ಜಿಲ್ಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಸಂಬಂಧಿಸಿದ ಮಂಜೂರಾಗಿರುವ ಎಲ್ಲಾ ಯೋಜನೆಗಳ ಕಾಮಗಾರಿಗಳಿಗೆ ವೇಗ ನೀಡಲು ಲೋಕಸಭಾ ಸದಸ್ಯ ನಳಿನ್ ಕುಮಾರ್ ಕಟೀಲು ಸೂಚಿಸಿದ್ದಾರೆ.
ಮಂಗಳವಾರ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ದ.ಕ. ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕಾರ್ಕಳ-ಮೂಡಬಿದ್ರೆ-ಮಂಗಳೂರು ರಸ್ತೆ, ಬಿ.ಸಿ.ರೋಡು- ಪುಂಜಾಲಕಟ್ಟೆ ಹೆದ್ದಾರಿ ಅಭಿವೃದ್ಧಿ ಕಾಮಗಾರಿಗಳನ್ನು ತೀವ್ರಗೊಳಿಸಬೇಕು. ಅದೇ ರೀತಿ ಕೋವಿಡ್‍ನಿಂದಾಗಿ ನಿಂತಿರುವ ಇತರೆ ರಸ್ತೆ ಕಾಮಗಾರಿಗಳನ್ನು ಪೂರ್ಣಗೊಳಿಸಲು ಅಗತ್ಯ ಕ್ರಮ ತಕ್ಷಣವೇ ಕೈಗೆತ್ತಿಕೊಳ್ಳಲು ಸಂಸದರು ತಿಳಿಸಿದರು.
ಉಳ್ಳಾಲ ನೇತ್ರಾವತಿ ಸೇತುವೆ ಜಪ್ಪಿನ ಮೊಗರುವಿನಿಂದ ಕಣ್ಣೂರು ಮಸೀದಿಯವರೆಗೆ ಬೈಪಾಸ್ ನಿರ್ಮಾಣಕ್ಕೆ ಭೂ ಸ್ವಾಧೀನ ಸಮಸ್ಯೆ ಇರುವುದರಿಂದ ಆ ಯೋಜನೆಯನ್ನು ಕೈ ಬಿಡಲು ನಿರ್ಧರಿಸಲಾಗಿದೆ ಎಂದು ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್ ಈ ಯೋಜನೆಯ ಬದಲಿಗೆ ಮಂಗಳೂರು ನಗರದಲ್ಲಿ ಬೇರೆ ರಸ್ತೆ ಅಭಿವೃದ್ಧಿ ಯೋಜನೆ ಕೈಗೆತ್ತಿಕೊಳ್ಳುವ ಬಗ್ಗೆ ಲೋಕೋಪಯೋಗಿ ಸಚಿವರಲ್ಲಿ ಚರ್ಚೆ ನಡೆಸುವುದಾಗಿ ತಿಳಿಸಿದರು.
ಇಂಟರ್ ನೆಟ್ ಸಮಸ್ಯೆಯಿಂದ ಶಾಲಾ ಆನ್ ಲೈನ್ ತರಗತಿಗಳಿಗೆ ತೊಂದರೆಯಾಗುತ್ತಿರುವ ದೂರುಗಳು ಬರುತ್ತಿದ್ದು, ಈ ಟ್ಟಿನಲ್ಲಿ ಗ್ರಾಮ ಪಂಚಾಯತ್‍ಗಳಲ್ಲಿನ ರಾಜೀವ್ ಗಾಂಧಿ ಸೇವಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳನ್ನು ಸೇರಿಸಿ ಅಗತ್ಯ ವ್ಯವಸ್ಥೆ ಕಲ್ಪಿಸಲು ಸಂಸದರು ತಿಳಿಸಿದರು.ಇದಕ್ಕೆ ಪ್ರತಿಕ್ರಿಯಿಸಿದ ಡಿಡಿಪಿಐ ಮಲ್ಲೇಸ್ವಾಮಿ, ಇಂಟರ್ ನೆಟ್ ಸಮಸ್ಯೆ ಇರುವ ವಿದ್ಯಾರ್ಥಿಗಳ ಮನೆಗೆ ಹೋಗಿ ಪಾಠ ಮಾಡಲು ಶಿಕ್ಷಕರಿಗೆ ಸೂಚಿಸಲಾಗಿದೆ ಎಂದರು.ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯ ಪಚ್ಚನಾಡಿಯಲ್ಲಿ ಕಳೆದ ವರ್ಷ ನಡೆದ ತ್ಯಾಜ್ಯ ದುರಂತದ ಕಾರಣಗಳ ಪರಿಶೀಲಿಸಲು ಅಧಿಕಾರಿಗಳ ತಂಡ ರಚಿಸಲು ಸಂಸದರು ಸೂಚಿಸಿದರು.
ಬಳ್ಪ ಗ್ರಾಮ ವರ್ಷಾಂತ್ಯದೊಳಗೆ ಅಭಿವೃದ್ಧಿ ಕಾಮಗಾರಿ ಪೂರ್ಣ: ನಳಿನ್
ಪ್ರಧಾನಮಂತ್ರಿ ಆದರ್ಶ ಗ್ರಾಮ ಯೋಜನೆಯಂತೆ ಬಳ್ಪ ಗ್ರಾಮವು ಮೂಲಭೂತ ಸೌಕರ್ಯಗಳ ಮೂಲಕ ಅಭಿವೃದ್ಧಿಯನ್ನು ಹೊಂದುತ್ತಿದ್ದು ಈ ವರ್ಷಾಂತ್ಯದೊಳಗೆ ಉಳಿದಿರುವ ಕಾಮಗಾರಿಗಳು ಪೂರ್ಣಗೊಳ್ಳಲಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.. ಕೊರೋನಾದ ಸಂದಿಗ್ಧ ಪರಿಸ್ಥಿತಿಯಲ್ಲಿ ಜಿಲ್ಲೆಯ ಎಲ್ಲಾ ಅಧಿಕಾರಿ ಹಾಗೂ ಸಿಬ್ಬಂದಿಗಳು ಉತ್ತಮ ರೀತಿಯಲ್ಲಿ ಕಾರ್ಯ ನಿರ್ವಹಿಸಿದ್ದು ಇದಕ್ಕೆ ಅಭಿನಂದಿಸುವ್ಯದಾಗಿ ನಳಿನ್ ಕುಮಾರ್ ತಿಳಿಸಿದರು. ಸಭೆಯಲ್ಲಿ ಶಾಸಕರಾದ ವೇದವ್ಯಾಸ ಕಾಮತ್, ಉಮನಾಥ ಕೋಟ್ಯಾನ್, ಜಿಲ್ಲಾಧಿಕಾರಿ ಡಾ. ರಾಜೇಂದ್ರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಸೆಲ್ವಮಣಿಆರ್, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ಮತ್ತಿತರರು ಉಪಸ್ಥಿತರಿದ್ದರು.
Be the first to comment on "ರಾಷ್ಟ್ರೀಯ ಹೆದ್ದಾರಿ ಮಂಜೂರಾದ ಯೋಜನೆ ಕಾಮಗಾರಿಗೆ ವೇಗ: ನಳಿನ್ ಕುಮಾರ್ ಕಟೀಲ್ ಸೂಚನೆ"