ಕೋವಿಡ್ ರೋಗಿಗಳ ಬಿಲ್ ಪರಿಶೀಲನೆ: ಕೋರೋನಾ ಸೋಂಕಿತರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಬಿಲ್ಲುಗಳು ಸರಕಾರ ನಿಗದಿಪಡಿಸಿದ ದರದಲ್ಲಿ ಇದೆಯೋ ಎಂದು ಪರಿಶೀಲಿಸಲು ಜಿಲ್ಲಾ ಆರೋಗ್ಯಾಧಿಕಾರಿಗಳ ಕಚೇರಿಯಲ್ಲಿ ಪ್ರತ್ಯೇಕ ಘಟಕ ಸ್ಥಾಪಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ಕೆ.ವಿ.ರಾಜೇಂದ್ರ ಹೇಳಿದ್ಧಾರೆ.
ಸಂಸದ ನಳಿನ್ ಕುಮಾರ್ ಕಟೀಲ್ ನೇತೃತ್ವದ ಮಂಗಳವಾರ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ದ.ಕ. ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಪ್ರತೀ ದಿನ 4000 ಮಂದಿಯ ಕೋವಿಡ್ ಪರೀಕ್ಷೆ ಮಾಡಲು ಅಗತ್ಯ ಸಿದ್ಧತೆ ಮಾಡಲಾಗುತ್ತಿದೆ. ಮಂಗಳೂರು ನಗರಕ್ಕೆ ಬರುವ ಬದಲು ಜಿಲ್ಲೆಯ ಎಲ್ಲಾ ಪಟ್ಟಣ ಪ್ರದೇಶಗಳಲ್ಲಿ ರೋಗ ಲಕ್ಷಣಗಳನ್ನು ಹೊಂದಿರುವವರನ್ನು ಕಂಡುಹಿಡಿದು, ಪರೀಕ್ಷೆ ನಡೆಸಲು ಉದ್ದೇಶಿಸಲಾಗಿದೆ ಎಂದು ಅವರು ತಿಳಿಸಿದರು. ವೆನ್ ಲಾಕ್ ಆಸ್ಪತ್ರೆಯಲ್ಲಿ ವೆಂಟಿಲೇಟರ್ ಲಭ್ಯವಿಲ್ಲದಿದ್ದಲ್ಲಿ ಖಾಸಗೀ ಆಸ್ಪತ್ರೆಗಳಿಗೆ ರೋಗಿಗಳನ್ನು ರೆಫರಲ್ ಮಾಡಿ ಆಯುಷ್ಮಾನ್ ಅಡಿ ಚಿಕಿತ್ಸೆ ನೀಡಲಾಗುವುದು ಎಂದು ತಿಳಿಸಿದರು.