಲಿ ದ.ಕ. ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು. ಅಧಿಕಾರಿಗಳು ಪ್ರತಿಯೊಂದು ಕೆಲಸದಲ್ಲಿ ವಿಶೇಷ ಕಾಳಜಿ ವಹಿಸಿ ಜನರ ಸಮಸ್ಯೆಗಳಿಗನುಣವಾಗಿ ವಾಸ್ತವಕ್ಕೆ ಪೂರಕವಾಗುವಂತೆ ಕೆಲಸ ಮಾಡಬೇಕು ಎಂದು ಹೇಳಿದರು.
ವಸತಿ ಸಂಕೀರ್ಣ, ಫ್ಲಾಟ್, ಕಟ್ಟಡಗಳು ಹಾಗೂ ಕಾಂಪ್ಲೆಕ್ಸ್‍ಗಳು ಕಡ್ಡಾಯವಾಗಿ ತ್ಯಾಜ್ಯ ವಿಲೇವಾರಿ ಸಂಸ್ಕರಣೆಯ ಘಟಕವನ್ನು ಒಳಗೊಂಡಿರಬೇಕು. ಇಂತಹ ವ್ಯವಸ್ಥೆಯನ್ನು ಒಳಗೊಂಡಿರುವ ಕಟ್ಟಡಗಳಿಗೆ ಮಾತ್ರ ಅವಕಾಶ ನೀಡಲಾಗುವುದು ಎಂದು ರಾಜೇಂದ್ರ ಸೂಚಿಸಿದರು. ಸಮಾಜ ಕಲ್ಯಾಣ ಇಲಾಖೆಯು ಕೇಂದ್ರದ ಸಾಕಷ್ಟು ಯೋಜನೆಗಳ ಬಗ್ಗೆ ಜನರಿಗೆ ಮಾಹಿತಿ ಜೊತೆಗೆ ಸೂಕ್ತ ತರಬೇತಿ ನೀಡಬೇಕು ಎಂದರು.
ಸಭೆಯಲ್ಲಿ ಶಾಸಕರಾದ ವೇದವ್ಯಾಸ ಕಾಮತ್, ಉಮನಾಥ ಕೋಟ್ಯಾನ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಸೆಲ್ವಮಣಿಆರ್, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ಮತ್ತಿತರರು ಉಪಸ್ಥಿತರಿದ್ದರು.