ಜಿಲ್ಲಾ ಸುದ್ದಿ

15 ದಿನದೊಳಗೆ ಮರಳು ಸ್ಥಳಗಳನ್ನು ಗುರುತಿಸಿ: ಸಚಿವ ಕೋಟ ಸೂಚನೆ

ಸಾಂದರ್ಭಿಕ ಚಿತ್ರ: ಅಂತರ್ಜಾಲ ಚಿತ್ರಕೃಪೆ

ಹಳ್ಳ, ತೊರೆಗಳಲ್ಲಿರುವ ಮರಳನ್ನು ತೆಗೆಯುವ ಸಲುವಾಗಿ ಮುಂದಿನ 15 ದಿನಗಳೊಳಗೆ ಮರಳು ಸಿಗುವ ಇಂತಹ ಸ್ಥಳಗಳನ್ನು ಗುರುತಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೂಚಿಸಿದ್ದಾರೆ.

ಅವರು ಸೋಮವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಈ ಸಂಬಂಧ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ತಹಶೀಲ್ದಾರ್ ನೇತೃತ್ವದಲ್ಲಿ ಲೋಕೋಪಯೋಗಿ, ಅರಣ್ಯ, ಗಣಿ ಇಲಾಖೆ ಅಧಿಕಾರಿಗಳು, ಪಿ.ಡಿ.ಓ. ಗಳ ಜಂಟೀ ತಂಡ ಸ್ಥಳ ಪರಿಶೀಲನೆ ಮಾಡಿ ಜಿಲ್ಲಾ ಸಮಿತಿಗೆ ವರದಿ ನೀಡಬೇಕು. ಜಂಟಿ ಸ್ಥಳ ಪರಿಶೀಲನಾ ವರದಿಯನ್ನು ತಾಲೂಕು ಮರಳು ಸಮಿತಿಯ ಶಿಫಾರಸ್ಸಿನೊಂದಿಗೆ ಸಲ್ಲಿಸುವಂತೆ ಸೂಚಿಸಿದ ಸಚಿವರು, ಬಳಿಕ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದರು.

ಮರಳನ್ನು ಸಾಗಿಸಲು ಟ್ರಾಕ್ಟರ್, ಎತ್ತಿನಗಾಡಿಗಳಂತಹ ಲಘು ವಾಹನಗಳನ್ನು ಬಳಸಲು ಮರಳು ನೀತಿಯಲ್ಲಿ ಅವಕಾಶವಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂತಹ ವಾಹನಗಳ ಬಳಕೆ ಕಡಿಮೆ ಇರುವುದರಿಂದ ಇದರ ಬದಲು 407 ಮಿನಿ ಲಾರಿ, ಲಘು ಟಿಪ್ಪರ್‍ಗಳಂತಹ ವಾಹನಗಳಲ್ಲಿ ಮರಳು ಕೊಂಡೊಯ್ಯಲು ಅವಕಾಶ ನೀಡಲು ನಿರ್ಧರಿಸಲಾಗಿದೆ ಎಂದು ಸಚಿವರು ತಿಳಿಸಿದರು.

ಹೊಳೆ, ನದಿಗಳಲ್ಲಿ ಲಭ್ಯವಿರುವ ಮರಳಿನ ಗಣಿಗಾರಿಕೆ ಮಾಡಲು ಕರ್ನಾಟಕ ರಾಜ್ಯ ಮಿನರಲ್ ಕಾರ್ಪೋರೇಶನ್ ಅವರಿಗೆ ಅಧಿಕಾರ ನೀಡಲಾಗುವುದು. ಈಗಾಗಲೇ ಗುರುತಿಸಲಾಗಿರುವ 30 ಬ್ಲಾಕ್‍ಗಳನ್ನು ಅವರಿಗೆ ವಹಿಸಲಾಗುವುದು. ಅದೇ ರೀತಿ ಅಣೆಕಟ್ಟು, ಜಲಾಶಯ, ಡ್ಯಾಂಗಳ ವ್ಯಾಪ್ತಿಯಲ್ಲಿ  ಹಾಗೂ ಹಿನ್ನೀರಿನ ಪ್ರದೇಶಗಳಲ್ಲಿ ಲಭ್ಯವಿರುವ ಮರಳನ್ನು ಗುರುತಿಸಲು ಅಧಿಕಾರಿಗಳ ತಂಡ ಜಂಟೀ ಪರಿಶೀಲನೆ ನಡೆಸಿ ವರದಿ ನೀಡಲು ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.

ಸಾರ್ವಜನಿಕರಿಗೆ ಮರಳನ್ನು ಒಂದು ಟನ್ ಗೆ ರೂ. 700ರಂತೆ ಮಾರಾಟ ದರ ನಿಗದಿಪಡಿಸಲಾಗಿದೆ. ಈ ದರವನ್ನು ಇನ್ನಷ್ಟು ಕಡಿಮೆ ಮಾಡಲು ಚಿಂತಿಸಲಾಗಿದೆ. ಪ್ರಸಕ್ತ ಶ್ರೇಣಿ 1,2,3ರಲ್ಲಿರುವ ಮರಳನ್ನು ಗ್ರಾಮ ಪಂಚಾಯತಿಗಳ ಮೂಲಕ ಸಾರ್ವಜನಿಕರಿಗೆ ಮಾರಾಟ ಮಾಡಲು ಚಿಂತಿಸಲಾಗಿದೆ. ನಗರ ಪ್ರದೇಶಗಳಲ್ಲಿ ಸ್ಥಳೀಯ ನಗರ ಸಂಸ್ಥೆಗಳ ಮುಖ್ಯಾಧಿಕಾರಿಗಳಿಗೆ ಈ ಅನುಮತಿ ನೀಡಲು ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಸಚಿವರು ಸೂಚಿಸಿದರು.
ಸಿಆರ್‍ಝಡ್ ವ್ಯಾಪ್ತಿಯಲ್ಲಿ ಜಿಲ್ಲೆಯಲ್ಲಿ 14 ಮರಳು ಬ್ಲಾಕ್‍ಗಳನ್ನು ಗುರುತಿಸಲಾಗಿದೆ. ಈ ಸಂಬಂಧ ಗಣಿ ಸಚಿವರ ಅಧ್ಯಕ್ಷತೆಯಲ್ಲಿ 3-4 ದಿನಗಳಲ್ಲಿ ಬೆಂಗಳೂರಿನಲ್ಲಿ ಸಭೆ ನಡೆದು, ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಚಿವರು ತಿಳಿಸಿದರು.

ಸಭೆಯಲ್ಲಿ ಶಾಸಕರಾದ ಉಮಾನಾಥ ಕೋಟ್ಯಾನ್, ರಾಜೇಶ್ ನಾಯ್ಕ್, ವೇದವ್ಯಾಸ ಕಾಮತ್, ಡಾ. ಭರತ್ ಶೆಟ್ಟಿ, ಅಪರ ಜಿಲ್ಲಾಧಿಕಾರಿ ರೂಪಾ, ಡಿಸಿಪಿ ಅರುಣಾಂಶು ಗಿರಿ, ಗಣಿ ಇಲಾಖೆ ಉಪನಿರ್ದೇಶಕ ರಾಂಜಿ ನಾಯ್ಕ್ ಮತ್ತಿತರರು ಇದ್ದರು.

Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ