ಬಂಟ್ವಾಳ: ಅಭಿವೃದ್ಧಿ ಕಾರ್ಯಗಳ ಆಧಾರದಲ್ಲಿ ಸ್ಪರ್ಧೆಗಿಳಿದಿದ್ದು, ಏಪ್ರಿಲ್ 20ರಂದು ನಾಮಪತ್ರ ಸಲ್ಲಿಸಲಿದ್ದೇನೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ. ಬಂಟ್ವಾಳ ಕ್ಷೇತ್ರದಲ್ಲಿ 9ನೇ ಬಾರಿ ಸ್ಪರ್ಧೆಗಿಳಿದಿರುವ ರೈ, ಬಂಟ್ವಾಳ ಕಾಂಗ್ರೆಸ್ ಚುನಾವಣಾ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಸೋಮವಾರ ಮಾತನಾಡಿದರು.
ಗುರುವಾರ ಬೆಳಿಗ್ಗೆ 9 ಗಂಟೆಗೆ ಬಂಟ್ವಾಳ ತಿರುಮಲ ವೆಂಕಟರಮಣ ದೇವಸ್ಥಾನದ ಬಳಿಯಿಂದ ಪಾದಯಾತ್ರೆಯ ಮೂಲಕ ಮೆರವಣಿಗೆ ಹೊರಟು, ಮಧ್ಯಾಹ್ನ 12:35ಕ್ಕೆ ಮಿನಿ ವಿಧಾನಸೌಧದಲ್ಲಿರುವ ಚುನಾವಣಾ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಲಾಗುವುದು ಎಂದು ಅವರು ವಿವರಿಸಿದರು.
ಬಿ.ಸಿ. ರೋಡ್ ನಲ್ಲಿ ಬಂಟ್ವಾಳ ತಾಲೂಕು ಕೇಂದ್ರಕ್ಕೆ ಸಂಬಂಧಿಸಿದ ಎಲ್ಲಾ ಪ್ರಮುಖ ಕಟ್ಟಡಗಳು ತಮ್ಮ ಅವಧಿಯಲ್ಲಿ ನಿರ್ಮಿಸಲ್ಪಟ್ಟವು. ಮಿನಿವಿಧಾನಸೌಧ, ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣ, ಅಂಬೇಡ್ಕರ್ ಭವನ ಸಹಿತ ಹಲವು ಕಟ್ಟಡಗಳು, ಪುರಸಭೆ ವ್ಯಾಪ್ತಿಯ ಬಹುತೇಕ ರಸ್ತೆಗಳು ತಮ್ಮ ಅವಧಿಯಲ್ಲಿ ಅಭಿವೃದ್ಧಿ ಪಡಿಸಲ್ಪಟ್ಟಿವೆ. ತಾವು ಆರಂಭಿಸಿರುವ ಹಲವಾರು ಅಭಿವೃದ್ಧಿ ಯೋಜನೆಗಳು ಇನ್ನೂ ಪೂರ್ಣಗೊಳ್ಳದೆ ನಿರ್ಲಕ್ಷಿಸಲ್ಪಟ್ಟಿವೆ ಎಂದರು.
ಕೆ.ಪಿ.ಸಿ.ಸಿ. ಸದಸ್ಯರುಗಳಾದ ಪಿಯೂಸ್ ರಾಡ್ರಿಗಸ್, ಚಂದ್ರಪ್ರಕಾಶ್ ಶೆಟ್ಟಿ, ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ, ಪ್ರಚಾರ ಸಮಿತಿ ಅಧ್ಯಕ್ಷ ಉಮೇಶ್ ಸಪಲ್ಯ, ಪ್ರಮುಖರಾದ ಪದ್ಮಶೇಖರ್ ಜೈನ್, ಸುರೇಶ್ ಬಿ. ನಾವೂರು, ಮಾಯಿಲಪ್ಪ ಸಾಲ್ಯಾನ್, ಸಂಜೀವ ಪೂಜಾರಿ, ಸುಭಾಶ್ಚಂದ್ರ ಶೆಟ್ಟಿ, ಜನಾರ್ಧನ ಚೆಂಡ್ತಿಮಾರ್, ನಾರಾಯಣ ನಾಯ್ಕ, ಅಬ್ಬಾಸ್ ಅಲಿ, ಪುರಸಭೆ ಅಧ್ಯಕ್ಷ ಮುಹಮ್ಮದ್ ಶರೀಫ್, ಜಯಂತಿ ಪೂಜಾರಿ, ಪುರಸಭೆ ಸದಸ್ಯರುಗಳಾದ ವಾಸು ಪೂಜಾರಿ, ಸಿದ್ದೀಕ್ ಗುಡ್ಡೆಯಂಗಡಿ ಮುಂತಾದವರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.