ಜಮೀನು ಒತ್ತುವರಿ ಇದ್ದರೆ ದೂರು ನೀಡಿ – ತಹಸೀಲ್ದಾರ್ ಪ್ರಕಟಣೆ
www.bantwalnews.com Report ಬಂಟ್ವಾಳನ್ಯೂಸ್ ವರದಿ ಸಂಪಾದಕ: ಹರೀಶ ಮಾಂಬಾಡಿ, ಜಾಹೀರಾತುಗಳಿಗೆ ಸಂಪರ್ಕಿಸಿ: 9448548127
ಬಂಟ್ವಾಳ: ಎಲ್ಲ್ ಗ್ರಾಮ ಮತ್ತು ನಗರ ಪ್ರದೇಶಗಳಲ್ಲಿ ಸ್ಮಶಾನ ಭೂಮಿ ಕಲ್ಪಿಸಲು ಇರುವ ನಿಯಮಗಳನ್ನು ರಾಜ್ಯ ಸರ್ಕಾರ ಪ್ರಕಟಿಸಿದ್ದು, ಬಂಟ್ವಾಳ ತಹಸೀಲ್ದಾರ್ ರಶ್ಮಿ ಎಸ್.ಆರ್ ಈ ಕುರಿತು ಸಾರ್ವಜನಿಕ ಪ್ರಕಟಣೆಯನ್ನು ಹೊರಡಿಸಿ, ನಿಯಮಗಳ ವಿವರ ನೀಡಿದ್ದಾರೆ. ಇದಲ್ಲದೆ, ಸರ್ಕಾರಿ ಜಮೀನು ಒತ್ತುವರಿ ಆಗಿರುವ ವಿಚಾರವಿದ್ದರೆ, ಸಾರ್ವಜನಿಕರು ತಹಸೀಲ್ದಾರ್ ಅಥವಾ ಜಿಲ್ಲಾಧಿಕಾರಿ ಗಮನಕ್ಕೆ ಕೂಡಲೇ ತರಬೇಕು ಎಂದು ಮನವಿ ಮಾಡಿದ್ದಾರೆ.
ಎರಡೂ ವಿಚಾರಗಳ ಕುರಿತು ಅವರು ನೀಡಿರುವ ಪ್ರಕಟಣೆ ಹೀಗಿದೆ.
ರಾಜ್ಯದಲ್ಲಿನ ಗ್ರಾಮ ಮತ್ತು ನಗರ ಪ್ರದೇಶಗಳಲ್ಲಿ ಸ್ಮಶಾನ ಭೂಮಿ ಕಲ್ಪಿಸುವುದು ಸರ್ಕಾರದ ಮೂಲ ಉದ್ದೇಶವಾಗಿದ್ದು ಸ್ಮಶಾನ ಕಲ್ಪಿಸಲು ಈ ಕೆಳಕಂಡಂತೆ ನಿಯಮಗಳು ಇರುವುದನ್ನು ಸಾರ್ವಜನಿಕರಿಗೆ ತಿಳಿಸಲಾಗಿದೆ.
1.ಸರ್ಕಾರದ ಜಮೀನು ಲಭ್ಯವಿರುವ ಕಡೆ ಸ್ಮಶಾನ ಉದ್ದೇಶಕ್ಕಾಗಿ 2.00 ಎಕರೆ ವಿಸ್ತೀರ್ಣದ ಜಮೀನನ್ನು ಕಾಯ್ದಿರಿಸುವ ಅಧಿಕಾರವನ್ನು ಜಿಲ್ಲಾಧಿಕಾರಿಗಳಿಗೆ ಪ್ರತ್ಯಾಯೋಜಿಸಲಾಗಿರುತ್ತದೆ.
2.ಕರ್ನಾಟಕ ಭೂ ಕಂದಾಯ ಕಾಯ್ದೆ 1964 ರ ಕಲಂ 71 ರಡಿ ಪ್ರದತ್ತವಾದ ಅಧಿಕಾರದನ್ವಯ ಜಿಲ್ಲಾಧಿಕಾರಿಗಳು ರಾಜ್ಯದಲ್ಲಿ ಸರ್ಕಾರಿ ಜಮೀನು ಕಾಯ್ದಿರಿಸಲು ಅವಕಾಶ ಕಲ್ಪಿಸಲಾಗಿದೆ.
3.ಗೋಮಾಳ ಜಮೀನು ನಿಗದಿತ ಪ್ರಮಾಣಕ್ಕಿಂತ ಕಡಿಮೆ ಇದ್ದಾಗ್ಯೂ ಸ್ಮಶಾನಕ್ಕಾಗಿ ಮೀಸಲಿಡಲು ಕರ್ನಾಟಕ ಭೂ ಕಂದಾಯ ನಿಯಮಗಳು, 1966 ರ ನಿಯಮ 97(4) (iii) ರಲ್ಲಿ ಜಿಲ್ಲಾಧಿಕಾರಿಯವರಿಗೆ ಅವಕಾಶ ಕಲ್ಪಿಸಲಾಗಿದೆ.
4.ಸರ್ಕಾರಿ ಜಮೀನು ʼಬʼ ಖರಾಬು ಎಂದು ವರ್ಗೀಕೃತವಾಗಿದ್ದಲ್ಲಿ, ಸ್ಮಶಾನದ ಉದ್ದೇಶವು ಸಾರ್ವಜನಿಕ ಉದ್ದೇಶವಾಗಿರುವುದರಿಂದ ಅಂತಹ ಜಮೀನುಗಳನ್ನು ಸಹ ಜಿಲ್ಲಾಧಿಕಾರಿಗಳ ಹಂತದಲ್ಲಿಯೇ ಕರ್ನಾಟಕ ಭೂ ಕಂದಾಯ ಕಾಯ್ದೆ, 1964 ರ ಕಲಂ 71 ರನ್ವಯ ಕಾಯ್ದಿರಿಸಲು ಅವಕಾಶ ಕಲ್ಪಿಸಲಾಗಿದೆ.
5.ಒತ್ತುವರಿಯಿಂದ ತೆರವುಗೊಳಿಸಿರುವ ಸರ್ಕಾರಿ ಜಮೀನುಗಳನ್ನು ಕರ್ನಾಟಕ ಭೂ ಕಂದಾಯ ಕಾಯ್ದೆ, 1964 ರ ಕಲಂ 71 ರನ್ವಯ ಜಿಲ್ಲಾಧಿಕಾರಿಗಳು ಸ್ಮಶಾನದ ಉದ್ದೇಶಕ್ಕಾಗಿ ಕಾಯ್ದಿರಿಸಲು ಅವಕಾಶ ಕಲ್ಪಿಸಲಾಗಿದೆ.
6.ಸರ್ಕಾರಿ ಜಮೀನಿನಲ್ಲಿ ಅನಧಿಕೃತವಾಗಿ ಮಾಡುತ್ತಿರುವ ಸಾಗುವಳಿಯನ್ನು ಸಕ್ರಮೀಕರಣಕ್ಕಾಗಿ ಸಲ್ಲಿಸುವ ಅರ್ಜಿಗಳ ಪೈಕಿ ಅನರ್ಹ ಅರ್ಜಿಗಳು ಇದ್ದಲ್ಲಿ ಜಿಲ್ಲಾಧಿಕಾರಿಗಳ ಹಂತದಲ್ಲಿ ಅಂತಹ ಅನರ್ಹ ಅರ್ಜಿಗಳನ್ನು ವಜಾಗೊಳಿಸಿ ಜಮೀನನ್ನು ಸರ್ಕಾರದ ವಶಕ್ಕೆ ಪಡೆದು ಸ್ಮಶಾನಕ್ಕಾಗಿ ಕಾಯ್ದಿರಿಸುವುದು.
7.ಈ ಮೆಲ್ಕಂಡ ಎಲ್ಲಾ ಕ್ರಮಗಳನ್ನು ಕೈಗೊಂಡ ನಂತರವೂ ಸಹ ಯಾವುದೇ ಗ್ರಾಮದಲ್ಲಿ ಸ್ಮಶಾನಕ್ಕಾಗಿ ಕಾಯ್ದಿರಿಸಲು ಸರ್ಕಾರಿ ಜಮೀನು ಲಭ್ಯವಿಲ್ಲದಿದ್ದಲಲಿ, ಅಂತಹ ಗ್ರಾಮಗಳಲ್ಲಿ ಮಾರ್ಗಸೂಚಿ ಮೌಲ್ಯದ ಮೂರು ಪಟ್ಟು ದರದಲ್ಲಿ ಖಾಸಗಿಯವರಿಂದ ಜಮೀನುಗಳನ್ನು ಖರೀದಿಸಲು ಅವಕಾಶ ಕಲ್ಪಿಸಲಾಗಿದೆ.
8.ಸಾರ್ವಜನಿಕರಿಗೆ ಈ ಮೂಲಕ ತಿಳಿಯಪಡಿಸುವುದೇನೆಂದರೆ ತಮ್ಮ ಗ್ರಾಮಗಳಲ್ಲಿ ಸ್ಮಶಾನದ ಅವಶ್ಯಕತೆ ಇದ್ದಲ್ಲಿ ಸಂಬಂಧಪಟ್ಟ ಜಿಲ್ಲಾಧಿಕಾರಿಗಳಿಗೆ ಅಥವಾ ತಹಶೀಲ್ದಾರರಿಗೆ ಅರ್ಜಿ ಸಲ್ಲಿಸಲು ತಿಳಿಸಲಾಗಿದೆ.
ಸರ್ಕಾರಿ ಜಮೀನು ಒತ್ತುವರಿ ಬಗ್ಗೆ: ಸರ್ಕಾರಿ ಜಮೀನು, ಕೆರೆ, ಕಟ್ಟೆ, ಕುಂಟೆ, ಹಳ್ಳ, ಸರೋವರ ಮತ್ತು ಇನ್ನಿತರೆ ಜಲಕಾಯ / ಜಲಮೂಲಗಳೆಂದು ವರ್ಗೀಕೃತವಾದ ಜಮೀನುಗಳನ್ನು ಗ್ರಾಮ ನಕಾಶೆಯಲ್ಲಿ ರಸ್ತೆ, ಬೀದಿ, ಬಂಡಿದಾರಿ, ಓಣಿ ಅಥವಾ ಹಾದಿ ಎಂದು ನಮೂದಾಗಿರುವ ಇತರೆ ಎಲ್ಲಾ ಸರ್ಕಾರಿ ಜಮೀನುಗಳು ಒತ್ತುವರಿಯಾಗಿದ್ದಲ್ಲಿ ಸಾರ್ವಜನಿಕರು ಸಂಬಂಧಪಟ್ಟ ಜಿಲ್ಲಾಧಿಕಾರಿಗಳಿಗೆ ಅಥವಾ ತಹಸೀಲ್ದಾರ್ ಗೆ ದೂರು ನೀಡಲು ತಿಳಿಸಲಾಗಿದೆ.
Be the first to comment on "ಎಲ್ಲ ಗ್ರಾಮ, ನಗರ ಪ್ರದೇಶಗಳಲ್ಲಿ ಸ್ಮಶಾನಕ್ಕೆ ಭೂಮಿ ನಿಗದಿ"