ಸರ್ಕಾರಿ ಕಚೇರಿ

ಫಸಲ್ ಬಿಮಾ ಯೋಜನೆ: ಭತ್ತದ ಬೆಳೆಗಾರರಿಗೆ ಆಹ್ವಾನ

ಬಂಟ್ವಾಳ: ಪ್ರಸಕ್ತ 2021-22ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭಿಮಾ ಯೋಜನೆಯಡಿ ಭತ್ತದ ಬೆಳೆಗಾರ ರೈತರು ತಮ್ಮ ಹೆಸರನ್ನು ಆಗಸ್ಟ್ 16ರೊಳಗೆ ನೋಂದಾಯಿಸಿಕೊಳ್ಳಬಹುದು ಎಂದು ಬಂಟ್ವಾಳ ಸಹಾಯಕ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಪ್ರಸಕ್ತ ಸಾಲಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ ಈ ಯೋಜನೆಯನ್ನು ಅನುಷ್ಟಾನ ಮಾಡಲು ಯುನಿವರ್ಸಲ್ ಸೋಂಪೋ ಇನ್ಸುರೆನ್ಸ್ ಕಂಪೆನಿಯನ್ನು ನಿಗದಿಪಡಿಸಲಾಗಿರುತ್ತದೆ. ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯಲ್ಲಿ ಕೃಷಿ ಬೆಳೆಗೆ ಸಂಬಂಧಿಸಿದಂತೆ ಭತ್ತವು ನೋಂದಾಯಿತ ಬೆಳೆಯಾಗಿದ್ದು ಭತ್ತ ಬೆಳೆಯುವ ರೈತರು ಈ ಯೋಜನೆಗೆ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದು. ಯೋಜನೆಯಡಿ ಮುಂಗಾರು ಹಂಗಾಮಿನಲ್ಲಿ ಅಧಿಸೂಚಿತ ಘಟಕದಲ್ಲಿ ಯಾವುದೇ ಪ್ರಕೃತಿ ವಿಕೋಪಗಳಿಂದ/ಹವಾಮಾನ ವೈಪರೀತ್ಯದಿಂದಾಗಿ ಶೇ.75ಕ್ಕಿಂತ ಹೆಚ್ಚಿನ ಕ್ಷೇತ್ರದಲ್ಲಿ ಬಿತ್ತನೆ ವಿಫಲಗೊಂಡಲ್ಲಿ ವಿಮಾಮೊತ್ತದ  ಗರಿಷ್ಟ ಶೇ.25ರ ಭಾಗವನ್ನು, ಬಿತ್ತನೆಯಿಂದ ಕಟಾವು ಹಂತದವರೆಗಿನ ಮಧ್ಯದ ಅವಧಿಯಲ್ಲಿ ಶೇ.50ಕ್ಕಿಂತ  ಹೆಚ್ಚು ಬೆಳೆ  ನಷ್ಟ ಸಂಭವಿಸಿದರೆ ಮುಂಚಿತವಾಗಿ ಅಂದಾಜು ಮಾಡಲಾದ ಬೆಳೆವಿಮಾ ನಷ್ಟ ಪರಿಹಾರದಲ್ಲಿ ಶೇ.25ರಷ್ಟು ಹಣವನ್ನು ಪರಿಹಾರವಾಗಿ ನೀಡಲಾಗುವುದು. ಇದಲ್ಲದೆ ಕಟಾವಿನ ನಂತರದ ಸಮಯದಲ್ಲಿ ಬೆಳೆಯನ್ನು ಒಣಗಿಸಲು ಬಿಟ್ಟಂಥ ಸಂದರ್ಭ 2 ವಾರದೊಳಗೆ ಆಕಾಲಿಕ ಮಳೆ/ಚಂಡಮಾರುತ ಸಹಿತ ಮಳೆಯಿಂದಾಗಿ ಕಟಾವು ಮಾಡಲಾದ ಬೆಳೆಯು ನಾಶವಾದರೆ ವಿಮಾ ಸಂಸ್ಥೆಯು ವೈಯುಕ್ತಿಕವಾಗಿ ಬೆಳೆ ನಷ್ಟ ನಿರ್ಧಾರ ಮಾಡಿ ಬೆಳೆ ನಷ್ಟ ಪರಿಹಾರವನ್ನು ಇತ್ಯರ್ಥಪಡಿಸುತ್ತದೆ. ಸ್ಥಳ ನಿರ್ದಿಷ್ಟ ಪ್ರಕೃತಿ ವಿಕೋಪಗಳಾದ ಭೂಕುಸಿತ, ಬೆಳೆ ಮುಳುಗಡೆ, ಆಲಿಕಲ್ಲು ಮಳೆಯಿಂದುಂಟಾಗುವ ನಷ್ಟವನ್ನು ವೈಯುಕ್ತಿಕ ಕ್ಷೇತ್ರವಾರು ನಿರ್ಧರಿಸಿ ರೈತರಿಗೆ ಬೆಳೆವಿಮಾ ನಷ್ಟ ಪರಿಹಾರವನ್ನು ನೀಡಲಾಗುವುದು.

ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭಿಮಾ ಯೋಜನೆಯಡಿ ಭತ್ತದ ಬೆಳೆಗೆ ನೊಂದಾಯಿಸಲು ಆಗಸ್ಟ್ 16 ಕೊನೇ ದಿನಾಂಕವಾಗಿದ್ದು, ಒಂದು ಎಕರೆಗೆ ವಿಮಾ ಕಂತು 440 ರೂಗಳಾಗಿರುತ್ತದೆ. ಒಟ್ಟು ವಿಮಾ ಮೊತ್ತ ಎಕರೆಗೆ 22,000 ರೂ ಆಗಿರುತ್ತದೆ. ಅರ್ಹ ರೈತರು ಹತ್ತಿರದ ಬ್ಯಾಂಕುಗಳಲ್ಲಿ ನಿಗದಿತ ದಿನಾಂಕದೊಳಗೆ ವಿಮಾ ಕಂತಿನ ಮೊತ್ತವನ್ನು ಪಾವತಿಸಬೇಕಾಗಿ ಮತ್ತು ವಿಮೆ ಮಾಡಿಸಿದ ರೈತರು ಬೆಳೆ ನಷ್ಟದ ಬಗ್ಗೆ ಸಂಬಂಧಿಸಿದ ಹಣಕಾಸು ಸಂಸ್ಥೆ ಅಥವಾ ವಿಮಾಸಂಸ್ಥೆ ಕಚೇರಿಗಳಿಗೆ ನಷ್ಟ ಸಂಭವಿಸಿದ 48 ಗಂಟೆಯೊಳಗೆ ವಿಮೆ ಮಾಡಿಸಲಾದ ಬೆಳೆ ವಿವರ, ಹಾನಿಯ ವ್ಯಾಪ್ತಿ ಹಾಗೂ ಹಾನಿಯ ಕಾರಣವನ್ನು ತಿಳಿಸಬೇಕಾಗುತ್ತದೆ ಎಂದು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಬಂಟ್ವಾಳ/ಪಾಣೆಮಂಗಳೂರು/ವಿಟ್ಲಗಳ ರೈತ ಸಂಪರ್ಕ ಕೇಂದ್ರಗಳನ್ನು ಸಂಪರ್ಕಿಸಬಹುದು ಎಂದವರು ಹೇಳಿದ್ದಾರೆ.

ಜಾಹೀರಾತು
ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.