ಬಂಟ್ವಾಳ

ರಿಕ್ಷಾದಲ್ಲಿದ್ದ ಮೌಲ್ಯಯುತ ದಾಖಲೆಗಳನ್ನು ವಾರೀಸುದಾರರ ಹುಡುಕಿ ಮರಳಿಸಿದ ಆಟೋ ಚಾಲಕ ಸತ್ತಾರ್

ಬಂಟ್ವಾಳ : ಬಿ ಸಿ ರೋಡಿನ ಅಟೋ ರಿಕ್ಷಾ ಚಾಲಕ, ಬಿ ಮೂಡ ಗ್ರಾಮದ ಗೂಡಿನಬಳಿ ನಿವಾಸಿ ಅಬ್ದುಲ್ ಸತ್ತಾರ್ ಅವರು ಮಂಗಳವಾರ (ಅ 6) ತನ್ನ ರಿಕ್ಷಾದಲ್ಲಿ ಪ್ರಯಾಣಿಕರು ಬಿಟ್ಟು ಹೋದ ನಗದು ಹಾಗೂ ಇನ್ನಿತರ ಮೌಲ್ಯಯುತ ದಾಖಲೆಗಳಿದ್ದ ಪರ್ಸನ್ನು ವಾರೀಸುದಾರರನ್ನು ಹುಡುಕಿ ಮರಳಿಸಿದ್ದಾರೆ.

ಸತ್ತಾರ್ ಅವರು ಮಂಗಳವಾರ ಬೆಳಿಗ್ಗೆ ಸುಮಾರು 11 ಗಂಟೆ ವೇಳೆಗೆ ತುಂಬೆಯಿಂದ ಬಿ ಸಿ ರೋಡು ಕಡೆ ತನ್ನ ಅಟೋ ರಿಕ್ಷಾದಲ್ಲಿ ಬರುತ್ತಿದ್ದ ವೇಳೆ ತುಂಬೆ ಜಂಕ್ಷನ್ನಿನಲ್ಲಿ ಇಬ್ಬರು ಅಸ್ಸಾಂ ಮೂಲದ ವ್ಯಕ್ತಿಗಳು ರಿಕ್ಷಾ ಏರಿದ್ದರು. ಇವರು ಬಿ ಸಿ ರೋಡಿನ ಭಗವತಿ ಬ್ಯಾಂಕ್ ಬಳಿ ಅಟೋ ರಿಕ್ಷಾದಿಂದ ಇಳಿದಿದ್ದರು. ಬಳಿಕ ಸತ್ತಾರ್ ಎಂದಿನಂತೆ ಬಿ ಸಿ ರೋಡಿನ ರಿಕ್ಷಾ ಪಾರ್ಕಿನಲ್ಲಿ ನಿಂತಿದ್ದಾಗ ರಿಕ್ಷಾದ ಹಿಂದಿನ ಆಸನದಲ್ಲಿ ಪರ್ಸ್ ಬಿದ್ದಿರುವುದು ಗಮನಕ್ಕೆ ಬಂದಿದೆ. ಪರ್ಸಿನಲ್ಲಿ 10 ಸಾವಿರಕ್ಕೂ ಮಿಕ್ಕಿದ ನಗದು ಹಣ, ಇತರ ಕೆಲ ಮೌಲ್ಯಯುತ ದಾಖಲೆಗಳು, ಆಧಾರ್ ಕಾರ್ಡ್, ಎಟಿಎಂ ಕಾರ್ಡ್, ಪಾನ್ ಕಾರ್ಡ್, ಚಾಲನಾ ಪರವಾನಗಿ ಇತ್ಯಾದಿಗಳಿದ್ದವು. ಆದರೆ ಯಾವುದೇ ದಾಖಲೆಗಳಲ್ಲೂ ಸಂಬಂಧಪಟ್ಟವರ ಮೊಬೈಲ್ ಸಂಖ್ಯೆ ಕಂಡು ಬರಲಿಲ್ಲ. ಈ ಸಂಬಂಧ ರಿಕ್ಷಾದಲ್ಲಿ ಬಂದಿದ್ದ ವ್ಯಕ್ತಿಗಳನ್ನು ಸ್ಥಳೀಯವಾಗಿ ಸತ್ತಾರ್ ಹುಡುಕಾಡಿದರೂ ಎಲ್ಲಿಯೂ ಕಂಡು ಬಾರದ ಹಿನ್ನಲೆಯಲ್ಲಿ ನೇರವಾಗಿ ಬಿ ಸಿ ರೋಡಿನಲ್ಲಿ ಕರ್ತವ್ಯ ನಿರತರಾಗಿದ್ದ ಟ್ರಾಫಿಕ್ ಪೊಲೀಸ್ ಸಿಬ್ಬಂದಿ ಸಹದೇವ್ ಅವರ ಬಳಿ ವಿಷಯ ಪ್ರಸ್ತಾಪಿಸಿದರು. ಇಬ್ಬರು ಜೊತೆಯಾಗಿ ಪರ್ಸ್ ವಾರೀಸುದಾರರಿಗೆ ಹುಡುಕಾಡಿದಾಗ ಇಬ್ಬರು ವ್ಯಕ್ತಿಗಳು ಬಿ.ಸಿ. ರೋಡಿನ ಮಣಪ್ಪುರಂ ಫೈನಾನ್ಸ್‍ನಲ್ಲಿ ಕಂಡು ಬಂದಿದ್ದಾರೆ. ಈ ಸಂದರ್ಭ ರಿಕ್ಷಾದಲ್ಲಿ ದೊರೆತ ಪರ್ಸಿನ ಬಗ್ಗೆ ಗುರುತು ಪರಿಚಯ ವಿಚಾರಿಸಿ ಮನವರಿಕೆಯಾದ ಬಳಿಕ ಪರ್ಸನ್ನು ಪೊಲೀಸ್ ಸಿಬ್ಬಂದಿ ಸಹದೇವ್ ಅವರ ಸಮ್ಮುಖದಲ್ಲಿ ಸತ್ತಾರ್ ಅವರು ವಾರೀಸುದಾರರಾದ ಅಸ್ಸಾಂ ನಿವಾಸಿ ಆರಿಫ್ ಅವರಿಗೆ ಹಸ್ತಾಂತರಿಸಿದರು.

ಸತ್ತಾರ್ ನೇತ್ರಾವತಿ ನದಿಯಲ್ಲಿ ಮುಳುಗುತ್ತಿದ್ದ ಹಲವರನ್ನು ರಕ್ಷಿಸಿ ನೇತ್ರಾವತಿ ವೀರ ಎಂಬ ಬಿರುದನ್ನೂ ಈ ಹಿಂದೆ ಪಡೆದುಕೊಂಡಿದ್ದು, ಹಲವು ಬಾರಿ ತನ್ನ ರಿಕ್ಷಾದಲ್ಲಿ ಬಿಟ್ಟುಹೋದ ಮೌಲ್ಯಯುತ ಸಾಮಾಗ್ರಿಗಳನ್ನು ವಾರೀಸುದಾರರಿಗೆ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದಿದ್ದರು. ಈ ಬಗ್ಗೆ ನಾಡಿನ ಹಲವು ಮಾಧ್ಯಮಗಳು ಸಚಿತ್ರ ವರದಿಗಳನ್ನೂ ಬಿತ್ತರಿಸಿತು. ಹ್ಯುಮಾನಿಟೇರಿಯನ್ ರಿಲೀಫ್ ಸೊಸೈಟಿ (ಎಚ್ ಎರ್ ಎಸ್) ಇದರ ಸಂಚಾಲಕರಾಗಿರುವ ಸತ್ತಾರ್ ಭಾರತೀಯ ಮಜ್ದೂರ್ ಸಂಘ (ಬಿಎಂಎಸ್) ರಿಕ್ಷಾ ಯೂನಿಯನ್ ಸದಸ್ಯರೂ ಆಗಿರುತ್ತಾರೆ.

 

Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Recent Posts