ಬಂಟ್ವಾಳ: ಎಂಸಿಎಫ್ ಸಹಭಾಗಿತ್ವದಲ್ಲಿ ಬಂಟ್ವಾಳದ ಸರ್ಕಾರಿ ಆಸ್ಪತ್ರೆಯಲ್ಲಿ ಆಕ್ಸಿಜನ್ ಉತ್ಪಾದನಾ ಘಟಕ ನಿರ್ಮಿಸಲು ವ್ಯವಸ್ಥೆ ಕಲ್ಪಿಸಲಾಗಿದ್ದು, ಶೀಘ್ರದಲ್ಲಿ ಇದು ಕಾರ್ಯರೂಪಕ್ಕೆ ಬರಲಿದೆ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಹೇಳಿದ್ದಾರೆ.
ಬಂಟ್ವಾಳ ಸರ್ಕಾರಿ ಆಸ್ಪತ್ರೆಯಲ್ಲಿ ಶುಕ್ರವಾರ ಬೆಳಗ್ಗೆ ಸ್ಥಳ ಪರಿಶೀಲನೆ ನಡೆಸಿದ ಬಳಿಕ ಈ ಕುರಿತು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಸುದ್ದಿಗಾರರಿಗೆ ತಿಳಿಸಿದರು. ಈಗಾಗಲೇ ಬಂಟ್ವಾಳ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ 25 ಆಕ್ಸಿಜನ್ ಬೆಡ್ ಗಳು ಸಿದ್ಧವಾಗಿವೆ. ಇನ್ನೂ ಹೆಚ್ಚುವರಿಯಾಗಿ 10 ಆಕ್ಸಿಜನ್ ಬೆಡ್ ಗಳು ಸಿದ್ಧವಾಗುತ್ತಿವೆ. ತಾಲೂಕಿನ ವಾಮದಪದವು ಆಸ್ಪತ್ರೆಯ 30 ಬೆಡ್ ಗಳಲ್ಲಿ 12 ಬೆಡ್ ಗಳನ್ನು ಕೊರೋನ ಸೋಂಕಿತರಿಗೆ ಮೀಸಲಿಡಲಾಗಿದೆ. ಅದನ್ನು 20ಕ್ಕೆ ಏರಿಕೆ ಮಾಡಿ ಎಲ್ಲಾ ಬೆಡ್ ಗಳಿಗೆ ಆಕ್ಸಿಜನ್ ಪೂರೈಕೆ ಮಾಡಲಾಗುವುದು ಎಂದು ಅವರು ಮಾಹಿತಿ ನೀಡಿದರು. ಬಳಿಕ ತಾಲೂಕು ಆರೋಗ್ಯಾಧಿಕಾರಿ ಡಾ. ದೀಪಾ ಪ್ರಭು ಮತ್ತು ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ ಡಾ. ಪುಷ್ಪಲತಾ ಅವರೊಂದಿಗೆ ಸ್ಥಳ ಪರಿಶೀಲನೆ ನಡೆಸಿದರು. ಈ ಸಂದರ್ಭ ಬುಡಾ ಅಧ್ಯಕ್ಷ ಬಿ.ದೇವದಾಸ್ ಶೆಟ್ಟಿ, ಬಂಟ್ವಾಳ ಬಿಜೆಪಿ ಅಧ್ಯಕ್ಷ ದೇವಪ್ಪ ಪೂಜಾರಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಮದಾಸ್ ಬಂಟ್ವಾಳ, ಕ್ಷೇತ್ರ ಪ್ರಧಾನ ಕಾರ್ಯದರ್ಶಿ ಡೊಂಬಯ ಅರಳ, ಯುವ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುದರ್ಶನ್ ಬಜ, ಸೀತಾರಾಮ ಪೂಜಾರಿ, ಗಣೇಶ್ ರೈ ಮಾಣಿ, ಮಹೇಶ್ ಶೆಟ್ಟಿ, ಪ್ರದೀಪ್ ಅಜ್ಜಿಬೆಟ್ಟು ಮೊದಲಾದವರಿದ್ದರು.
Be the first to comment on "COVID ಹಿನ್ನೆಲೆ: ಬಂಟ್ವಾಳದಲ್ಲಿ ಆಮ್ಲಜನಕ ಉತ್ಪಾದನಾ ಘಟಕ ಸ್ಥಾಪನೆ: ರಾಜೇಶ್ ನಾಯ್ಕ್"