ಪ್ರಮುಖ ಸುದ್ದಿಗಳು

ಇಂದಿನಿಂದ ಎಲ್ಲಾ ಸರ್ಕಾರಿ ಶಾಲೆಗಳಿಗೆ ಉಚಿತ ನೀರು ಮತ್ತು ವಿದ್ಯುತ್: ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು: ಇಂದಿನಿಂದ ಎಲ್ಲಾ ಸರ್ಕಾರಿ ಶಾಲೆಗಳಿಗೆ ಉಚಿತ ನೀರು ಮತ್ತು ವಿದ್ಯುತ್ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು  ಘೋಷಣೆ ಮಾಡಿದರು.
ಶಾಲಾ ಶಿಕ್ಷಣ ಸಾಕ್ಷರತಾ ಇಲಾಖೆ ಕಂಠೀರವ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ 68 ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಕನ್ನಡ ಧ್ವಜಾರೋಹಣ ನೆರವೇರಿಸಿ  ಮಾತನಾಡಿದರು.
ಕಾರ್ಯಕ್ರಮದ ಯೂಟ್ಯೂಬ್ ಲಿಂಕ್ ಗೆ ಕ್ಲಿಕ್ ಮಾಡಿರಿ: https://www.youtube.com/watch?v=t1Bl-8uYYxg
ವರದಿ ಮುಂದೆ ಓದಿರಿ..
ಕನ್ನಡಿಗರನ್ನು ಆರ್ಥಿಕವಾಗಿ, ಸಾಮಾಜಿಕವಾಗಿ ಶಕ್ತಿಶಾಲಿಗಳನ್ನಾಗಿ ಮಾಡುವ ಜತೆಗೆ ಶಿಕ್ಷಣದ ಗುಣಮಟ್ಟ ಹೆಚ್ಚಿಸುವ, ಕನ್ನಡ ಶಾಲೆಗಳ ಮೂಲಭೂತ ಸವಲತ್ತುಗಳನ್ನು ಹೆಚ್ಚಿಸಲು ನಮ್ಮ ಸರ್ಕಾರ ನಿರಂತರವಾಗಿ ಶ್ರಮಿಸುತ್ತಿದೆ ಎಂದರು.
ದೇವರಾಜು ಅರಸು ಅವರು ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ಹೆಸರಿಟ್ಟು 50 ವರ್ಷಗಳು ತುಂಬಿವೆ. ಈ ದಿನ ನಾವು ಒಂದು ಪ್ರತಿಜ್ಞೆ ಮಾಡೋಣ. ಕನ್ನಡದಲ್ಲೇ ವ್ಯವಹರಿಸುವ ಪ್ರತಿಜ್ಞೆಯನ್ನು ನಾವು ಮಾಡುವ ಮೂಲಕ ನಮ್ಮ ತಾಯ್ನೆಲದ ಋಣ ತೀರಿಸುವ ಕೆಲಸ ಮಾಡೋಣ. ಇಲ್ಲಿ ವಾಸ ಮಾಡುವ ಪ್ರತಿಯೊಬ್ಬರೂ ಕನ್ನಡದ ವಾತಾವರಣವನ್ನು ಸೃಷ್ಟಿಸಬೇಕು, ಸಂಭ್ರಮಿಸಬೇಕು ಎಂದು ಕರೆ ನೀಡಿದರು.
ಕನ್ನಡ ನೆಲದಲ್ಲಿದ್ದೂ ಕನ್ನಡ ಮಾತನಾಡದವರು ಹಲವು ಭಾಗಗಳಲ್ಲಿ ಇದ್ದಾರೆ. ನಮ್ಮ ಆಡಳಿತ ಭಾಷೆ ಕನ್ನಡ. ಆದ್ದರಿಂದ ನಾವು ಕನ್ನಡದಲ್ಲೇ ವ್ಯವಹರಿಸಬೇಕು. ಪ್ರತಿಯೊಬ್ಬರ, ಪ್ರತಿಯೊಂದು ಭಾಷೆಗೂ ನಾವು ಗೌರವ ಕೊಡಬೇಕು. ಆದರೆ ನಮ್ಮ ನಾಡಿನಲ್ಲಿ ವ್ಯವಹರಿಸುವಾಗ, ಆಡಳಿತದಲ್ಲಿ ಕನ್ನಡ ಬಳಕೆ ಆಗಬೇಕು. ಇದನ್ನು ಪ್ರತಿಯೊಬ್ಬ ಅಧಿಕಾರಿಯೂ ಚಾಚೂ ತಪ್ಪದೆ ಪಾಲಿಸಬೇಕು ಎಂದರು.
ಕೇಂದ್ರ ಸರ್ಕಾರ ಕರ್ನಾಟಕದಲ್ಲಿ ಇಂಗ್ಲಿಷ್, ಹಿಂದಿಯಲ್ಲಿ ಮಾತ್ರ ಸ್ಪರ್ಧಾತ್ಮಕ ಪರೀಕ್ಷೆ ನಡೆಸುವುದನ್ನು ಒಪ್ಪಲು ಸಾಧ್ಯವಿಲ್ಲ. ಕನ್ನಡದಲ್ಲೂ ಪ್ರವೇಶ ಪರೀಕ್ಷೆ ನಡೆಸಲು ಈ ಹಿಂದೆಯೂ ಒತ್ತಾಯಿಸಿದ್ದೆ. ಅಗತ್ಯಬಿದ್ದರೆ ಮತ್ತೆ ಕೇಂದ್ರಕ್ಕೆ ಪತ್ರ ಬರೆದು ಒತ್ತಾಯಿಸುತ್ತೇನೆ ಎಂದರು.
ಕನ್ನಡದಲ್ಲಿ ಕಲಿತರೆ ಉದ್ಯೋಗ ಸಿಗುವುದಿಲ್ಲ, ಜ್ಞಾನ ಸಂಪಾದನೆ ಸಾಧ್ಯವಿಲ್ಲ ಎನ್ನುವ ತಪ್ಪು ಕಲ್ಪನೆಯಿಂದ ಇಂಗ್ಲಿಷ್ ಕಾನ್ವೆಂಟ್ ವ್ಯಾಮೋಹ ಬೆಳೆಸಿಕೊಂಡಿದ್ದಾರೆ. ಇದು ಸರಿಯಲ್ಲ. ಸಮಾಜದ ಎಲ್ಲಾ ಕ್ಷೇತ್ರಗಳಲ್ಲೂ ಕನ್ನಡ ಮಾಧ್ಯಮದಲ್ಲಿ ಕಲಿತವರು ಉನ್ನತ ಹುದ್ದೆಗಳಲ್ಲಿ ಇದ್ದಾರೆ. ಉನ್ನತ ಮಟ್ಟದ ಸಾಧನೆ ಮಾಡಿದ್ದಾರೆ ಎಂದು ಉದಾಹರಿಸಿದರು.
ಗುಣಮಟ್ಟದ ಶಿಕ್ಷಣ ಮತ್ತು ಉತ್ತಮ ಕಲಿಕಾ ವಾತಾವರಣ ಹಾಗೂ ಶಾಲೆಗಳ ಗುಣಮಟ್ಟ ಹೆಚ್ಚಿಸುವುದು , ಅಗತ್ಯ ಎಲ್ಲಾ ಸವಲತ್ತುಗಳನ್ನು ಒದಗಿಸುವುದು ನಮ್ಮ ಸರ್ಕಾರದ ಆಧ್ಯತೆ ಎಂದರು.
ತಮ್ಮ ಮಕ್ಕಳನ್ನು ಅವರ ಇಷ್ಟದ ಭಾಷೆಯಲ್ಲಿ ಕಲಿಸುವುದು ಪೋಷಕರ ನಿರ್ಧಾರಕ್ಕೆ ಬಿಟ್ಟ ವಿಷಯ ಎಂದು ಸುಪ್ರೀಂಕೋರ್ಟ್ ಹೇಳಿದೆ. ಆದರೆ, ಮಾತೃಭಾಷೆಯ ಮಾಧ್ಯಮದಲ್ಲೇ ಕಲಿಯುವುದು ಅತ್ಯಂತ ವೈಜ್ಞಾನಿಕ ಎನ್ನುವುದನ್ನು ಗ್ರಹಿಸಬೇಕು ಎಂದರು.
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಪ್ರಾಥಮಿಕ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ, ಶಾಸಕ ರಿಜ್ಷಾನ್ ಹರ್ಷದ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.
Karnataka Cm Announces Free Water and Power To Government Schools
Kannada Rajyotsava News
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ