ಜಿಲ್ಲಾ ಸುದ್ದಿ

ಕೋವಿಡ್ ನಿರ್ಬಂಧ ಗಡಿಯಲ್ಲಿ ಸಡಿಲಿಕೆ – ಶೀಘ್ರ ತಜ್ಞರ ಸಮಿತಿ ಸಭೆ: ಮಂಗಳೂರಲ್ಲಿ ಸಿಎಂ ಬೊಮ್ಮಾಯಿ

EDITED AND OWNED BY – HARISH MAMBADY. For Advertisements, News Contact Watsapp No: 9448548127

ರಾಜ್ಯದ ಗಡಿ ಭಾಗಗಳಲ್ಲಿ ಕೋವಿಡ್ ನಿರ್ಬಂಧಗಳನ್ನು ಸಡಿಲಗೊಳಿಸುವ ನಿಟ್ಟಿನಲ್ಲಿ ದಸರಾ ಮುಗಿದ ಕೂಡಲೇ ಕೋವಿಡ್ ತಜ್ಞರ ಸಮಿತಿಯ ಸಭೆ ನಡೆಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ರಾಜ್ಯದ ಮುಖ್ಯಮಂತ್ರಿಗಳಾದ ಬಸವರಾಜ  ಬೊಮ್ಮಾಯಿ ಅವರು ತಿಳಿಸಿದರು.

ಅವರು  ಅ.13ರ ಬುಧವಾರ ಮಂಗಳೂರಿನ ಬಜ್ಪೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಕರ್ನಾಟಕಕ್ಕೆ ಹೊಂದಿಕೊಂಡಿರುವ ಕೇರಳ ಮತ್ತು ಮಹಾರಾಷ್ಟ್ರ ದಲ್ಲಿ ಇರುವ ಕೋವಿಡ್ ಪರಿಸ್ಥಿತಿ ಬಗ್ಗೆ ತಜ್ಞರು ಮೌಲ್ಯಮಾಪನ ಮಾಡುತ್ತಿದ್ದಾರೆ. ದಸರಾ ಹಬ್ಬದ ಬಳಿಕ ಕೋವಿಡ್ ತಜ್ಞರ ಸಭೆ ಕರೆಯಲಾಗುವುದು. ಗಡಿ ಜಿಲ್ಲೆಗಳಲ್ಲಿ ಈಗಿರುವ ನಿರ್ಬಂಧಗಳನ್ನು ಸಡಿಲ‌ಮಾಡುವ ಕುರಿತು ಚರ್ಚೆ ನಡೆಸಿ ತೀರ್ಮಾನ ತೆಗೆದುಕೊಳ್ಳಲಾಗುವುದು. ಪ್ರಾಥಮಿಕ ಶಾಲೆಗಳನ್ನು ಪ್ರಾರಂಭಿಸುವ ಸಂಬಂಧವೂ ತಜ್ಞರ ಸಮಿತಿ ಸಭೆಯಲ್ಲಿ ತೀರ್ಮಾನಿಸಲಾಗುವುದು. ೨ ವರ್ಷದಿಂದ ೧೮ ವರ್ಷಗಳ ವಯೋಮಾನದವರಿಗೆ ಕೋವಿಡ್ ಲಸಿಕೆ ಹಾಕುವ ಕುರಿತು ಪ್ರಯೋಗ ಕೊನೆ ಹಂತದಲ್ಲಿದೆ. ಅದಕ್ಕೆ ಎಲ್ಲಾ ರೀತಿಯ ಒಪ್ಪಿಗೆ ದೊರೆತ ತಕ್ಷಣ  ಮಕ್ಕಳು ಮತ್ತು ಯುವ ವಯಸ್ಕರಿಗೆ  ಲಸಿಕೆ ಹಾಕಲಾಗುವುದು. ಒಟ್ಟಾರೆ ಲಸಿಕೆ ಹಾಕುವುದರಲ್ಲಿ ಕರ್ನಾಟಕ ಮುಂದಿದೆ ಎಂದು ತಿಳಿಸಿದರು. 

ಜಾಹೀರಾತು

ಕೋವಿಡ್ ಸಂದರ್ಭದಲ್ಲಿ ಸಾರ್ವಜನಿಕರ ಮೇಲೆ ಪ್ರಕರಣಗಳನ್ನು ದಾಖಲಿಸಿ, ಚಾರ್ಜ್ ಶೀಟ್ ಹಾಕಲಾಗಿರುವ ಬಗ್ಗೆ ಸುದ್ದಿಗಾರರು ಮುಖ್ಯಮಂತ್ರಿಗಳ ಗಮನಕ್ಕೆ ತಂದಾಗ , ಪೊಲೀಸ್ ಅಧಿಕಾರಿಗಳೊಂದಿಗೆ ಈ ಬಗ್ಗೆ ಚರ್ಚಿಸಿ ಪ್ರಕರಣಗಳನ್ನು  ಹಿಂತೆಗೆದುಕೊಳ್ಳುವ ಬಗ್ಗೆ  ನಿರ್ಧರಿಸಲಾಗುವುದು ಎಂದರು.

 ಸಮಾಜದಲ್ಲಿ ಜನರ ಭಾವನೆಗಳಿಗೆ ಧಕ್ಕೆ ಬರದಂತೆ ನಡೆದುಕೊಳ್ಳಬೇಕಾಗುತ್ತದೆ. ಪರಸ್ಪರರ ಭಾವನೆಗಳಿಗೆ ಧಕ್ಕೆ ಉಂಟಾದಾಗ ಸಹಜವಾಗಿ ಕ್ರಿಯೆ-  ಪ್ರತಿಕ್ರಿಯೆಗಳು ಇದ್ದೇ ಇರುತ್ತವೆ.   ಸಾಮಾಜಿಕವಾಗಿ ಸಾಮರಸ್ಯವನ್ನು ಕಾಪಾಡಲು ನಾವೆಲ್ಲರೂ ಪ್ರಯತ್ನ ಪಡಬೇಕು. ನೈತಿಕತೆ ಇಲ್ಲದೆ ನಾವು ಬದುಕಲು ಸಾಧ್ಯವಿಲ್ಲ. ಈ ವಿಷಯದಲ್ಲಿ ಪ್ರತಿಯೊಬ್ಬರದ್ದು ಹೊಣೆಗಾರಿಕೆ ಇದೆ ಎಂದು ಸಿಎಂ ನೈತಿಕ ಪೊಲೀಸ್ ಗಿರಿ ಬಗ್ಗೆ ಪ್ರತಿಕ್ರಿಯಿಸಿದರು.

ಕನ್ನಡ ಮತ್ತು ಸಂಸ್ಕೃತಿ ಹಾಗೂ ಅರಣ್ಯ ಇಲಾಖೆ ಸಚಿವರಾದ ಸುನೀಲ್ ಕುಮಾರ್, ಶಾಸಕರಾದ ಡಾ. ಭರತ್ ಶೆಟ್ಟಿ, ಉಮನಾಥ್ ಕೋಟ್ಯಾನ್, ಮೇಯರ್ ಪ್ರೇಮಾನಂದ ಶೆಟ್ಟಿ, ಕರಾವಳಿ ಪ್ರಾಧಿಕಾರ ಅಧ್ಯಕ್ಷರಾದ ಮಟ್ಟಾರು ರತ್ನಾಕರ ಹೆಗ್ಡೆ, ಜಿಲ್ಲಾಧಿಕಾರಿ ಡಾ‌ ರಾಜೇಂದ್ರ ಕೆ.ವಿ., ಪೊಲೀಸ್ ಆಯುಕ್ತ ಶಶಿಕುಮಾರ್, ಗಣ್ಯರು, ಅಧಿಕಾರಿಗಳು ಇದ್ದರು.

ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.