ಬಂಟ್ವಾಳ: ಬಂಟ್ವಾಳ ತಾಲೂಕಿನ ಅಮ್ಟಾಡಿ ಗ್ರಾಮದ ಅಜೆಕಲ ಎಂಬಲ್ಲಿ ವಿಶ್ವಕರ್ಮ ಸಭಾಭವನದಲ್ಲಿ ನಿಯೋಜಿಸಲಾಗಿದ್ದ ತಹಸೀಲ್ದಾರ್ ಗ್ರಾಮವಾಸ್ತವ್ಯವನ್ನು ರದ್ದುಗೊಳಿಸಲಾಗಿದೆ. ಶನಿವಾರ ಗ್ರಾಮವಾಸ್ತವ್ಯ ನಿಗದಿಯಾಗಿತ್ತು. ಜಿಲ್ಲೆಯಲ್ಲಿ ಹೆಚ್ಚು ಮಳೆಯಾಗುತ್ತಿರುವುದರಿಂದ ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ ರದ್ದುಪಡಿಸಿ ಆದೇಶವಾಗಿದ್ದು, ಬಂಟ್ವಾಳ ತಾಲೂಕಿನಲ್ಲೂ ರದ್ದುಪಡಿಸಲಾಗಿದೆ ಎಂದು ತಹಸೀಲ್ದಾರ್ ಪ್ರಕಟಣೆ ತಿಳಿಸಿದೆ.
ರಾಜ್ಯದ ಹಲವು ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗುತ್ತಿರುವುದರಿಂದ ಪ್ರಕೃತಿ ವಿಕೋಪಕ್ಕೆ ತುತ್ತಾದ ಸಂತ್ರಸ್ತರನ್ನು ತಾತ್ಕಾಲಿಕವಾಗಿ ಕಾಳಜಿ ಕೇಂದ್ರಗಳಿಗೆ ಸ್ಥಳಾಂತರಿಸುವ, ಪರಿಹಾರ ವಿತರಿಸುವ ಹಾಗೂ ನಷ್ಟ ಅಂದಾಜಿಸುವ ಕಾರ್ಯದಲ್ಲಿ ಜಿಲ್ಲಾಡಳಿತ ಕಾರ್ಯಪ್ರವೃತ್ತವಾಗಬೇಕಿದೆ. ಈ ನಿಟ್ಟಿನಲ್ಲಿ ಗ್ರಾಮ ವಾಸ್ತವ್ಯ ಕಾರ್ಯಕ್ರಮ ನಡೆಸಲು ತೊಂದರೆಯಾಗುತ್ತಿರುದರಿಂದ ಹೆಚ್ಚು ಮಳೆಯಾಗುತ್ತಿರುವ ದಕ್ಷಿಣ ಕನ್ನಡ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಜು.16ರಂದು ಹಮ್ಮಿಕೊಂಡಿದ್ದ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಅಭಿಯಾನಕ್ಕೆ ಜುಲೈ ತಿಂಗಳಲ್ಲಿ ವಿನಾಯಿತಿ ನೀಡಲಾಗಿದೆ ಎಂದು ಕಂದಾಯ ಇಲಾಖೆಯ ಉಪ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.