ಬಂಟ್ವಾಳ: ಬ್ರಹ್ಮಶ್ರೀ ನಾರಾಯಣ ಗುರುಗಳ ಜೀವನ ಸಂದೇಶ, ತತ್ವಾದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡಾಗ ಅವರ ಜನ್ಮದಿಚಾರಣೆ ಅರ್ಥಪೂರ್ಣವಾಗುತ್ತದೆ ಎಂದು ಪತ್ರಕರ್ತ ಸಂದೀಪ್ ಸಾಲ್ಯಾನ್ ಹೇಳಿದರು.
ಯುವವಾಹಿನಿ ಬಂಟ್ವಾಳ ತಾಲೂಕು ಘಟಕ ಇದರ ಆಶ್ರಯದಲ್ಲಿ ಬೆಂಜನಪದವಿನಲ್ಲಿರುವ ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಸಮಾಜ ಕಲ್ಯಾಣ ಇಲಾಖೆಯ ವಸತಿ ಶಾಲೆಯಲ್ಲಿ ಗುರುವಾರ ನಡೆದ ಬ್ರಹ್ಮಶ್ರೀ ನಾರಾಯಣ ಗುರುವರ್ಯರ 169 ನೇ ಜನ್ಮದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ನಾರಾಯಣ ಗುರುಗಳು ಅಂದಿನ ಕಾಲದಲ್ಲಿ ಸಮಾಜದಲ್ಲಿದ್ದ ಜಾತಿ ಪದ್ದತಿ, ಅಸ್ಪ್ರಶ್ಯತೆ, ಅಸಮಾನತೆಯನ್ನು ತೊಡೆದು ಹಾಕಿ ಶೋಷಿತ, ದುರ್ಬಲ ವರ್ಗದವರ ಏಳಿಗೆಗಾಗಿ ಮೌನ ಕ್ರಾಂತಿ ಮಾಡಿದ ಶ್ರೇಷ್ಠ ದಾರ್ಶನಿಕ, ಅವರು ತೋರಿದ ಹಾದಿಯಲ್ಲಿ ಸಾಗಿ ಮಾನವೀಯ ಮೌಲ್ಯವನ್ನು ಜೀವನದಲ್ಲಿ ಅಳವಡಿಸಿಕೊಳ್ಳುವುದರೊಂದಿಗೆ ಸಮಾಜದಲ್ಲಿರುವ ಪ್ರತಿಯೊಬ್ಬರಲ್ಲೂ ಮಾನವ ಧರ್ಮವನ್ನು ಕಂಡಾಗ ಗುರುಗಳ ಆದರ್ಶ ಪಾಲನೆಯಾದಂತಾಗುತ್ತದೆ ಎಂದು ತಿಳಿಸಿದರು.
ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ರೋಟರಿ ಕ್ಲಬ್ ಬಿ.ಸಿ.ರೋಡು ಸಿಟಿಯ ಪೂರ್ವಾಧ್ಯಕ್ಷ ಸತೀಶ್ ಕುಮಾರ್ ಮಾತನಾಡಿ ಯುವವಾಹಿನಿ, ವಸತಿ ಶಾಲೆಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿಯನ್ನು ಆಚರಿಸುವ ಮೂಲಕ ಶ್ಲಾಘನೀಯ ಕಾರ್ಯ ಮಾಡಿದೆ, ಗುರುಗಳ ತತ್ವಾದರ್ಶ ವಿದ್ಯಾರ್ಥಿ ಜೀವನದಲ್ಲಿಯೇ ಅಳವಡಿಕೊಂಡಾಗ ಉತ್ತಮ ಸಮಾಜ ನಿರ್ಮಾಣವಾಗಲು ಸಾಧ್ಯವಿದೆ ಎಂದು ತಿಳಿಸಿದರು.
ಯುವವಾಹಿನಿ ಬಂಟ್ವಾಳ ತಾಲೂಕು ಘಟಕದ ಅಧ್ಯಕ್ಷ ಹರೀಶ್ ಕೋಟ್ಯಾನ್ ಕುದನೆ ಅಧ್ಯಕ್ಷತೆ ವಹಿಸಿದ್ದರು. ಹಿರಿಯರಾದ ಒಮಯ್ಯ ಜೆ.ಕೋಟ್ಯಾನ್, ವಸತಿ ಶಾಲೆಯ ಮೇಲ್ವಿಚಾರಕ ಪ್ರಸಾದ್ ಶುಭ ಹಾರೈಸಿದರು. ನಾರಾಯಣಗುರು ತತ್ವ ಪ್ರಚಾರ ಅನುಷ್ಠಾನ ನಿರ್ದೇಶಕ ವಿಕ್ರಮ್ ಶಾಂತಿ ಉಪಸ್ಥಿತರಿದ್ದರು. ಯುವವಾಹಿನಿ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.ಯುವವಾಹಿನಿ ಬಂಟ್ವಾಳ ತಾಲೂಕು ಘಟಕದ ಉಪಾಧ್ಯಕ್ಷ ದಿನೇಶ್ ಸುವರ್ಣ ರಾಯಿ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಕಾರ್ಯದರ್ಶಿ ನಿಕೇಶ್ ಕೋಟ್ಯಾನ್ ಕಲ್ಲಡ್ಕ ವಂದಿಸಿದರು.
ಬ್ರಹ್ಮಶ್ರೀ ನಾರಾಯಣ ಗುರುವರ್ಯರ ಜನ್ಮದಿನಾಚರಣೆಯ ಪ್ರಯುಕ್ತ ವಸತಿ ಶಾಲೆಯ ಎಲ್ಲ ಮಕ್ಕಳಿಗೆ ಪುಸ್ತಕ, ಪೆನ್, ಪೆನ್ಸಿಲ್ ಹಾಗೂ ಹಣ್ಣುಗಳನ್ನು ವಿತರಿಸಲಾಯಿತು.
Be the first to comment on "ಯುವವಾಹಿನಿ ಬಂಟ್ವಾಳ ಘಟಕದಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ 169 ನೇ ಜಯಂತಿ ಆಚರಣೆ"