ಬಂಟ್ವಾಳ: ಮಂಗಳೂರಿನಲ್ಲಿ ನವೆಂಬರ್ 19 ಮತ್ತು 20ರಂದು ನಡೆಯುವ ಕನ್ನಡ ಹಬ್ಬಕ್ಕೆ ಸಂಬಂಧಿಸಿ ಬಂಟ್ವಾಳ ತಾಲೂಕಿನ ಸರಕಾರಿ ಶಾಲೆಗಳ ಮುಖ್ಯೋಪಾಧ್ಯಾಯರು ಮತ್ತು ಎಸ್.ಡಿ.ಎಂ.ಸಿ. ಅಧ್ಯಕ್ಷರ ಪೂರ್ವಭಾವಿ ಸಭೆ ಬಂಟ್ವಾಳದ ಸ್ಪರ್ಶ ಕಲಾ ಮಂದಿರದಲ್ಲಿ ಗುರುವಾರ ಶಾಸಕ ರಾಜೇಶ್ ನಾಯ್ಕ್ ಅಧ್ಯಕ್ಷತೆಯಲ್ಲಿ ನಡೆಯಿತು.
ಈ ಸಂದರ್ಭ ಮಾರ್ಗದರ್ಶನ ನೀಡಿದ ಕಾರ್ಯಕ್ರಮದ ಆಯೋಜಕರಲ್ಲೋರ್ವರಾದ ಜಿಪಂ ಮಾಜಿ ಉಪಾಧ್ಯಕ್ಷ ಸತೀಶ್ ಕುಂಪಲ, ಕಾರ್ಯಕ್ರಮದ ಕುರಿತು ಮಾಹಿತಿ ನೀಡಿದರು.
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಮಾತನಾಡಿ, ಕನ್ನಡ ಭಾಷಾ ಕಲಿಕೆಗೆ ಪೂರಕವಾಗಿ ಹಾಗೂ ಕನ್ನಡ ಭಾಷಾಭಿಮಾನ ಬೆಳೆಸುವ ದೃಷ್ಟಿಯಿಂದ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ತಿಳಿಸಿ, ಬಂಟ್ವಾಳ ಕ್ಷೇತ್ರದಲ್ಲಿ ಸರಕಾರಿ ಶಾಲೆ ಅಭಿವೃದ್ಧಿಗೆ ಹಲವು ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದರು. ಸರಕಾರಿ ಶಾಲೆ ಉಳಿಸಿ ಬೆಳೆಸಿ ಆಂದೋಲನದ ರಾಜ್ಯಾಧ್ಯಕ್ಷ ಪ್ರಕಾಶ್ ಅಂಚನ್, ಜಿಲ್ಲಾ ವಿದ್ಯಾಂಗ ಇಲಾಖೆ ಅಭಿವೃದ್ಧಿ ವಿಭಾಗ ಉಪನಿರ್ದೇಶಕಿ ರಾಜಲಕ್ಷ್ಮೀ, ಕ್ಷೇತ್ರ ಶಿಕ್ಷಣಾಧಿಕಾರಿ ಜ್ಞಾನೇಶ್, ಕ್ಷೇತ್ರ ಸಮನ್ವಯಾಧಿಕಾರಿ ರಾಘವೇಂದ್ರ ಬಲ್ಲಾಳ್ ಮತ್ತಿತರರು ಈ ಸಂದರ್ಭ ಉಪಸ್ಥಿತರಿದ್ದರು.