ಮಂಗಳವಾರ ರಾತ್ರಿ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ದ.ಕ. ಜಿಲ್ಲಾ ಬಿಜೆಪಿ ಯುವ ಮೋರ್ಚಾ ಕಾರ್ಯಕಾರಿಣಿ ಸದಸ್ಯ ಪ್ರವೀಣ್ ನೆಟ್ಟಾರ್ (32) ಅವರನ್ನು ದುಷ್ಕರ್ಮಿಗಳು ಹತ್ಯೆ ನಡೆಸಿದ್ದು, ಅವರ ಕೊಲೆಗೆ ಸಂಬಂಧಿಸಿದ ಆರೋಪಿಗಳನ್ನು ತಕ್ಷಣ ಬಂಧಿಸುವಂತೆ ಆಗ್ರಹಿಸಿ ಹಿಂದೂ ಸಂಘಟನೆಗಳು ಬುಧವಾರ ಸುಳ್ಯ, ಕಡಬ ಮತ್ತು ಪುತ್ತೂರು ತಾಲೂಕಿನಲ್ಲಿ ಸ್ವಯಂ ಪ್ರೇರಿತ ಬಂದ್ ನಡೆಸುವಂತೆ ಕರೆ ನೀಡಿವೆ.ಈ ಹಿನ್ನೆಲೆಯಲ್ಲಿ ಪರಿಸ್ಥಿತಿ ನಿಯಂತ್ರಿಸಲು ಪುತ್ತೂರು, ಸುಳ್ಯ, ಕಡಬ ತಾಲೂಕಿನಲ್ಲಿ ನಿಷೇಧಾಜ್ಞೆ ವಿಧಿಸಲಾಗಿದೆ.
ಮಂಗಳವಾರ ರಾತ್ರಿ 9 ಗಂಟೆಗೆ ಬೈಕ್ ನಲ್ಲಿ ಬಂದ ಅಪರಿಚಿತ ತಂಡ ಬೆಳ್ಳಾರೆ ಪೆಟ್ರೋಲ್ ಪಂಪ್ ಬಳಿಯ ಮಾಸ್ತಿಕಟ್ಟೆ ಎಂಬಲ್ಲಿ ದಾಳಿ ನಡೆಸಿದ್ದು, ತಲವಾರಿನಿಂದ ಪ್ರವೀಣ್ ಅವರ ತಲೆಗೆ ಕಡಿದು ಪರಾರಿ ಆಗಿದೆ. ಗಂಭೀರ ಗಾಯಗೊಂಡ ಅವರನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಅವರು ಮೃತಪಟ್ಟಿದ್ದಾರೆ. ಅವರ ಮೃತ ಶರೀರವನ್ನು ಪುತ್ತೂರು ಖಾಸಗಿ ಆಸ್ಪತ್ರೆಯಿಂದ ಸರಕಾರಿ ಆಸ್ಪತ್ರೆಗೆ ಸ್ಥಳಾಂತರಿಸುವ ಸಂದರ್ಭ ಹಿಂದು ಸಂಘಟನೆಗಳ ಕಾರ್ಯಕರ್ತರು ಆಸ್ಪತ್ರೆ ಎದುರು ಪ್ರತಿಭಟನೆ ನಡೆಸಿದ್ದರು. ಜಿಲ್ಲಾಧಿಕಾರಿಗಳು ಬಾರದೆ ಶವ ಕೊಂಡೊಯ್ಯಲು ಬಿಡುವುದಿಲ್ಲ ಎಂದು ಪಟ್ಟು ಹಿಡಿದರು. ಬಳಿಕ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಪುತ್ತೂರಿಗೆ ಆಗಮಿಸಿ ಮುಖಂಡರ ಜತೆ ಮಾತುಕತೆ ನಡೆಸಿ ಆರೋಪಿಗಳನ್ನು ಶೀಘ್ರ ಬಂಧಿಸಲಾಗುವುದು ಎಂದು ಆಶ್ವಾಸನೆ ನೀಡಿದರು.
Be the first to comment on "ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರ್ ಹತ್ಯೆ: ಇಂದು ಪುತ್ತೂರು, ಸುಳ್ಯ, ಕಡಬ ಸ್ವಯಂಪ್ರೇರಿತ ಬಂದ್ ಗೆ ಹಿಂದು ಸಂಘಟನೆಗಳ ಕರೆ"