ಕನ್ಯಾನ ಗ್ರಾಮದ ದೇಲಂತಬೆಟ್ಟು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಶ್ರೀ ದೇವರ ಪುನಃಪ್ರತಿಷ್ಠೆ, ಅಷ್ಟಬಂಧ ಬ್ರಹ್ಮಕಲಶ ಮಹೋತ್ಸವವು ಫೆ.೬ರಿಂದ ಫೆ.೧೬ರ ವರೆಗೆ ವಿವಿಧ ವೈದಿಕ, ತಾಂತ್ರಿಕ, ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ ಎಂದು ಸಮಿತಿಯ ಗೌರವಾಧ್ಯಕ್ಷ, ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿ ತಿಳಿಸಿದರು.
ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು, ಮಾಣಿಲ ಶ್ರೀಧಾಮದ ಶ್ರೀ ಮಹಾಲಕ್ಷ್ಮೀ ಕ್ಷೇತ್ರದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಮಾತನಾಡಿ, ಫೆ.೫ರಂದು ಸಂಜೆ ೩ ಗಂಟೆಗೆ ಒಡಿಯೂರು ಕ್ಷೇತ್ರದಿಂದ ಹೊರೆಕಾಣಿಕೆ ಮೆರವಣಿಗೆಯು ಹೊರಡಲಿದ್ದು ಶ್ರೀ ಗುರುದೇವಾನಂದ ಸ್ವಾಮೀಜಿ ಚಾಲನೆ ನೀಡಲಿದ್ದಾರೆ. ಸಂಜೆ ಗಂಟೆ ೬.೩೦ಕ್ಕೆ ಉಗ್ರಾಣ ಮುಹೂರ್ತ ನೆರವೇರಲಿದೆ ಎಂದರು.
ಕಣಿಯೂರು ಶ್ರೀ ಚಾಮುಂಡೇಶ್ವರೀ ಕ್ಷೇತ್ರದ ಶ್ರೀ ಮಹಾಬಲೇಶ್ವರ ಸ್ವಾಮೀಜಿ ಮಾತನಾಡಿ, ಸರ್ವರೂ ಅತ್ಯುತ್ತಮವಾಗಿ ಸೇವೆ ಸಲ್ಲಿಸಿ, ದೊಡ್ಡದಾದ ಕಾರ್ಯ ಮಾಡಿದ್ದಾರೆ ಎಂದರು.
ಬ್ರಹ್ಮಕಲಶ ಸಮಿತಿ ಅಧ್ಯಕ್ಷ ಡಿ.ಚಂದಪ್ಪ ಮೂಲ್ಯ, ಪ್ರಧಾನ ಕಾರ್ಯದರ್ಶಿ ಬಾಲಕೃಷ್ಣ ರಾವ್ ಎಂ. ಅವರು ಬ್ರಹ್ಮಕಲಶ ಸಂಭ್ರಮದ ವಿವರ ನೀಡಿದರು. ಕಾರ್ಯಾಧ್ಯಕ್ಷ ಕೆ.ಆರ್.ಕುಮಾರ್, ಕೋಶಾಧಿಕಾರಿ ಗೋಪಾಲಕೃಷ್ಣ ಶರ್ಮ ದೇಲಂತಬೆಟ್ಟು, ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಮನೋಜ್ ಕುಮಾರ್ ಬನಾರಿ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಡಿ.ರಾಮ ದೇಲಂತಬೆಟ್ಟು ಮತ್ತಿತರರು ಉಪಸ್ಥಿತರಿದ್ದರು.