ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿಯ ಮಾಜಿ ಅಧ್ಯಕ್ಷ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಬರಂಗರೆ ಸದಾನಂದ ಪೂಂಜ (80) ಮಾ.13ರಂದು ಅಲ್ಪಕಾಲದ ಅಸೌಖ್ಯದ ಬಳಿಕ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. ಅವರು ಪತ್ನಿ, ಇಬ್ಬರು ಪುತ್ರರು ಮತ್ತು ಒಬ್ಬ ಮಗಳನ್ನು ಹೊಂದಿದ್ದರು. ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾಗಿ 2000ರಲ್ಲಿ ಕಾರ್ಯನಿರ್ವಹಿಸಿದ್ದ ಅವರು, ಸುದೀರ್ಘ ಕಾಲ ಸಜಿಪಮೂಡ ಮಂಡಲ ಪಂಚಾಯಿತಿ ಮತ್ತು ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ತಾಲೂಕು ಬೋರ್ಡ್ ಉಪಾಧ್ಯಕ್ಷರಾಗಿ, ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಸದಸ್ಯರಾಗಿ, ಸಜಿಪಮೂಡ ಗ್ರಾಮದ ವಿವಿಧ ದೇವಸ್ಥಾನ, ಶಾಲೆಗಳ ಅಭಿವೃದ್ಧಿಯ ರೂವಾರಿಗಳಾಗಿ, ಸುಭಾಷ್ ನಗರ ಶಾರದೋತ್ಸವ ಸಮಿತಿ, ಸುಭಾಷ್ ಯುವಕ ಮಂಡಲದ ಸ್ಥಾಪಕಾಧ್ಯಕ್ಷರಾಗಿ, ಸಜಿಪಮಾಗಣೆ ಆಡಳಿತದಾರರಾಗಿ ಸ್ಥಳೀಯವಾಗಿ ಗುರುತಿಸಿಕೊಂಡಿದ್ದ ಅವರು, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಸುದೀರ್ಘ ಕಾಲದ ರಾಜಕೀಯ, ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದ ಅವರು, ಬಂಟ್ವಾಳದಲ್ಲಿ ನಡೆದ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಯಶಸ್ವಿಗೆ ಕಾರಣಕರ್ತರಾಗಿದ್ದರು. ಸುಮಾರು 50 ವರ್ಷಗಳಿಗೂ ಅಧಿಕ ಕಾಲ ಸ್ಥಳೀಯವಾಗಿ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಮಾಡುವ ಮೂಲಕ ಗಮನ ಸೆಳೆದಿದ್ದ ಪೂಂಜಾ, ರಾಜ್ಯಮಟ್ಟದಲ್ಲಿ ಪಕ್ಷದ ನಾಯಕರಿಗೆ ಆಪ್ತರಾಗಿದ್ದರು. ಅವರ ನಿಧನಕ್ಕೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.