ಮತದಾರರ ಗೌರವಕ್ಕೆ ಚ್ಯುತಿ ಬಾರದಂತೆ ಈ ಹಿಂದೆಯೂ ಕೆಲಸ ಮಾಡಿದ್ದು, ಮುಂದೆ ಆಯ್ಕೆಯಾದರೂ ಮತದಾರರ ಗೌರವ ಕಾಪಾಡುವ ಕಾರ್ಯ ಮಾಡುತ್ತೇನೆ. ಬಂಟ್ವಾಳವನ್ನು ಅಭಿವೃದ್ಧಿಯ ವಿಷಯದಲ್ಲಿ ಗುರುತಿಸಲ್ಪಡುವಂಥ ಕೆಲಸ ಮಾಡುತ್ತೇನೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ.
ತನ್ನ ಬೆಂಬಲಿಗರು, ಅಭಿಮಾನಿಗಳು, ಹಿತೈಷಿಗಳು, ಕಾರ್ಯಕರ್ತರೊಂದಿಗೆ ಮೆರವಣಿಗೆಯಲ್ಲಿ ಬಂಟ್ವಾಳದಿಂದ ಹೆಜ್ಜೆ ಹಾಕಿ ಬಿ.ಸಿ.ರೋಡಿನ ಫ್ಲೈಓವರ್ ಬಳಿ ಕಾರ್ಯಕರ್ತರನ್ನು ಉದ್ದೇಶಿಸಿ ಅವರು ಮಾತನಾಡಿದರು. ಇದಕ್ಕೂ ಮೊದಲು ಅವರು ಪೊಳಲಿ, ನಂದಾವರ, ಮೊಡಂಕಾಪು, ಮಿತ್ತಬೈಲ್ ಸಹಿತ ಹಲವು ಪ್ರಾರ್ಥನಾ ಮಂದಿರಗಳಿಗೆ ತೆರಳಿ ಪೂಜೆ ಸಲ್ಲಿಸಿದರು.
ಮಧ್ಯಾಹ್ನ 12.35ಕ್ಕೆ ಸರಿಯಾಗಿ ಮಾಜಿ ಸಚಿವ ಬಿ.ರಮಾನಾಥ ರೈ ಅವರು ಬಂಟ್ವಾಳ ಆಡಳಿತ ಸೌಧದಲ್ಲಿರುವ ಚುನಾವಣಾಧಿಕಾರಿ ಕಚೇರಿಗೆ ತೆರಳಿ ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಸಿದರು. ಈ ಸಂದರ್ಭ ಕೆ.ಪಿ.ಸಿ.ಸಿ. ಸದಸ್ಯ ಪಿಯುಸ್ ಎಲ್. ರೋಡ್ರಿಗಸ್, ಗೇರು ಅಭಿವೃದ್ಧಿ ನಿಗಮ ಮಾಜಿ ಅಧ್ಯಕ್ಷ ಬಿ.ಎಚ್.ಖಾದರ್, ಕೆಪಿಸಿಸಿ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ, ಸೂಚಕರಾಗಿ ಬೇಬಿ ಕುಂದರ್ ಉಪಸ್ಥಿತರಿದ್ದರು.
ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್, ಪುತ್ತೂರಿನ ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ಮಂಜೇಶ್ವರ ಶಾಸಕ ಅಶ್ರಫ್, ಕೇರಳದ ನ್ಯಾಯವಾದಿ ಗೋವಿಂದನ್, ನ್ಯಾಯವಾದಿ ಅಶ್ವನಿ ಕುಮಾರ್ ರೈ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದರು.ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ವಿಧಾನಪರಿಷತ್ ಮಾಜಿ ಸದಸ್ಯ ಐವನ್ ಡಿಸೋಜಾ, ಪುತ್ತೂರು ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬೇಬಿ ಕುಂದರ್, ಸುದೀಪ್ ಕುಮಾರ್ ಶೆಟ್ಟಿ, ಕೆಪಿಸಿಸಿ ಸದಸ್ಯರಾದ ಪಿಯೂಸ್ ಎಲ್. ರೋಡ್ರಿಗಸ್, ಚಂದ್ರಪ್ರಕಾಶ್ ಶೆಟ್ಟಿ, ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷೆ ಮಮತಾ ಗಟ್ಟಿ, ಪ್ರಮುಖರಾದ ಎಂ.ಎಸ್. ಮುಹಮ್ಮದ್, ಪದ್ಮಶೇಖರ್ ಜೈನ್, ಮಾಯಿಲಪ್ಪ ಸಾಲ್ಯಾನ್, ಜನಾರ್ಧನ ಚೆಂಡ್ತಿಮಾರ್, ಅಬ್ಬಾಸ್ ಅಲಿ, ರಾಕೇಶ್ ಮಲ್ಲಿ, ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ಉಮೇಶ್ ಸಪಲ್ಯ, ನ್ಯಾಯವಾದಿ ಸುರೇಶ್ ಬಿ. ನಾವೂರ, ರೈಯವರ ಪತ್ನಿ ಧನಭಾಗ್ಯ ರೈ, ಸಹೋದರಿ ಚೆನ್ನವೇಣಿ ಎಂ. ಶೆಟ್ಟಿ, ಮಗಳು ಚರಿಷ್ಮಾ ರೈ, ಮತ್ತು ಪಕ್ಷದ ಎಲ್ಲಾ ಮುಂಚೂಣಿ ಘಟಕದ ಅಧ್ಯಕ್ಷರುಗಳು, ಪ್ರಮುಖರುಗಳು ಉಪಸ್ಥಿತರಿದ್ದರು. ಬಾಲಕೃಷ್ಣ ಆಳ್ವ ಕೊಡಾಜೆ ನಿರೂಪಿಸಿದರು. ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ ಧನ್ಯವಾದ ಸಲ್ಲಿಸಿದರು.