ಬಂಟ್ವಾಳ

ವೈಜ್ಞಾನಿಕ ತ್ಯಾಜ್ಯ ವಿಲೇವಾರಿ ಅರಿವು ಪಂಚಾಯಿತಿ ಸದಸ್ಯರಿಗೆ ಅತ್ಯಗತ್ಯ – ಹಕ್ಕು ಪ್ರತಿಪಾದನೆ ಸಂದರ್ಭ ಜವಾಬ್ದಾರಿ ಅರಿವೂ ಇರಲಿ

  • ಕಾವಳಪಡೂರಿನಲ್ಲಿ ಜಿಲ್ಲಾ ಪಂಚಾಯಿತಿ ಸಿಇಒ ಡಾ. ಕುಮಾರ್

ಬಂಟ್ವಾಳ: ಕಾವಳಮೂಡೂರು ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ, ಸ್ವಚ್ಛ ಭಾರತ ಮಿಷನ್ (ಗ್ರಾಮೀಣ), ಕಾವಳಮೂಡೂರು ಗ್ರಾಂ ಪಂಚಾಯಿತಿ, ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಬಂಟ್ವಾಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಸ್ವಚ್ಛ ಭಾರತ ಅಭಿಯಾನದ ಅಂಗವಾಗಿ ಪ್ಲಾಸ್ಟಿಕ್ ಬಳಕೆ ವಿರುದ್ಧ ಜಾಗೃತಿ ಅಭಿಯಾನ ಕಾರ್ಯಕ್ರಮ ನಡೆಯಿತು.

ಜಾಗೃತಿ ಜಾಥಾದ ಬಳಿಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್, ಪ್ಲಾಸ್ಟಿಕ್ ವೈಜ್ಞಾನಿಕ ಮರುಬಳಕೆ ನಿಟ್ಟಿನಲ್ಲಿ ಗ್ರಾಪಂಗಳ ಜನಪ್ರತಿನಿಧಿಗಳು ಹೆಚ್ಚಿನ ಮುತುವರ್ಜಿ ವಹಿಸಬೇಕಿದ್ದು, ಈ ಕುರಿತು ಅನಗತ್ಯ ಪ್ರತಿರೋಧ ಸಲ್ಲದು. ತ್ಯಾಜ್ಯ ವಿಲೇವಾರಿ ಎಲ್ಲಿ ಮಾಡುವುದು ಎಂಬುದೇ ಸಮಸ್ಯೆ ಆಗುತ್ತಿದ್ದು, ಜನರು ತಮ್ಮ ಹಕ್ಕುಗಳನ್ನು ಕೇಳುವ ಸಂದರ್ಭ ಕರ್ತವ್ಯವನ್ನು ಮರೆಯಬಾರದು. ಮೂಲದಲ್ಲೇ ಹಸಿ, ಒಣ ಕಸವನ್ನು ವಿಂಗಡಿಸಿ ನೀಡಿದರೆ, ಪ್ಲಾಸ್ಟಿಕ್ ನಂಥ ಮರುಬಳಕೆಯುಕ್ತ ತ್ಯಾಜ್ಯವನ್ನು ವಿಲೇವಾರಿ ಮಾಡಲು ಸುಲಭ. ಇಂಥ ಸಂದರ್ಭ ವೈಜ್ಞಾನಿಕವಾಗಿ ಸಂಸ್ಕರಣೆಯನ್ನು ಮಾಡಲಾಗುತ್ತಿದ್ದು, ಈ ಕುರಿತು ಜನರು ತಪ್ಪುಕಲ್ಪನೆ ಹೊಂದಿದ್ದರೆ, ಜನಪ್ರತಿನಿಧಿಗಳು ಅವುಗಳ ನಿವಾರಣೆಗೆ ಪ್ರಯತ್ನಿಸಬೇಕು, ಇಂಥ ಸನ್ನಿವೇಶದಲ್ಲಿ ಕಾರ್ಯನಿರತ ಪತ್ರಕರ್ತರ ಸಂಘ ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಿರುವುದು ಶ್ಲಾಘನಾರ್ಹ ಎಂದರು.

ಸಾಮಾಜಿಕ ಹೊಣೆಗಾರಿಕೆಯ ನಿಟ್ಟಿನಲ್ಲಿ ಪತ್ರಕರ್ತರ ಸಂಘ ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ಹಲವಾರು ಕಾರ್ಯಕ್ರಮಗಳನ್ನು ಸಂಘಟಿಸಿ ಗ್ರಾಮೀಣ ಜನತೆಯ ಮನ ಗೆಲ್ಲುವಲ್ಲಿ ಯಶಸ್ವಿಯಾಗಿದೆ. ಕೇವಲ ಕಾಟಾಚಾರದ ಕಾರ್ಯಕ್ರಮವನ್ನು ಮಾಡದೇ ಜನರ ನೋವನ್ನು ಅರಿತು ಅದಕ್ಕೆ ಪೂರಕ ಕಾರ್ಯಕ್ರಮ ಸಂಘಟಿಸಿರುವುದು ಶ್ಲಾಘನೀಯ ಎಂದು ಡಾ.ಕುಮಾರ್ ಮೆಚ್ಚುಗೆ ವ್ಯಕ್ತಪಡಿಸಿದರು.

ಜಾಹೀರಾತು

ಗ್ರಾಮ ಪಂಚಾಯಿತಿ ಅಧ್ಯಕ್ಷೆ ಜಯಲಕ್ಷ್ಮಿ ಅಧ್ಯಕ್ಷತೆ ವಹಿಸಿದ್ದರು. ಬಂಟ್ವಾಳ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ರಾಜಣ್ಣ, ತಾಪಂ ಸಹಾಯಕ ನಿರ್ದೇಶಕ ದಿನೇಶ್, ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಅಜಿತ್, ಜಿಲ್ಲಾ ವಾರ್ತಾಧಿಕಾರಿ ರವಿರಾಜ್ ಎಚ್.ಜಿ, ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪ್ರಶಾಂತ್ ಪುಂಜಾಲಕಟ್ಟೆ, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಪ್ಲಾಸ್ಟಿಕ್ ಸಂಗ್ರಹಿಸಿದವರಿಗೆ ಅಕ್ಕಿ ಬಹುಮಾನ ನೀಡುವುದಾಗಿ ಘೋಷಿಸಲಾಗಿತ್ತು. ಅದರಂತೆ ಒಟ್ಟು 43 ಗ್ರಾಮಸ್ಥರು 26 ಕೆ.ಜಿ. ಪ್ಲಾಸ್ಟಿಕ್ ಸಂಗ್ರಹಿಸಿ ಕಾರ್ಯಕ್ರಮದ ಸಂದರ್ಭ ನೀಡಿದರು. ಅಂಗನವಾಡಿ, ಆಶಾ ಕಾರ್ಯಕರ್ತೆಯರ ಸಹಿತ ಪಂಚಾಯಿತಿ ಸದಸ್ಯರೂ ಈ ಅಭಿಯಾನದಲ್ಲಿ ಉತ್ಸಾಹದಿಂದ ಪಾಲ್ಗೊಂಡರು. ಅವರಿಗೆ ಬಂಟ್ವಾಳ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪ್ರಶಾಂತ್ ಪುಂಜಾಲಕಟ್ಟೆ ನೇತೃತ್ವದಲ್ಲಿ 260 ಕೆಜಿ ಅಕ್ಕಿ ವಿತರಿಸಲಾಯಿತು. ಇದೊಂದು ಉತ್ತಮ ಕಾರ್ಯ ಎಂದು ಈ ಸಂದರ್ಭ ಜಿಲ್ಲಾ ಪಂಚಾಯಿತಿ ಸಿಇಒ ಕುಮಾರ್ ಶ್ಲಾಘಿಸಿ, ಪ್ಲಾಸ್ಟಿಕ್ ಸಂಗ್ರಹಿಸುವ ಕುರಿತು ಯೋಚನೆಯನ್ನು ಮಾಡುವಂತೆ ಈ ಕಾರ್ಯಕ್ರಮ ಪ್ರೇರೇಪಿಸುತ್ತಿದ್ದು, ಕೇವಲ ಘೋಷಣೆ, ಬರವಣಿಗೆ, ಭಾಷಣವಷ್ಟೇ ಅಲ್ಲ, ಅನುಷ್ಠಾನವನ್ನೂ ಮಾಡಲು ಸಾಧ್ಯ ಎಂಬುದನ್ನು ಇದು ನಿರೂಪಿಸುತ್ತದೆ, ಇದು ಎಲ್ಲರಿಗೂ ಮಾದರಿಯಾಗಲಿ ಎಂದು ಕುಮಾರ್ ಹೇಳಿದರು. ಗ್ರಾಮೀಣ ಜನತೆಯಲ್ಲಿ ಪ್ಲಾಸ್ಟಿಕ್ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಪ್ಲಾಸ್ಟಿಕ್ ತಂಡದವರಿಗೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪ್ರಶಾಂತ್ ಪುಂಜಾಲಕಟ್ಟೆ ನೇತೃತ್ವದಲ್ಲಿ ಅಕ್ಕಿ ವಿತರಿಸುವ ಮೂಲಕ ಅವರನ್ನು ಪ್ರೋತ್ಸಾಹಿಸಲಾಯಿತು. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಗ್ರಾ.ಪಂ.ಅಭಿವೃದ್ಧಿ ಅಧಿಕಾರಿ ರಚನ್ ಕುಮಾರ್ ಸ್ವಾಗತಿಸಿದರು. ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ಸಂದೀಪ್ ಸಾಲ್ಯಾನ್ ವಂದಿಸಿದರು. ಪ್ರಧಾನ ಕಾರ್ಯದರ್ಶಿ ಮೌನೇಶ್ ವಿಶ್ವಕರ್ಮ ಕಾರ್ಯಕ್ರಮ ನಿರ್ವಹಿಸಿದರು. ಕಾರ್ಯಕ್ರಮಕ್ಕೆ ಪೂರ್ವಭಾವಿಯಾಗಿ ಗ್ರಾ.ಪಂ.ವ್ಯಾಪ್ತಿಯ ಎನ್.ಸಿ.ರೋಡ್ ಜಂಕ್ಷನ್ ನಿಂದ ಗ್ರಾ.ಪಂ.ಕಚೇರಿ ವಠಾರದವರೆಗೆ ಸ್ವಚ್ಛತಾ ಜಾಗೃತಿ ಜಾಥಾ ನಡೆಸಲಾಯಿತು. ಬಳಿಕ ಪತ್ರಕರ್ತರ ಸೇರುವಿಕೆಯಲ್ಲಿ ಜಾಗೃತಿ ಹಾಡು ಹಾಗೂ ರೂಪಕ ಪ್ರದರ್ಶಿಸಲಾಯಿತು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts