ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘ ತನ್ನ ಸದಸ್ಯರಿಗೆ ನೀಡುವ ಗುರುತುಚೀಟಿಯನ್ನು ಬಂಟ್ವಾಳ ತಾಲೂಕಿನ ಸದಸ್ಯರಿಗೆ ಗುರುವಾರ ಬಿ.ಸಿ.ರೋಡಿನ ಪ್ರೆಸ್ ಕ್ಲಬ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ದ.ಕ.ಜಿಲ್ಲಾ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಮತ್ತು ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ವಿತರಿಸಿದರು. ಈ ಸಂದರ್ಭ ಮಾತನಾಡಿದ ಜಿಲ್ಲಾಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ, ಕಾರ್ಯನಿರತ ಪತ್ರಕರ್ತರಲ್ಲಿ ಗ್ರಾಮೀಣ ಭಾಗದಲ್ಲಿ ದುಡಿಯುವವರು ಕೋವಿಡ್ ಬಳಿಕ ಸಮಸ್ಯೆ ಅನುಭವಿಸುತ್ತಿದ್ದು ಈಗಾಗಲೇ ರಾಜ್ಯಾಧ್ಯಕ್ಷರು ಪರಿಹಾರಧನ ನೀಡುವ ಕುರಿತು ಮುಖ್ಯಮಂತ್ರಿ ಬಳಿ ಮಾತನಾಡಿದ್ದಾರೆ. ಸಂಘದ ಸದಸ್ಯರಲ್ಲನೇಕರು ಆರೋಗ್ಯ ಸಮಸ್ಯೆಯಿಂದ ತೊಂದರೆಗೊಳಗಾಗಿದ್ದು, ಆಸ್ಪತ್ರೆಗಳ ಹೆಲ್ತ್ ಕಾರ್ಡ್ ನೀಡುವ ಕುರಿತು ಕಾರ್ಯಪ್ರವೃತ್ತರಾಗಿರುವುದಾಗಿ ಅವರು ಹೇಳಿದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ಶುಭ ಹಾರೈಸಿದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಬಂಟ್ವಾಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಹರೀಶ ಮಾಂಬಾಡಿ, ಪತ್ರಕರ್ತರ ಸಂಘದ ಕಾರ್ಯಚಟುವಟಿಕೆಗಳ ಕುರಿತು ಮಾಹಿತಿ ನೀಡಿ ಸ್ವಾಗತಿಸಿದರು. ಈ ವೇಳೆ ಬಂಟ್ವಾಳ ಪ್ರೆಸ್ ಕ್ಲಬ್ ಅಧ್ಯಕ್ಷ ಪ್ರಶಾಂತ್ ಪುಂಜಾಲಕಟ್ಟೆ ಉಪಸ್ಥಿತರಿದ್ದರು. ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯದರ್ಶಿ ಮಹಮ್ಮದ್ ಆಲಿ ವಿಟ್ಲ ವಂದಿಸಿದರು. ಕಾರ್ಯಕ್ರಮದಲ್ಲಿ ತಾಲೂಕು ಸಂಘದ ಸದಸ್ಯರಿಗೆ ಗುರುತುಚೀಟಿ, ಕ್ಷೇಮ ಹೆಲ್ತ್ ಕಾರ್ಡ್ ವಿತರಿಸಲಾಯಿತು. ಇದೇ ವೇಳೆ ಬೆಂಗಳೂರಿನಲ್ಲಿ ನಡೆದ ಪತ್ರಕರ್ತರ ಮೇಲಿನ ಹಲ್ಲೆಯನ್ನು ಖಂಡಿಸಲಾಯಿತು.