ಕಾಸರಗೋಡು, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಷ್ಟೇ ಅಲ್ಲ, ಉತ್ತರ ಕನ್ನಡವೂ ಸೇರಿದಂತೆ ಇಡೀ ಕನ್ನಡ ಕರಾವಳಿಯಲ್ಲಿ ಮಳೆ ಇನ್ನಿಲ್ಲದಂತೆ ಸುರಿಯುತ್ತಿದ್ದು, ಆರೆಂಜ್, ರೆಡ್ ಅಲರ್ಟ್ ಘೋಷಣೆಯಾಗಿದೆ. ನಾಲ್ಕು ಜಿಲ್ಲೆಗಳ ಜಿಲ್ಲಾಧಿಕಾರಿಗಳು ನಾಳೆ ಮುಂಜಾಗರೂಕತಾ ಕ್ರಮವಾಗಿ ರಜೆ ಘೋಷಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿಪೂರ್ವ ಕಾಲೇಜು, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ರಜೆಯನ್ನು ಜಿಲ್ಲಾಧಿಕಾರಿ ಮುಲೈ ಮುಗಿಲನ್ ಘೋಷಿಸಿದ್ದಾರೆ.
ಕಾಸರಗೋಡು ಜಿಲ್ಲೆಯಲ್ಲಿ ರೆಡ್ ಅಲರ್ಟ್ ಮುಂದುವರಿದಿದ್ದು, ಜುಲೈ 07ರಂದು ವೃತ್ತಿಪರ ಕಾಲೇಜುಗಳು ಸೇರಿದಂತೆ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ಜಿಲ್ಲಾಧಿಕಾರಿ ಕೆ. ಇಂಬಾಶೇಖರ್ ರಜೆ ಘೋಷಿಸಿದ್ದಾರೆ. ಆದರೆ ಪೂರ್ವ ನಿಗದಿತ ಪರೀಕ್ಷೆಗಳು ಮತ್ತು ಸಂದರ್ಶನಗಳಿಗೆ ಯಾವುದೇ ಬದಲಾವಣೆ ಇಲ್ಲ. ಉಡುಪಿ ಜಿಲ್ಲಾದ್ಯಂತ ಎಲ್ಲಾ ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಭಾರಿ ಮಳೆ ಹಿನ್ನೆಲೆಯಲ್ಲಿ ಜು.7ರ ಶುಕ್ರವಾರ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೂರ್ಮಾ ರಾವ್ ತಿಳಿಸಿದ್ದಾರೆ. ಉತ್ತರ ಕನ್ನಡದಲ್ಲೂ ರಜೆ ಮುಂದುವರಿದಿದೆ.ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿ ತೀರ, ಸಮುದ್ರ ತೀರಕ್ಕೆ ಮಕ್ಕಳು ಹೋಗದಂತೆ ಪಾಲಕರು ಜಾಗ್ರತೆ ವಹಿಸುವುದು. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.