ಬಿ.ಸಿ.ರೋಡಿನಿಂದ ಪಾಣೆಮಂಗಳೂರಿಗೆ ತೆರಳುವ ರಾಷ್ಟ್ರೀಯ ಹೆದ್ದಾರಿ 75ರ ಸನಿಹವೇ ಇರುವ ಸಾಗರ್ ಆಡಿಟೋರಿಯಂನಲ್ಲಿ ಸಂಕಲ್ಪ ಸಮಾವೇಶ ಹೆಸರಿನ ಕಾಂಗ್ರೆಸ್ ಪಕ್ಷದ ಮೈಸೂರು ವಿಭಾಗೀಯ ಸಮಾವೇಶಕ್ಕೆ ಸಿದ್ಧತೆಗಳು ಅದ್ದೂರಿಯಾಗಿ ಬಂಟ್ವಾಳದಲ್ಲಿ ನಡೆದಿದ್ದು, ಸುಮಾರು 600ಕ್ಕೂ ಅಧಿಕ ಪ್ರತಿನಿಧಿಗಳು ಭಾಗವಹಿಸುವುದಕ್ಕೆ ಸಕಲ ವ್ಯವಸ್ಥೆ ಕಲ್ಪಿಸಲಾಗಿದೆ.
ಮಾಜಿ ಸಚಿವ ಬಿ.ರಮಾನಾಥ ರೈ ಅವರ ತವರು ಕ್ಷೇತ್ರ ಬಂಟ್ವಾಳದಲ್ಲಿ ನಡೆಯುತ್ತಿರುವ ಸಂಕಲ್ಪ ಸಮಾವೇಶಕ್ಕೆ ರೈ ನೇತೃತ್ವದಲ್ಲಿ ಪೂರ್ವಭಾವಿ ಸಿದ್ಧತೆಗಳು ನಡೆದಿವೆ. ಜಿಪಂ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ, ಪದ್ಮಶೇಖರ ಜೈನ್, ಎಂ.ಎಸ್. ಮಹಮ್ಮದ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬೇಬಿ ಕುಂದರ್, ಸುದೀಪ್ ಕುಮಾರ್ ಶೆಟ್ಟಿ ಸಹಿತ ಸ್ಥಳೀಯ ಕಾಂಗ್ರೆಸ್ ನಾಯಕರು ಇವರಿಗೆ ಸಾಥ್ ನೀಡಿದ್ದಾರೆ. ಹಾಲ್ ನಲ್ಲಿ ಬೃಹತ್ ಎಲ್ಇಡಿ ಪರದೆಯನ್ನು ಸಜ್ಜುಗೊಳಿಸಲಾಗುತ್ತಿದ್ದು, ಪ್ರತಿನಿಧಿಗಳಿಗೆ ವಿಶಾಲ ಪರದೆಯಲ್ಲಿ ಸಭೆಯ ಕಲಾಪಗಳನ್ನು ವೀಕ್ಷಿಸಲು ವ್ಯವಸ್ಥೆ ಕಲ್ಪಿಸಲಾಗಿದೆ. ಬೆಳಗ್ಗೆ 11 ಗಂಟೆಗೆ ಸಮಾವೇಶವನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಉದ್ಘಾಟಿಸಲಿದ್ದು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್, ರಾಜ್ಯದ ಉನ್ನತ ಸ್ತರದ ಕಾಂಗ್ರೆಸ್ ನಾಯಕರು, ಮಾಜಿ ಸಚಿವರು ಭಾಗವಹಿಸಲಿರುವ ಹಿನ್ನೆಲೆಯಲ್ಲಿ ಮಹತ್ವದ ವಿಚಾರಗಳು ಚರ್ಚೆಗೊಳಪಡುವ ಸಾಧ್ಯತೆ ಇದೆ. ಎಲ್ಲ ವ್ಯವಸ್ಥೆಗಳನ್ನು ಮಾಡಲಾಗಿದ್ದು, ಪ್ರತಿನಿಧಿಗಳಿಗೆ ಯಾವುದೇ ರೀತಿಯ ಸಮಸ್ಯೆ ಉಂಟಾಗದಂತೆ ಅಚ್ಚುಕಟ್ಟಾಗಿ ಕಾರ್ಯಕ್ರಮವನ್ನು ಆಯೋಜಿಸಿದ್ದೇವೆ ಎಂದು ಈ ಸಂದರ್ಭ ಸಮಾವೇಶದ ನೇತೃತ್ವ ವಹಿಸಿಕೊಂಡಿರುವ ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದರು.