ಕೋವಿಡ್ ಗೆ ಸಂಬಂಧಿಸಿ ಶನಿವಾರ ಸಂಜೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ಅವರು ಪತ್ರಿಕಾ ಪ್ರಕಟಣೆ ನೀಡಿದ್ದು ಅದು ಹೀಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ಹರಡುವಿಕೆಯನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಲು ಸರ್ಕಾರದ ನಿರ್ದೇಶನದಂತೆ ಜಿಲ್ಲಾಡಳಿತವು ಎಲ್ಲಾ ಅವಶ್ಯಕ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಕಟ್ಟುನಿಟ್ಟಿನ ನಿರ್ಬಂಧಗಳ ಪರಿಣಾಮಕಾರಿ ಅನುಷ್ಠಾನದಿಂದಾಗಿ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆಯಾಗಿದ್ದರೂ ಸಕ್ರಿಯ ಕೋವಿಡ್ ಪ್ರಕರಣಗಳು ಹೆಚ್ಚಾಗಿರುವುದರಿಂದ, ಈ ಸಾಂಕ್ರಾಮಿಕ ರೋಗವನ್ನು ಸಂಪೂರ್ಣವಾಗಿ ನಿಯಂತ್ರಿಸಲು ಜಾರಿಯಲ್ಲಿರುವ ಮಾರ್ಗಸೂಚಿಗಳನ್ನು ಮುಂದುವರೆಸಿ ಆದೇಶಿಸಲಾಗಿರುತ್ತದೆ. ಸ್ತುತ ಜಿಲ್ಲೆಯಲ್ಲಿ ಜಾರಿಯಲ್ಲಿರುವ ಕೋವಿಡ್-19 ಮಾರ್ಗಸೂಚಿಗಳನ್ವಯ ದೇವಸ್ಥಾನ, ಚರ್ಚ್ ಹಾಗೂ ಮಸೀದಿಗಳೂ ಒಳಗೊಂಡಂತೆ ಜಿಲ್ಲೆಯ ಎಲ್ಲಾ ಧಾರ್ಮಿಕ ಕೇಂದ್ರಗಳಿಗೆ ಸಾರ್ವಜನಿಕ ಪ್ರವೇಶವನ್ನು ಕಟ್ಟುನಿಟ್ಟಾಗಿ ನಿರ್ಬಂಧಿಸಲಾಗಿರುತ್ತದೆ.
ಜಿಲ್ಲೆಯಲ್ಲಿ ಕೋವಿಡ್-19 ಎರಡನೇ ಅಲೆಯಿಂದಾಗಿ ಸ್ಥಗಿತಗೊಂಡಿರುವ ಚಟುವಟಿಕೆಗಳನ್ನು ಪುನರಾರಂಭಿಸಲು, ಕೋವಿಡ್ ಪಾಸಿಟಿವಿಟಿ ದರವನ್ನುಕಡಿಮೆಗೊಳಿಸುವುದು ಹಾಗೂ ಜಿಲ್ಲೆಯನ್ನು ಕೋವಿಡ್ ಮುಕ್ತವನ್ನಾಗಿಸುವುದು ಅತೀ ಅಗತ್ಯವಾಗಿದ್ದು, ಈ ನಿಟ್ಟಿನಲ್ಲಿ ಸಾರ್ವಜನಿಕರು, ಸರ್ಕಾರದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಿಕೊಂಡು, ಜಿಲ್ಲಾಡಳಿತದೊಂದಿಗೆ ಸಹಕರಿಸುವಂತೆ ಜಿಲ್ಲಾಧಿಕಾರಿಯವರ ಪ್ರಕಟಣೆಯಲ್ಲಿ ತಿಳಿಸಲಾಗಿದೆ.