ಒತ್ತಾಯದಿಂದ ಭಾಷೆ ಉಳಿಸಲು ಸಾಧ್ಯವಿಲ್ಲ, ಅದರ ಮೇಲೆ ಪ್ರೀತಿ ಇದ್ದಾಗ ಭಾಷೆ ಅಭಿವೃದ್ಧಿಗೊಳ್ಳುತ್ತದೆ, ಉಳಿಯುತ್ತದೆ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಹೇಳಿದರು.
ಬಂಟ್ವಾಳ ಆಡಳಿತ ಸೌಧದಲ್ಲಿ ಮಂಗಳವಾರ ತಾಲೂಕು ಆಡಳಿತ ಮತ್ತು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ನಡೆದ 67ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ದಕ್ಷಿಣ ಕನ್ನಡದಲ್ಲಿ ತುಳು, ಕೊಂಕಣಿ, ಬ್ಯಾರಿ ಮಾತೃಭಾಷೆಯವರು ಅಧಿಕವಿದ್ದರೂ ಕನ್ನಡದ ಮೇಲೆ ಅಭಿಮಾನವಿರುವ ಕಾರಣ, ಸ್ಪಷ್ಟವಾಗಿ ಮಾತನಾಡುವ ಮೂಲಕ ಕನ್ನಡ ಭಾಷೆಯನ್ನು ಬೆಳೆಸುವ ಕಾರ್ಯ ಮಾಡುತ್ತಿದ್ದೇವೆ ಎಂದರು.
ತಹಸೀಲ್ದಾರ್ ಡಾ. ಸ್ಮಿತಾ ರಾಮು ಧ್ವಜಾರೋಹಣ ನೆರವೇರಿಸಿ ಮಾತನಾಡಿ, ಕರ್ನಾಟಕವು ಕಲೆ, ಶಿಲ್ಪದ ಬೀಡಾಗಿದ್ದು, ಹಲವರ ಪರಿಶ್ರಮದಿಂದ ರಾಜ್ಯೋದಯವಾಗಿದೆ ಎಂದರು.
ಕನ್ನಡ ಭಾಷೆ, ಬೆಳವಣಿಗೆ ಮತ್ತು ಅದನ್ನು ಉಳಿಸುವ ಕುರಿತು ರಮೇಶ್ ಮೇಲ್ಕಾರ್ ಮಾತನಾಡಿದರು.
ಬಂಟ್ವಾಳ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಬಿ.ದೇವದಾಸ ಶೆಟ್ಟಿ, ಡಿವೈಎಸ್ಪಿ ಪ್ರತಾಪ್ ಸಿಂಗ್ ಥೋರಾಟ್ ಈ ಸಂದರ್ಭ ಉಪಸ್ಥಿತರಿದ್ದರು. ತಾಲೂಕು ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಜಣ್ಣ ಸ್ವಾಗತಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಜ್ಞಾನೇಶ್ ವಂದಿಸಿದರು. ಹಿರಿಯ ಕಲಾವಿದ ಮಂಜು ವಿಟ್ಲ ಕಾರ್ಯಕ್ರಮ ನಿರ್ವಹಿಸಿದರು. ಶಾಲೆ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.