ಕಲ್ಲಡ್ಕ

ಮಾಣಿ ಗ್ರಾಮ ಪಂಚಾಯಿತಿನಲ್ಲಿ ಕೋವಿಡ್ ಕಾರ್ಯಪಡೆ ರಚನೆ

ಬಂಟ್ವಾಳ ತಾಲೂಕು ಮಾಣಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೋವಿಡ್ ಟಾಸ್ಕ್ ಫೋರ್ಸ್ ಸಮಿತಿಯ ಸಭೆಯು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಪಂಚಾಯತ್ ಅಧ್ಯಕ್ಷರಾದ ಬಾಲಕೃಷ್ಣ ಆಳ್ವ ಕೊಡಾಜೆ ಇವರ ಅಧ್ಯಕ್ಷತೆಯಲ್ಲಿ ಜರಗಿತು.
ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಅವರು ಕೋವಿಡ್ ಎರಡನೇ ಅಲೆಯು ಅತ್ಯಂತ ತೀಕ್ಷ್ಣತೆಯನ್ನು ಹೊಂದಿದ್ದು ನಗರಪ್ರದೇಶಗಳಲ್ಲಿ ಶರವೇಗದಲ್ಲಿ ಹರಡುತ್ತಿದೆ. ಎಲ್ಲರೂ ಜಾಗರೂಕರಾಗಿರಬೇಕು ಎಂದು ಹೇಳಿದರು.
ಕೋವಿಡ್ ಕಾರ್ಯಪಡೆಯ ಸದಸ್ಯರಾಗಿರುವ ನಾವು ನಮ್ಮ ಜವಾಬ್ದಾರಿಯನ್ನು ಅರಿತು ಕಾರ್ಯ ನಿರ್ವಹಿಸಬೇಕು. ಕೋವಿಡ್ ನ ಪರಿಣಾಮದ ಬಗ್ಗೆ ಜನರಲ್ಲಿ ಅರಿವು ಮೂಡಿಸಬೇಕು. ನಮ್ಮ ಗ್ರಾಮದಲ್ಲಿ ಇಲ್ಲಿಯವರೆಗೆ ದೊಡ್ಡ ಪ್ರಮಾಣದಲ್ಲಿ ಕೋವಿಡ್ ಕಾಣಿಸಿಕೊಂಡಿಲ್ಲ, ಮುಂದಿನ ದಿನಗಳಲ್ಲಿಯೂ ಇದು ಮುಂದುವರಿದು ಕೊರೋನ ರಹಿತ ಗ್ರಾಮವಾಗುವಲ್ಲಿ ಶ್ರಮಿಸಬೇಕು ಎಂದು ಹೇಳಿದರು.
ದೂರದ ಊರುಗಳಿಂದ ಹಿಂದಿರುಗಿರುವವರ ಮನವೊಲಿಸಿ ಕಲವು ದಿನ ಅವರು ಮನೆಯಲ್ಲಿಯೇ ಇದ್ದು ಬೇರೆಯವರ ಸಂಪರ್ಕ ಮಾಡದ ಹಾಗೆ ವಿನಂತಿಯನ್ನು ಮಾಡಬೇಕು ಎಂದರು.
ಸಭೆಯಲ್ಲಿ ಉಪಸ್ಥಿತರಿದ್ದ ವೈದ್ಯಾಧಿಕಾರಿ ಡಾ ಶಶಿಕಲಾರವರು ಮಾತನಾಡಿ, ಕೋವಿಡ್ ಲಸಿಕೆಯನ್ನು ಪಡೆಯುವುದರಿಂದ ದೇಹದ ಸಾಮರ್ಥ್ಯ ವನ್ನು ಹೆಚ್ಚಿಸಿಕೊಂಡು ರೋಗದ ಹರಡುವಿಕೆಯನ್ನು ತಡೆಗಟ್ಟಬಹುದು. ಇದರ ಬಗ್ಗೆ ಜನರಿಗೆ ತಿಳಿಸಬೇಕು. ಮತ್ತು ಕೋವಿಡ್ ಲಸಿಕೆಗೆ ಕೆಲವು ದಿನಗಳಿಂದ ಬಹಳಷ್ಟು ಬೇಡಿಕೆ ಉಂಟಾಗಿದೆ. ಪ್ರತಿಯೊಬ್ಬರೂ ಲಸಿಕೆ ಪಡೆದುಕೊಳ್ಳುವ ಹಾಗೆ ಮಾಡಬೇಕು ಎಂದು ಹೇಳಿದರು.
ಶಿಕ್ಷಣ ಇಲಾಖೆಯ ಸಮೂಹ ಸಂಪನ್ಮೂಲ ವ್ಯಕ್ತಿ ಸತೀಶ್ ರಾವ್ ರವರು ಮಾತನಾಡಿ, ಪ್ರತೀ ಗ್ರಾಮಗಳಲ್ಲಿ ಶಿಕ್ಷಕರಿಗೆ ಟಾಸ್ಕ್ ಫೋರ್ಸ್ ಸಮಿತಿಯ ಜವಾಬ್ದಾರಿಯನ್ನು ನೀಡಲಾಗಿದೆ. ಲಾಕ್ ಡೌನ್ ಸಂದರ್ಭದಲ್ಲಿ ಕೆಲಸನಿರ್ವಹಿಸಲು ಅವರಿಗೆ ಪಂಚಾಯತ್ ನಿಂದ ಗುರುತಿನ ಚೀಟಿಯನ್ನು ನೀಡುವಂತೆ ವಿನಂತಿಸಿದರು. ಸಭೆಯಲ್ಲಿ ತಾಲೂಕು ಪಂಚಾಯತ್ ಸದಸ್ಯೆ ಮಂಜುಳಾ ಕುಶಲ ಪೆರಾಜೆ, ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಪ್ರೀತಿ ಡಿನ್ನಾ ಪಿರೇರಾ, ಸದಸ್ಯರುಗಳಾದ ಇಬ್ರಾಹಿಂ.ಕೆ.ಮಾಣಿ, ರಮಣಿ.ಡಿ.ಪೂಜಾರಿ, ಮೆಲ್ವಿನ್ ಕಿಶೋರ್ ಮಾರ್ಟಿಸ್, ನಾರಾಯಣ ಶೆಟ್ಟಿ ತೋಟ, ಸೀತಾ, ಸುಜಾತಾ, ಮಿತ್ರಾಕ್ಷಿ, ಗ್ರಾಮಕರಣಿಕರಾದ ಸುರಕ್ಷಾ, ಆರೋಗ್ಯ ಸಹಾಯಕಿ ಭಾರತಿ, ಅಂಗನವಾಡಿ ಕಾರ್ಯಕರ್ತರು, ಆಶಾ ಕಾರ್ಯಕರ್ತರು, ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದರು.ಪಂಚಾಯತ್ ಅಭಿವೃದ್ಧಿ ಅಧಿಕಾರಿ ನಾರಾಯಣ ಗಟ್ಟಿ ಸ್ವಾಗತಿಸಿದರು.

ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.