ಕೆಲ ದಿನಗಳ ಹಿಂದೆ ಬಂಟ್ವಾಳ ತಾಲೂಕಿನ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲಾದ ದಲಿತ ಬಾಲಕಿಯೊಬ್ಬಳ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ ಎಂಬ ದೂರಿನನ್ವಯ ಐವರನ್ನು ಬಂಧಿಸಲಾಗಿದ್ದು, ಈ ವಿಷಯಕ್ಕೆ ಸಂಬಂಧಿಸಿ ಬಂಟ್ವಾಳದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಸಚಿವ ರಮಾನಾಥ ರೈ, ಘಟನೆಯನ್ನು ಖಂಡಿಸಿದ್ದಾರೆ.
ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಾಣೆಮಂಗಳೂರು ಬ್ಲಾಕ್ ಮತ್ತು ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಈ ಘಟನೆಯನ್ನು ಬಲವಾಗಿ ಖಂಡಿಸುತ್ತದೆ. ಇಂಥ ಕೃತ್ಯ ಎಸಗುವವರ ವಿರುದ್ಧ ಎಲ್ಲರೂ ದನಿ ಎತ್ತಬೇಕು, ಬಿಜೆಪಿ ನಾಯಕರು ಯಾಕೆ ಸುಮ್ಮನಿದ್ದಾರೆ ಎಂದು ಪ್ರಶ್ನಿಸಿದ ಅವರು, ಇದು ನಾಗರಿಕ ಸಮಾಜ ತಲೆತಗ್ಗಿಸುವ ಘಟನೆ ಎಲ್ಲರೂ ಇಂಥ ವಿಚಾರಗಳ ಕುರಿತು ಗಂಭೀರವಾಗಿ ಆಲೋಚಿಸಬೇಕು. ಇದರ ಕುರಿತು ಪೊಲೀಸರು ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು ಎಂದರು.
ಗೂಂಡಾಗಿರಿ ವಿರುದ್ಧ ಎಲ್ಲರೂ ಧ್ವನಿ ಎತ್ತಲಿ:
ಸಮಾಜದ ರಕ್ಷಣೆ ಮಾಡಬೇಕಾದ ಪೊಲೀಸರ ಮೇಲೆಯೇ ಗೂಂಡಾಗಿರಿಯನ್ನು ಮಾಡಲಾಗುತ್ತಿದೆ, ಎಂದು ಆರೋಪಿಸಿದ ರಮಾನಾಥ ರೈ, ಇಂಥ ಘಟನೆಗಳು ಸಾಮಾಜಿಕ ಅಶಾಂತಿಗೆ ಕಾರಣವಾಗುತ್ತದೆ ಎಂದು ಹೇಳಿ, ಎಲ್ಲರೂ ಈ ಕುರಿತು ಧ್ವನಿ ಎತ್ತಬೇಕು, ಹೊಸ ಸರಕಾರ ಬಂದ ಮೇಲೆ ಕಠಿಣ ಕ್ರಮ ಕೈಗೊಳ್ಳುವ ಕಾರ್ಯವಾಗುತ್ತಿದೆ ಎಂದರು. ಮಾದಕ ದ್ರವ್ಯ ಸೇವನೆ, ಅದರ ಹಿಂದಿರುವ ಬೇರುಗಳ ವಿರುದ್ಧ ದೊಡ್ಡದೊಂದು ಅಭಿಯಾನವೇ ಆಗಬೇಕು ಎಂದು ಹೇಳಿದ ರೈ ಇಡೀ ಸಮಾಜ ಒಟ್ಟಾಗಿ ಕಾರ್ಯಪ್ರವೃತ್ತರಾಗಿ ಉತ್ತಮ ಸಮಾಜ ನಿರ್ಮಾಣ ಮಾಡಬೇಕು ಎಂದರು.
ಸುದ್ದಿಗೋಷ್ಠಿಯಲ್ಲಿ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್, ಪಾಣೆಮಂಗಳೂರು ಬ್ಲಾಕ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ, ಜಿಪಂ ಮಾಜಿ ಸದಸ್ಯ ಚಂದ್ರಪ್ರಕಾಶ ಶೆಟ್ಟಿ ತುಂಬೆ, ತಾಪಂ ಮಾಜಿ ಉಪಾಧ್ಯಕ್ಷ ಬಿ.ಎಂ.ಅಬ್ಬಾಸ್ ಆಲಿ, ಪುರಸಭಾ ಮಾಜಿ ಅಧ್ಯಕ್ಷ ಮಹಮ್ಮದ್ ಶರೀಫ್, ಬುಡಾ ಮಾಜಿ ಅಧ್ಯಕ್ಷ ಸದಾಶಿವ ಬಂಗೇರ, ಮಾಣಿ ಗ್ರಾಪಂ ಅಧ್ಯಕ್ಷ ಬಾಲಕೃಷ್ಣ ಆಳ್ವ, ಯುವ ಕಾಂಗ್ರೆಸ್ ಮುಖಂಡರಾದ ಸುರೇಶ್ ಜೋರಾ, ಇಬ್ರಾಹಿಂ ನವಾಜ್ ಬಡಕಬೈಲ್ ಉಪಸ್ಥಿತರಿದ್ದರು.